ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಸುತ್ತಿರುವ ಬೆನ್ನಲ್ಲೇ ವಿಧಾನ ಪರಿಷತ್ ಉಪ ಸಭಾಪತಿ ಮರಿತಿಬ್ಬೇಗೌಡ ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷಗಳ ವಿರುದ್ಧ ಹರಿ ಹಾಯ್ದಿದ್ದಾರೆ.
ಜೆಡಿಎಸ್ ಸೇರಿದಂತೆ ಈ ಹಿಂದೆ ಅಧಿಕಾರದಲ್ಲಿದ್ದ ಎಲ್ಲಾ ಪಕ್ಷಗಳು, ಸರ್ಕಾರಿ ಶಾಲೆಯ ಒಂದೇ ಒಂದು ಕ್ಲಾಸ್ ರೂಂ ಗೆ ಫ್ಯಾನ್ ಅಳವಡಿಸಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಸ್ವಪಕ್ಷ ಜೆಡಿಎಸ್ ಸೇರಿದಂತೆ ಈ ಹಿಂದೆ ಅಧಿಕಾರದಲ್ಲಿದ್ದ ಯಾವುದೇ ಪಕ್ಷದ ಸರ್ಕಾರವಾಗಲೀ ಸರ್ಕಾರಿ ಶಾಲೆಗಳ ಸೌಲಭ್ಯಗಳ ಬಗ್ಗೆ ತಲೆ ಕೆಡಿಸಿಕೊಳ್ಳಲಿಲ್ಲ ಎಂದು ಅವರು ವಾಗ್ದಾಳಿ ನಡೆಸಿದರು.
ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮತ್ತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ವಿರುದ್ಧ ಹರಿಹಾಯ್ದರು.
ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಮೇ2 ರಿಂದ ಆರಂಭವಾಗಿರುವುದನ್ನು ವಿರೋಧಿಸಿದ ಅವರು, ಪ್ರತಿ ವರ್ಷ ಎಸ್ ಎಸ್ ಎಲ್ ಸಿ ಫಲಿತಾಂಶ ಬಂದ ನಂತರ ಜೂನ್ ತಿಂಗಳಲ್ಲಿ ಪಿಯ ತರಗತಿಗಳು ಆರಂಭವಾಗುತ್ತಿದ್ದವು, ಆದರೆ ಈ ಬಾರಿ ಚುನಾವಣೆ ಹಿನ್ನೆಲೆಯಲ್ಲಿ ಮೇ 2ರಿಂದ ತರಗತಿಗಳು ಆರಂಭವಾಗಲಿವೆ ಎಂದು ಪಿಯು ಇಲಾಖೆ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ, ಮೇ 7ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ, ಹೆಚ್ಚಿನ ಪಿಯುಸಿ ಸಿಬ್ಬಂದಿ ಚುನಾವಣಾ ಕರ್ತವ್ಯದಲ್ಲಿದ್ದಾರೆ ಎಂದು ಹೇಳಿದ್ದಾರೆ.
ಅವೈಜ್ಞಾನಿಕವಾಗಿ ನೀಡಿರುವ ಈ ಆದೇಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಈ ಆದೇಶವನ್ನು ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿರುವ ಅವರು ಈ ಬಾರಿ ಸಿಎಂ ಸಿದ್ದರಾಮಯ್ಯ ಮತ್ತು ತನ್ವೀರ್ ಸೇಠ್ ಅವರಿಗೆ ಜನತೆ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.