ರಾಜ್ಯಪಾಲರಿಗೆ ದೂರು ಸಲ್ಲಿಸಿ ಬಂದ ನಂತರ ಪ್ರತಿಕ್ರಿಯೆ ನೀಡಿದ ಬಿ ಎಸ್ ಯಡಿಯೂರಪ್ಪ 
ರಾಜಕೀಯ

ಶಾಸಕ ಪ್ರೀತಂ ಗೌಡ ಮನೆ ಮೇಲೆ ದಾಳಿ: ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು

ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ಅವರ ಮನೆ ಮೇಲೆ ನಡೆದ ಕಲ್ಲು ತೂರಾಟ ...

ಬೆಂಗಳೂರು: ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ಅವರ ಮನೆ ಮೇಲೆ ನಡೆದ ಕಲ್ಲು ತೂರಾಟ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣ ಸಂಬಂಧ ಬಿಜೆಪಿ ನಿಯೋಗ ಗುರುವಾರ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಜುಬಾಯಿ ವಾಲಾ ಅವರಿಗೆ ದೂರು ನೀಡಿದೆ.

ರಾಜ್ಯಪಾಲರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ,  ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ಅವರ ಮನೆ ಮೇಲೆ ದಾಳಿ ನಡೆಸಿ, ಮನೆಯವರಿಗೆ ಬೆದರಿಕೆ ಹಾಕಲಾಗಿದೆ. ಹಲ್ಲೆಯಿಂದ ಗಾಯಗೊಂಡು ಯುವ ಮೋರ್ಚಾ ಕಾರ್ಯಕರ್ತ ರಾಹುಲ್ ಕಿಣಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಅವರನ್ನು ಇಂದು ಮಣಿಪಾಲ ಆಸ್ಪತ್ರೆಗೆ ಸ್ಥಳಾಂತರಿಸಲಾಗುವುದು ಎಂದು ತಿಳಿಸಿದರು.

ಶಾಸಕರ ಮನೆ ಮೇಲೆ ನಡೆದ ದಾಳಿ ಹಾಗೂ ಕಾರ್ಯಕರ್ತನ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಜಾಮೀನು ಸಿಗುವ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ಆದರೆ ಘಟನೆಯ ಸಂದರ್ಭದಲ್ಲಿ ಮಹಿಳೆಯೊಬ್ಬರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ನೀಡಿದ ದೂರಿಗೆ ಸಂಬಂಧಿಸಿ ಜಾಮೀನುರಹಿತ ಪ್ರಕರಣ ದಾಖಲಿಸಲಾಗಿದೆ. ಮುಖ್ಯಮಂತ್ರಿಯವರು ಪೊಲೀಸ್‌ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿದ್ದಾರೆ ಎಂದು ಆರೋಪಿಸಿದರು.

ಪೊಲೀಸ್ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿಯವರು ಸದನದಲ್ಲಿ ಭರವಸೆ ನೀಡುತ್ತಾರೆ. ಆದರೆ ಹಾಸನ ಕೈಬಿಟ್ಟು ಹೋಗುತ್ತಿದೆ. ಹೋರಾಟಗಾರ ಪ್ರೀತಂ ಗೌಡ ಹಾಸನದಲ್ಲಿ ಗೆದ್ದು ಶಾಸಕರಾಗಿದ್ದಾರೆ. ಇದರಿಂದ ಹೆದರಿರುವ ಮುಖ್ಯಮಂತ್ರಿಯವರು ಕಾರ್ಯಕರ್ತರ ಮೂಲಕ ಶಾಸಕರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದರು.

ನಿನ್ನೆ 20ಕ್ಕೂ ಹೆಚ್ಚು ಶಾಸಕರು ಹಾಸನಕ್ಕೆ ಭೇಟಿ ನೀಡಿ, ಪ್ರೀತಂ ಗೌಡ ಅವರ ಕುಟುಂಬದವರಿಗೆ ಧೈರ್ಯ ತುಂಬಿದ್ದಾರೆ. ಘಟನೆಯ ಬಗ್ಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೂ ತಿಳಿಸಿದ್ದೇವೆ. ರಾಜ್ಯದಲ್ಲಿ ಸಂಪೂರ್ಣ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ತುಘಲಕ್ ದರ್ಬಾರ್ ನಡೆಯುತ್ತಿದೆ. ಈ ಬಗ್ಗೆ ಇಂದು ರಾಜ್ಯಪಾಲರಿಗೂ ದೂರು ನೀಡಿದ್ದೇವೆ, ಎಫ್ಐಆರ್ ಪ್ರತಿ ಸಿಕ್ಕಿದ ಕೂಡಲೇ ಅದನ್ನು ಗೃಹ ಸಚಿವರಿಗೆ ಕೂಡ ಕಳುಹಿಸಿಕೊಡಲಾಗುವುದು ಎಂದು ತಿಳಿಸಿದರು.

ಹಲ್ಲೆ ಹಾಗೂ ಬೆದರಿಕೆ ವಿಷಯವನ್ನು ವಿಧಾನಮಂಡಲದಲ್ಲೂ ಪ್ರಸ್ತಾಪಿಸಲಾಗುವುದು.  ಊರು ಬಿಟ್ಟು ಹೋಗುವಂತೆ ಶಾಸಕ ಪ್ರೀತಂ ಗೌಡ ಅವರಿಗೆ ಬೆದರಿಕೆ ಹಾಕಲಾಗಿದೆ. ಇಂದು ಕೂಡ ಈ ವಿಷಯವನ್ನು ಮುಂದಿಟ್ಟು ಸದನದಲ್ಲಿ ಹೋರಾಟ ನಡೆಸಲಾಗುವುದು. ಮುಂದಿನ ಹೋರಾಟದ ಬಗ್ಗೆ ಶಾಸಕಾಂಗ ಪಕ್ಷ ಹಾಗೂ ಮುಖಂಡರ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

ಹಾಸನದ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಹಾಗೂ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ಹಲ್ಲೆಯ ವಿರುದ್ಧ ಪ್ರತಿಭಟನೆ ನಡೆಸಲಾಗುವುದು. ಕಾರ್ಯಕರ್ತರಿಗೆ ಧೈರ್ಯ ತುಂಬಲಾಗುವುದು ಎಂದು ಯಡಿಯೂರಪ್ಪ ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ವಿಧಾನಸೌಧದಿಂದ ಪಾದಯಾತ್ರೆ ಮೂಲಕ ರಾಜಭವನಕ್ಕೆ ತೆರಳಿದ ನಿಯೋಗದಲ್ಲಿ  ಬಿಜೆಪಿ ಮುಖಂಡರಾದ ಕೆ.ಎಸ್.ಈಶ್ವರಪ್ಪ, ರೇಣುಕಾಚಾರ್ಯ, ಸುನೀಲ್ ಕುಮಾರ್, ಗೋವಿಂದ ಕಾರಜೋಳ, ಕೋಟ ಶ್ರೀನಿವಾಸ ಪೂಜಾರಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಎನ್.ರವಿಕುಮಾರ್ ಮತ್ತಿತರರು ಇದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT