ಬೀದರ್: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ಮುಖಂಡರು ಆರೋಪ ಪತ್ಯಾರೋಪಗಳಲ್ಲಿ ಮುಳುಗಿದ್ದಾರೆ.
ಇನ್ನು ತೀವ್ರ ಚರ್ಚೆಗೆ ಗ್ರಾಸವಾಗಿದ್ದು ಜಮ್ಮು ಮತ್ತು ಕಾಶ್ಮೀರದ ಕಥುವಾ ಬಾಲಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಕಾಂಗ್ರೆಸ್ ಕ್ಯಾಂಡಲ್ಲೈಟ್ ಮಾರ್ಚ್ ಮಾಡಿತ್ತು. ಆದರೆ ಕರ್ನಾಟಕದ ಬೀದರ್ ನಲ್ಲಿ ದಲಿತ ಬಾಲಕಿ ಮೇಲೆ ನಡೆಸಿದ ಅತ್ಯಾಚಾರವನ್ನು ಖಂಡಿಸಿ ಕಾಂಗ್ರೆಸ್ ಯಾಕೆ ಕ್ಯಾಂಡಲ್ಲೈಟ್ ಮಾರ್ಚ್ ಮಾಡಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡುವುದಾಗಿ ಹೇಳಿ ದಲಿತ ಓಟ್ ಬ್ಯಾಂಕ್ ನಿಂದಾಗಿ ಅಧಿಕಾರಕ್ಕೆ ಬಂದಿತ್ತು. ಆ ನಂತರ ಖರ್ಗೆ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡದೆ ಲೋಕಸಭಾ ವಿಪಕ್ಷ ನಾಯಕನ ಸ್ಥಾನ ನೀಡಿ ಕೈ ತೊಳೆದುಕೊಂಡಿತು ಎಂದು ಮೋದಿ ಆರೋಪಿಸಿದರು.
ದಲಿತ ಪರ ಸರ್ಕಾರ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಮಲ್ಲಿಕಾರ್ಜುನ ಖರ್ಗೆಯನ್ನು ಮುಖ್ಯಮಂತ್ರಿ ಸ್ಥಾನ ನೀಡದೆ ಅನ್ಯಾಯ ಮಾಡಿದೆ. ಇದೇ ರೀತಿ ತನ್ನ ರಾಜ್ಯದಲ್ಲಿ ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಯಾವುದೇ ರೀತಿಯ ಕ್ರಮವನ್ನು ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು.