ಪ್ರಧಾನಮಂತ್ರಿ ನರೇಂದ್ರ ಮೋದಿ
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಅಧಿಸೂಚನೆ ಹೊರಬಿದ್ದ ಬಳಿಕ ಪ್ರಚಾರಾರ್ಥವಾಗಿ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಮಿಸುತ್ತಿದ್ದು, ಚಾಮರಾಜನಗರ, ಉಡುಪಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಪ್ರಚಾರ ಕಾರ್ಯಗಳನ್ನು ಮಂಗಳವಾರ ಆರಂಭಿಸುತ್ತಿದ್ದಾರೆ.
ಸಾಮಾನ್ಯವಾಗಿ ಚುನಾವಣೆಗೆ ಕೆಲವೇ ದಿನಗಳಿರುವಾ ಭರ್ಜರಿಯಾಗಿ ಸುತ್ತಾಟ ನಡೆಸುವ ಪರಿಪಾಠ ಬೆಳೆಸಿಕೊಂಡಿರುವ ಪ್ರಧಾನಿ ಮೋದಿಯವರು ಈ ಬಾಗಿ ಮೇ.1,3,5, 7 ಮತ್ತು ಮೇ.8 ರಂದು ರಾಜ್ಯಕ್ಕೆ ಆಗಮಿಸಲಿದ್ದು, 5 ದಿನಗಳಲ್ಲಿ ಒಟ್ಟಾರೆ 15 ರ್ಯಾಲಿಗಳಲ್ಲಿ ಭಾಗವಹಿಸಿದ್ದಾರೆ.
ಹಳೇ ಮೈಸೂರು ಭಾಗದಿಂದ ಬಿಜೆಪಿ ಚುನಾವಣಾ ಪ್ರಚಾರ ಆರಂಭಿಸಲಿರುವ ಪ್ರಧಾನಿ ಮೋದಿಯವರು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಸಂತೇಮರಹಳ್ಳಿಯಲ್ಲಿ ನಡೆಯಲಿರುವ ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳ ವಿಭಾಗೀಯ ಮಟ್ಟದ ಬೃಹತ್ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಲಿದ್ದಾರೆ.
25 ಎಕರೆ ವಿಶಾಲ ಪ್ರದೇಶದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ 1 ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ನಿರೀಕ್ಷೆಗಳಿವೆ.
ಸಂತೇಮರಹಳ್ಳಿಯಿಂದ ಕರಾವಳಿಯ ಕಡೆಗೆ ಪ್ರಯಾಣ ಬೆಳೆಸಲಿರುವ ಮೋದಿಯವರು ಮಧ್ಯಾಹ್ನ 2.50ಕ್ಕೆ ಉಡುಪಿಯ ಎಂಜಿಎಂ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯುವ ಬೃಹತ್ ಚುನಾವಣಾ ಪ್ರಚಾರದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡುತ್ತಾರೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಂದ ಒಟ್ಟು 50 ರಿಂದ 70 ಸಾವಿರದಷ್ಟು ಮಂದಿ ಸೇರುವ ನಿರೀಕ್ಷೆಯಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಅಲ್ಲಿಂದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಗೆ ತೆರಳಲಿರುವ ಮೋದಿಯವರು ಕೆಎಲ್ಇ ಸಂಸ್ಥೆಯ ಬಸವಪ್ರಭು ಕೋರೆ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ್ದಾರೆ. ಬೆಳಗಾವಿ ಜಿಲ್ಲೆಯಾದ್ಯಂತ 1 ಲಕ್ಷಕ್ಕೂ ಹೆಚ್ಚು ಜನರು ಸೇರಿವ ನಿರೀಕ್ಷೆಯಿದ್ದು, 1 ಲಕ್ಷ ಜನರಿಗೆ ಆಸನದ ವ್ಯವಸ್ಥೆಗಳನ್ನು ಮಾಡಲಾಗಿದೆ. ಇಲ್ಲಿ ಕಾರ್ಯಕ್ರಮವನ್ನು ಮುಗಿಸಿ ನೇರವಾಗಿ ರಾಜಧಾನಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics