ರಾಜಕೀಯ

ಅಸಮಧಾನ ಶಮನಕ್ಕೆ ಸಿಎಂ ಯಡಿಯೂರಪ್ಪ ಜೊತೆ ಬಿಜೆಪಿ ರಾಜ್ಯ ಉಸ್ತುವಾರಿ ಚರ್ಚೆ

Lingaraj Badiger

ಬೆಂಗಳೂರು: ಸಂಪುಟ ‌ರಚನೆ ಬೆನ್ನಲ್ಲೇ ‌ಬಿಜೆಪಿಯಲ್ಲಿ ಸ್ಪೋಟಗೊಂಡಿರುವ ಅಸಮಾಧಾನವನ್ನು ಶಮನಗೊಳಿಸಲು ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ ರಾವ್ ಅಖಾಡಕ್ಕಿಳಿದಿದ್ದು, ಡಾಲರ್ಸ್ ಕಾಲೋನಿಯಲ್ಲಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ, ಅತೃಪ್ತ ಶಾಸಕರನ್ನು ಸಮಾಧಾನಪಡಿಸುವ ಬಗ್ಗೆ ಸುಧೀರ್ಘ ಚರ್ಚೆ ನಡೆಸಿದ್ದಾರೆ.

ಮುರಳೀಧರ ರಾವ್ ಭೇಟಿ ವೇಳೆ ಬಾಲಚಂದ್ರ ಜಾರಕಿಹೊಳಿಯನ್ನು ಮನೆಗೆ ಕರೆಸಿಕೊಂಡು ಚರ್ಚೆ ನಡೆಸಿ ಸಚಿವ ಸ್ಥಾನ ಕೈತಪ್ಪಿದವರನ್ನು ಸಮಾಧಾನಗೊಳಿಸಲು ಸೂಚನೆ ನೀಡಿದ್ದಾರೆ. ಅಲ್ಲದೆ ಜಾರಕಿಹೊಳಿ ಕುಟುಂಬಕ್ಕೆ ಕೆಲವೇ ದಿನಗಳಲ್ಲಿ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಹಾಗೂ ಬಿಜೆಪಿ ಉಸ್ತುವಾರಿ ಭರವಸೆ ಮೇರೆಗೆ ಸಮಾಧಾನಗೊಂಡ ಬಾಲಚಂದ್ರ ಜಾರಕಿಹೊಳಿ ಮುಖ್ಯಮಂತ್ರಿ ಅವರ ಮನೆಯಿಂದ ತೆರಳಿದ್ದಾರೆ.

ಸಚಿವ ಸ್ಥಾನ ಕೈತಪ್ಪಿದ ಹಿನ್ನಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಶಾಸಕರನ್ನು ತಮ್ಮ ನಿವಾಸದಲ್ಲಿ ಭೇಟಿ ಮಾಡುವಂತೆ ಯಡಿಯೂರಪ್ಪ ಸಂದೇಶ ರವಾನಿಸಿದ್ದಾರೆ.

20ಕ್ಕೂ ಹೆಚ್ಚು ಹಿರಿಯ ಶಾಸಕರು ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಸಾಧ್ಯವಾಗಿಲ್ಲ. ಈ ಎಲ್ಲಾ ಶಾಸಕರನ್ನು ಕರೆದು ಮಾತುಕತೆ ಮೂಲಕ ಸಮಾಧಾನಪಡಿಸಿ ಅವರ ಕ್ಷೇತ್ರಕ್ಕೆ ಸಾಕಷ್ಟು ಅನುದಾನ, ಯೋಜನೆಗಳು, ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಭರವಸೆ ನೀಡಿ, ಬಿಜೆಪಿ ಸರ್ಕಾರವನ್ನು ರಕ್ಷಿಸಿಕೊಳ್ಳಲು ಯಡಿಯೂರಪ್ಪ ಮುಂದಾಗಿದ್ದಾರೆ.

SCROLL FOR NEXT