ಬೆಳಗಾವಿ: ಯಾವುದೇ ಕಾರಣಕ್ಕೂ ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ.. ಸಿದ್ದರಾಮಯ್ಯ ಅವರು ನಮ್ಮ ನಾಯಕ. ವಿದೇಶದಿಂದ ವಾಪಸ್ ಆದ ಬಳಿಕ ಅವರೇ ಸಮಸ್ಯೆ ಬಗೆಹರಿಸಲಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ಪಿಎಲ್ ಡಿ ಬ್ಯಾಂಕ್ ಚುನಾವಣೆ ಬಳಿಕ ಕಾಂಗ್ರೆಸ್ ಬಳಗದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ಜಾರಕಿಹೊಳಿ ಸಹೋದರರು ಬಹಿರಂಗವಾಗಿಯೇ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಬೆಳಗಾವಿ ಕಾಂಗ್ರೆಸ್ ಬಣದಲ್ಲಿ ಭಿನ್ನಮತದ ಬೇಗುದಿ ಬೇಯುತ್ತಿದ್ದು, ಜಾರಕಿಹೊಳಿ ಸಹೊದರರು ತಮ್ಮ ಬೆಂಬಲಿಗ ಶಾಸಕರೊಂದಿಗೆ ಬಿಜೆಪಿ ಸೇರಲು ಸಜ್ಜಾಗಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ.
ಈ ಹಿನ್ನಲೆಯಲ್ಲಿ ಸ್ಪಷ್ಟನೆ ನೀಡಿರುವ ಬೆಳಗಾವಿ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು, ಈಗಲೂ ಕೆಲ ಸಮಸ್ಯೆಗಳ ಬಗೆಹರಿದಿಲ್ಲ. ಅಂದ ಮಾತ್ರಕ್ಕೇ ನಾವು ಬಿಜೆಪಿ ಸೇರುತ್ತೇವೆ ಎನ್ನುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ನಾವು ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ. ಇನ್ನು ಹಾಲಿ ಸಮಸ್ಯೆಗಳ ಕುರಿತು ಚರ್ಚೆ ನಡೆಸಿ ಬಗೆಹರಿಸಿಕೊಳ್ಳಲಾಗುತ್ತದೆ. ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಅವರು ಪ್ರಸ್ತುತ ಯೂರೋಪ್ ಪ್ರವಾಸದಲ್ಲಿದ್ದು, ಅವರು ಬೆಂಗಳೂರಿಗೆ ವಾಪಸ್ ಆದ ಬಳಿಕ ಅವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಈ ಹಿಂದೆ ಜಾರಕಿಹೊಳಿ ಸಹೋದರರು ಬಿಜೆಪಿ ನಾಯಕರೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಸೆಪ್ಟೆಂಬರ್ 16ರ ಬಳಿಕ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಇದಕ್ಕೆ ಇಂಬು ನೀಡುವಂತೆ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನಿವಿಸ್ ಅವರನ್ನು ರಹಸ್ಯವಾಗಿ ಭೇಟಿ ಮಾಡಿ ಚರ್ಚಿಸಿದ್ದಾರೆ ಎಂಬ ಸುದ್ದಿ ಕೂಡ ಹರಿದಾಡಿತ್ತು. ಇದಕ್ಕೆಲ್ಲಾ ಇದೀಗ ರಮೇಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics