ರಾಜಕೀಯ

ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸ್ಥಿರ ಸರ್ಕಾರ ನೀಡಲಿದೆ: ಹೆಚ್ ಡಿ ಕುಮಾರಸ್ವಾಮಿ

Sumana Upadhyaya

ನವದೆಹಲಿ: ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು 5 ವರ್ಷಗಳ ಕಾಲ ಕರ್ನಾಟಕದಲ್ಲಿ ಸುಭದ್ರ ಸರ್ಕಾರ ನೀಡಲಿದ್ದೇವೆ ಎಂದು ನಿಯೋಜಿತ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಾಳೆ ಸಂಜೆ 4.30ಕ್ಕೆ ಅವರು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ನಿನ್ನೆ ದೆಹಲಿಗೆ ತೆರಳಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ದರು.

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಇನ್ನೂ ಸಂಪುಟ ರಚನೆ ಬಗ್ಗೆ ನಿರ್ಧಾರ ಮಾಡಿಲ್ಲ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ 5 ವರ್ಷಗಳ ಕಾಲ ಸ್ಥಿರ ಸರ್ಕಾರ ನೀಡುತ್ತೇವೆ ಎಂಬ ಬಗ್ಗೆ ನನಗೆ ಸಂಪೂರ್ಣ ವಿಶ್ವಾಸವಿದೆ. ಮುಂದಿನ ಕಾರ್ಯಗಳ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ ಎಂದು ದೆಹಲಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು.

ಸಂಪುಟದಲ್ಲಿ ಇಬ್ಬರು ಉಪ ಮುಖ್ಯಮಂತ್ರಿ ಹುದ್ದೆ ನೀಡುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಇಲ್ಲ ಯವರೆಗೆ ನನಗೆ ಮುಖ್ಯಮಂತ್ರಿ ಹುದ್ದೆ ನೀಡಿದೆ. ಸಚಿವ ಸಂಪುಟ ರಚನೆ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ, ಸದ್ಯದಲ್ಲಿಯೇ ತೀರ್ಮಾನಿಸಲಾಗುವುದು ಎಂದು ಹೇಳಿದರು.

ನೂತನ ಸರ್ಕಾರ ರಚನೆಗೆ ಕಾಂಗ್ರೆಸ್ ನನಗೆ ಬೆಂಬಲ ನೀಡುತ್ತಿದೆ. ಅಷ್ಟು ಮಾತ್ರ ಅವರು ನನಗೆ ನೀಡಿರುವ ಆಫರ್. ಇನ್ನುಳಿದ ವಿಷಯಗಳ ಬಗ್ಗೆ ಚರ್ಚೆ ನಡೆಸಿಲ್ಲ. ಮುಂದಿನ ದಿನಗಳಲ್ಲಿ ಅವರು ಏನು ಸಲಹೆ ನೀಡುತ್ತಾರೆಯೋ ನೋಡೋಣ. ಅವರ ಸಲಹೆಯಂತೆ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೆಚ್ ಡಿಕೆ ಕಾಂಗ್ರೆಸ್ ವರಿಷ್ಠರನ್ನು ಉದ್ದೇಶಿಸಿ ಹೇಳಿದರು.

ಇದಕ್ಕೂ ಮುನ್ನ ಅವರು ದೆಹಲಿಯಲ್ಲಿ ಬಿಎಸ್ ಪಿ ನಾಯಕಿ ಮಾಯಾವತಿ ಅವರನ್ನು ಭೇಟಿ ಮಾಡಿದರು. ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದರಿಂದ ಮಾಯಾವತಿಯವರನ್ನು ಭೇಟಿ ಮಾಡಿದೆ ಎಂದು ಕುಮಾರಸ್ವಾಮಿ ತಿಳಿಸಿದರು.

SCROLL FOR NEXT