ರಾಜಕೀಯ

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 22 ಸ್ಥಾನಗಳಲ್ಲಿ ಗೆಲುವು ಸಾಧಿಸಲು ಬಿಜೆಪಿ ಚಿಂತನೆ- ಯಡಿಯೂರಪ್ಪ

Nagaraja AB

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಅಭದ್ರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಊಹಾಪೋಹಗಳ ನಡುವೆ ಬಿಜೆಪಿ ಮುಂಬರುವ ಲೋಕಸಭಾ ಚುನಾವಣೆ ಕಡೆಗೆ ಹೆಚ್ಚಿನ ಗಮನ ಹರಿಸಿದ್ದು, ರಾಜ್ಯದಲ್ಲಿ 22 ಸ್ಥಾನಗಳಲ್ಲಿ ಗೆಲುವು ಸಾಧಿಸಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಕರ್ನಾಟಕದಲ್ಲಿ 22 ಸ್ಥಾನಗಳಲ್ಲಿ ಗೆಲುವು ಸಾಧಿಸಲೇಬೇಕೆಂಬ ಗುರಿಯೊಂದಿಗೆ ಈಗಾಗಲೇ ಕಾರ್ಯ ಆರಂಭಿಸಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ಗೆ ಹೇಗೆ  ಕೌಂಟರ್ ನೀಡುತ್ತೇವೆ ಎಂಬುದನ್ನು ಚುನಾವಣಾ ಫಲಿತಾಂಶದಿಂದ ತಿಳಿಯಲಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ನೀಡಿದ ಸಂದರ್ಶನದಲ್ಲಿ ಅವರು ತಿಳಿಸಿದ್ದಾರೆ.

ಇತ್ತೀಚಿಗೆ ದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಸಮ್ಮೇಳನದಲ್ಲಿ ಲೋಕಸಭಾ ಚುನಾವಣೆ ಬಗ್ಗೆ ಚರ್ಚಿಸಲಾಗಿದೆ. ಅಲ್ಲಿ ಯಾವುದೇ ರಾಜ್ಯ ಅಥವಾ ವಲಯದ ಬಗ್ಗೆ ಚರ್ಚೆ ನಡೆದಿಲ್ಲ. ವಿರೋಧಪಕ್ಷಗಳನ್ನು ಎದುರಿಸಿ ಹೇಗೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ಬಗ್ಗೆ ಚರ್ಚೆ ನಡೆಸಲಾಗಿದೆ. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಆತ್ಮಸ್ಥೈರ್ಯ ಮೂಡಿಸುವುದು ಸಮ್ಮೇಳನದ ಉದ್ದೇಶವಾಗಿತ್ತು ಎಂದರು.

ಕರ್ನಾಟಕದ ರಾಜಕೀಯದೊಂದಿಗೆ ಇತ್ತೀಚಿಗೆ ನಡೆದ ಛತ್ತೀಸ್ ಗಡ,  ಮಧ್ಯಪ್ರದೇಶ, ರಾಜಸ್ತಾನ ಚುನಾವಣೆಗಳ ಹೋಲಿಕೆ ಅಗತ್ಯವಿಲ್ಲ. ದಕ್ಷಿಣ ಭಾರತದ ರಾಜಕೀಯ , ಹಿಂದಿ ಭಾಷಿಕರೆ ಹೆಚ್ಚಾಗಿರುವ ಉತ್ತರ ಭಾರತದ ರಾಜಕೀಯ ಬೇರೆ ಬೇರೆಯಾಗಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 22 ರಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಈಗಾಗಲೇ ಕಾರ್ಯ ಆರಂಭಿಸಿರುವುದಾಗಿ ಹೇಳಿದರು.

ಉತ್ತರ ಪ್ರದೇಶದಲ್ಲಿ ಎಸ್ಪಿ- ಬಿಎಸ್ಪಿ ಮೈತ್ರಿಯಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರಲ್ಲ, ಮೋದಿ ಅವರು ಹಲವು ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸಿದ್ದು, ಮತ್ತೆ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

SCROLL FOR NEXT