ರಾಜಕೀಯ

ಮೈತ್ರಿ ಸರ್ಕಾರದ ವಿರುದ್ಧ ಮುನಿದು ಬಿಜೆಪಿ ಸೇರಿದ ಕಾಂಗ್ರೆಸ್ ಎಂಎಲ್‌ಸಿ ಲಿಂಗಪ್ಪ ಪುತ್ರ ಚಂದ್ರಶೇಖರ್!

Vishwanath S
ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿಗೆ ರಾಮನಗರ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದು ಇದರಿಂದ ಕಾಂಗ್ರೆಸ್ಸಿಗರು ಬೇಸರಗೊಂಡು ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. 
ವಿಧಾನ ಪರಿಷತ್ ಸದಸ್ಯ, ರಾಮನಗರ ಕಾಂಗ್ರೆಸ್ ಮುಖಂಡ ಸಿಎಂ ಲಿಂಗಪ್ಪ ಪುತ್ರ ಚಂದ್ರಶೇಖರ್ ಪಕ್ಷ ತೊರೆದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರ ನಿವಾಸದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. 
ಬಿಎಸ್ವೈ ಪಕ್ಷದ ಧ್ವಜ ಹಾಗೂ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಸಿಪಿ ಯೋಗೇಶ್ವರ್ ಸಹ ಜೊತೆಯಲ್ಲಿದ್ದರು. ಈ ವೇಳೆ ಮಾತನಾಡಿದ ಬಿಎಸ್ವೈ ರಾಮನಗರ ಪಕ್ಷದ ಅಭ್ಯರ್ಥಿ ಎಂದು ಅವರು ಪಕ್ಷಕ್ಕೆ ಸೇರ್ಪಡೆಯಾಗಿಲ್ಲ. 2 ದಿನಗಳಲ್ಲಿ ರಾಮನಗರದಲ್ಲಿ ಬೃಹತ್ ಸಮಾರಂಭ ನಡೆಸಿ ಅಭ್ಯರ್ಥಿ ಘೋಷಣೆ ಮಾಡಲಾಗುವುದು ಎಂದರು. 
ಬಿಜೆಪಿ ಸೇರಿದ ಬಳಿಕ ಮಾತನಾಡಿದ ಚಂದ್ರಶೇಖರ್ ಅವರು ನನ್ನ ಆತ್ಮತೃಪ್ತಿಗಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ಕಾಂಗ್ರೆಸ್ ನಲ್ಲಿ ಉಸಿರುಗಟ್ಟಿಸುವ ವಾತಾವರಣವಿದೆ. ನಮ್ಮ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿ ಮಾಡುವುದು ನನ್ನ ಗುರಿಯಾಗಿದೆ. ಬಿಜೆಪಿ ಪಕ್ಷವನ್ನು ಕ್ಷೇತ್ರದಲ್ಲಿ ಬಲಗೊಳಿಸುವತ್ತ ಗಮನ ಹರಿಸುತ್ತೇನೆ ಎಂದರು. 
ಇದಕ್ಕೂ ಮುನ್ನ ಮಾತನಾಡಿದ್ದ ಸಿಎಂ ಲಿಂಗಪ್ಪ ಅವರು ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ಮಾಡಲ್ಲ. ಹಾಗಂತ ನಾವು ಬಿಜೆಪಿಗೂ ಬೆಂಬಲ ನೀಡಲ್ಲ. ಬಂಡಾಯ ಅಭ್ಯರ್ಥಿ ಕಣಕ್ಕಿಳಿಸಲು ಚಿಂತನೆ ನಡೆಸುತ್ತೇವೆ ಎಂದು ಹೇಳಿದ್ದರು. ಆದರೆ ಈ ಎಲ್ಲದರ ನಡುವೆ ಚಂದ್ರಶೇಖರ್ ಬಿಜೆಪಿಗೆ ಸೇರ್ಪಡೆಯಾಗಿ ಮತ್ತೆ ಟ್ವಿಸ್ಟ್ ನೀಡಿದ್ದಾರೆ.
SCROLL FOR NEXT