ಬೆಂಗಳೂರು: ರೈತರ ಸಾಲಮನ್ನಾಕ್ಕೆ 15 ದಿವಸ ಕಾಲಾವಕಾಶ ಬೇಕೆಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಉಲ್ಲೇಖಿಸುತ್ತಿರುವುದು ರೈತ ಸಮುದಾಯಕ್ಕೆ ಮಾಡುತ್ತಿರುವ ಅನ್ಯಾಯ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಸಾಲಮನ್ನಾ ಘೋಷಣೆ ಕುರಿತು ಸ್ಪಷ್ಟ ನಿರ್ಧಾರಕ್ಕೆ ಬರುವಲ್ಲಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಮೀನಮೇಷ ಎಣಿಸುತ್ತಿದೆ. ರೈತ ಕಲ್ಯಾಣದ ಹೆಸರು ಹೇಳಿಕೊಂಡು ಅಧಿಕಾರ ಗಿಟ್ಟಿಸಿಕೊಂಡಿರುವ ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಸರ್ಕಾರ ಇಂದು ರೈತರಿಗೆ ಮೋಸ ಮಾಡಲು ಹೊರಟಿದೆ ಎಂದು ಆಪಾದಿಸಿದರು.
ರೈತರ ಸಾಲಮನ್ನಾಗಾಗಿ ಒತ್ತಾಯಿಸಿ ಹೋರಾಟ ಕುರಿತಂತೆ ಬಿಜೆಪಿ ಒಂದೆರಡು ದಿನಗಳಲ್ಲಿ ನಿರ್ಧಾರ ಪ್ರಕಟಿಸಲಿದೆ ಎಂದು ಅವರು ತಿಳಿಸಿದರು.