ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭವು ಬುಧವಾರ ಸಂಜೆ ಶಕ್ತಿಸೌಧ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿದ್ದು, ಪ್ರಮಾಣ ಸ್ವೀಕಾರ ಸಮಾರಂಭಕ್ಕೆ ಸೋಮವಾರದಿಂದಲೇ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ.
ಸುಮಾರು 80*40 ಅಡಿ ಗಾತ್ರದ ಬೃಹತ್ ವೇದಿಕೆ ಸಜ್ಜುಗೊಳ್ಳುತ್ತಿದ್ದು, ಗಣ್ಯರಿಗೆ ಪ್ರತ್ಯೇಕ ವ್ಯವಸ್ಥೆ ಸೇರಿದಂತೆ ಸುಮಾರು 30 ಸಾವಿರಕ್ಕೂ ಅಧಿಕ ಆಸನಗಳ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ.
ಪ್ರಮಾಣವಚನ ಸಮಾರಂಭವು ನಾಳೆ ಸಂಜೆ 4.30ಕ್ಕೆ ನಿಗದಿಯಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲರಿಗೂ ಪ್ರಮಾಣ ವಚನ ಸ್ವೀಕಾರ ವೀಕ್ಷಿಸಲು ಬೃಹತ್ ಗಾತ್ರದ ಎಲ್ಇಡಿ ಪರದೆ ಅಳವಡಿಸಲಾಗುತ್ತಿದೆ. ಸುಮಾರು 15ಕ್ಕೂ ಹೆಚ್ಚು ಎಲ್ಇಡಿ ಪರದೆಗಳನ್ನು ಹಾಕಲಾಗುತ್ತಿದೆ. ಅತಿ ಗಣ್ಯರು, ಗಣ್ಯರು, ಸಾರ್ವಜನಿಕರ ಪ್ರವೇಶಕ್ಕೆ ಪ್ರತ್ಯೇಕ ಪ್ರವೇಶ ಮಾರ್ಗ ಮಾಡಲಾಗುತ್ತಿದೆ.
ತೋಟಗಾರಿಕೆ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ವೇದಿಕೆ ಮುಂಭಾಗವನ್ನು ಅಲಂಕಾರಿಕ ಗಿಡ, ಹೂವುಗಳ ಕುಂಡಗಳಿಂದ ಅಲಂಕರಿಸುವ ಕೆಲಸ ಭರದಿಂದ ಸಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರು ಬುಧವಾರ ಬೆಳಿಗ್ಗೆ ವೇದಿಕೆಯ ಸಿದ್ಧತೆ ಕಾರ್ಯಗಳನ್ನು ಪರಿಶೀಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಸಲಹೆ, ಸೂಚನೆ ನೀಡಿದರು.
ಸುಮಾರು 1 ಲಕ್ಷ ಮಂದಿಗೆ ಆಸನಗಳ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಹೈಕೋರ್ಟ್ ಮತ್ತು ವಿಧಾನಸೌಧದ ಮುಂಭಾಗದ ರಸ್ತೆಯಲ್ಲಿ ಜನರಿಗೆ ಕುಳಿತುಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಸಿದ್ಧತಾ ಕಾರ್ಯ ಆರಂಭಕ್ಕೂ ಮುನ್ನ ಬೃಹತ್ ಮಂಟಪ ನಿರ್ಮಾಣಕ್ಕಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಸಮಾರಂಭಕ್ಕೆ ಗಣ್ಯಾತಿ ಗಣ್ಯರ ಆಗಮನ
ರಾಜ್ಯದ ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಪ್ರಮಾಣ ವಚನ ಸ್ವೀಕಾರ ಸಮಾಂರಭಕ್ಕೆ ಪ್ರಾದೇಶಿಕ ಪಕ್ಷಗಳ ನಾಯಕರು ಸೇರಿದಂತೆ ಗಣ್ಯಾತಿ ಗಣ್ಯರು ಆಗಮಿಸಲಿದ್ದಾರೆ.
ನಿನ್ನೆಯಷ್ಟೇ ಬಿಎಸ್'ಪಿ ಅಧಿನಾಯಕಿ ಮಾಯಾವತಿ, ದೇಶದ ವಿವಿಧ ರಾಜ್ಯಗಳಲ್ಲಿ ಆಡಳಿತ ಇರುವ ಪ್ರಾದೇಶಿಕ ಪಕ್ಷಗಳಮುಖ್ಯಮಂತ್ರಿಗಳು ಸೇರಿದಂತೆ ತೃತೀಯ ರಂಗಕ್ಕೆ ಕೈಜೋಡಿಸುವ ಪಕ್ಷಗಳ ಮುಕಂಡರಿಗೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಖುದ್ದಾಗಿ ಆಹ್ವಾನ ನೀಡಿದ್ದಾರೆ.
ನಾಳೆ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುತ್ತಿರುವ ಹಿನ್ನಲೆಯಲ್ಲಿ ಎಲ್ಲಾ ಮುಖಂಡರಿಗೆ ಕರೆ ಮಾಡಿ ದೇವೇಗೌಡ ಅವರು ಆಹ್ವಾನ ನೀಡಿದ್ದಾರೆ.
ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ. ಪ್ರಾದೇಶಿಕ ಪಕ್ಷಗಳ ಮುಖಂಡರು ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ಲುದ್ಲಾ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್, ಆರ್'ಜೆಡಿ ನಾಯಕ ತೇಜಸ್ವಿ ಯಾದವ್, ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಎನ್'ಸಿಪಿ ಮುಖ್ಯಸ್ಥ ಶರದ್ ಪವಾರ್, ಒಡಿಸ್ಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ತೆಲುಗು ನಟ ಪವನ್ ಕಲ್ಯಾಣ್, ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಬಿಜೆಪಿಯೇತರ ಪ್ರಾದೇಶಿಕ ಪಕ್ಷಗಳನ್ನು ಆಹ್ವಾನಿಸುವ ಮೂಲಕ 2019ರ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ಧತೆಗಳು ನಡೆದಿವೆ. ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರ ನೇತೃತ್ವದಲ್ಲಿ ವಿರಾಠ್ ಶಕ್ತಿ ಪ್ರದರ್ಶನ ನಡೆಯಲಿದೆ ಎಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics