ಬೆಂಗಳೂರು: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದ ಬೆನ್ನಲ್ಲೇ, ಜೆಡಿಎಸ್–ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಸಂಪುಟ ವಿಸ್ತರಣೆ ಕಸರತ್ತು ದೊಡ್ಡ ಸವಾಲಾಗಿ ಪರಿಣಮಿಸಿದೆ.
ಈ ಸಂಬಂಧ ಕಾಂಗ್ರೆಸ್ ನಾಯಕರು ಶನಿವಾರ ದೆಹಲಿಗೆ ತೆರಳಿದ್ದು, ಸಂಪುಟ ವಿಸ್ತರಣೆ ಮತ್ತು ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಜತೆ ಚರ್ಚಿಸಲಿದ್ದಾರೆ.
ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಅವರ ತಾಯಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ.
ಇಂದು ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಪರಮೇಶ್ವರ ಅವರು, ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಚರ್ಚೆ ನಡೆಯಲಿದೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಮತ್ತು ಯಾವ ಖಾತೆ ನೀಡಬೇಕು ಎಂಬುದರ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.
ಮೂಲಗಳ ಪ್ರಕಾರ, ಕುಮಾರಸ್ವಾಮಿ ಸಂಪುಟದಲ್ಲಿ ಕಾಂಗ್ರೆಸ್ ಗೆ 22 ಸ್ಥಾನ ಹಾಗೂ ಜೆಡಿಎಸ್ ಗೆ 12 ಸ್ಥಾನ ನೀಡಲು ಈಗಾಗಲೇ ನಿರ್ಧರಿಸಲಾಗಿದೆ. ಆದರೆ ಖಾತೆ ಹಂಚಿಕೆ ಮತ್ತು ಯಾರಿಗೆ ಸಚಿವ ಸ್ಥಾನ ಕೊಡಬೇಕು ಎಂಬ ಬಗ್ಗೆ ಕಾಂಗ್ರೆಸ್ ಗೊಂದಲಕ್ಕೆ ಸಿಲುಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics