ಬೆಂಗಳೂರು: ನನಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿರುವುದು ಹೈಕಮಾಂಡ್ ನಿರ್ಧಾರ. ಇಂತಹ ತೀರ್ಮಾನಗಳೆಲ್ಲವನ್ನು ಹೈಕಮಾಂಡ್ ತೆಗೆದುಕೊಳ್ಳುತ್ತಿದ್ದು ಅವರು ನನ್ನನ್ನು ಆಯ್ಕೆ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.
ಇಂದು ಸಂಜೆ ವಿಧಾನಸೌಧದ ಎದುರು ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವಾಗ ಡಾ.ಜಿ.ಪರಮೇಶ್ವರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇಂದು ಬೆಳಗ್ಗೆ ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ವಿನಾಯಕ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿರುವುದಕ್ಕೆ ನಾನು ಹೈಕಮಾಂಡ್ ಗೆ ಕೃತಜ್ಞತೆ ಹೇಳುತ್ತೇನೆ. ಡಿ.ಕೆ.ಶಿವಕುಮಾರ್ ಮತ್ತು ರೋಷನ್ ಬೇಗ್ ಕೂಡ ಈ ಹುದ್ದೆಗೆ ಅರ್ಹರಾಗಿದ್ದಾರೆ. ಆದರೆ ಹೈಕಮಾಂಡ್ ನನ್ನನ್ನು ಆಯ್ಕೆ ಮಾಡಿದರು ಎಂದು ಪ್ರತಿಕ್ರಿಯಿಸಿದರು.
ಮುಸಲ್ಮಾನ ವರ್ಗದಿಂದ ರೋಷನ್ ಬೇಗ್ ಮತ್ತು ಒಕ್ಕಲಿಗ ಸಮುದಾಯದಿಂದ ಡಿ.ಕೆ.ಶಿವಕುಮಾರ್ ಕೂಡ ಉಪ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳು ಎಂದು ಕೇಳಿದ ಪ್ರಶ್ನೆಗೆ ಅವರು ಹೀಗೆ ಉತ್ತರಿಸಿದರು.