ಬೆಂಗಳೂರು: ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಬುಧವಾರ ಪ್ರತಿಭಟನೆ ನಡೆಸಲಿದ್ದು, ಬಳಿಕ ರಾಜ್ಯಪಾಲರನ್ನು ಭೇಟಿ ಮಾಡಿ ದೂರು ನೀಡಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ.
ಇಂದು ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾಳೆ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿ ಎರಡು ಗಂಟೆಗಳ ಕಾಲ ಧರಣಿ ನಡೆಸಲು ತೀರ್ಮಾನಿಸಲಾಗಿದ್ದು, ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯಿಸಲಾಗುವುದು. ಮೈತ್ರಿ ಸರ್ಕಾರದ 14 ಜನ ಶಾಸಕರು ರಾಜೀನಾಮೆ ಸಲ್ಲಿಸಿದ್ದಾರೆ. ಇಬ್ಬರು ಸಚಿವರು ಸರ್ಕಾರದ ಧೋರಣೆ ಖಂಡಿಸಿ ರಾಜೀನಾಮೆ ನೀಡಿದ ಮೇಲೂ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದುಕೊಂಡಿದ್ದಾರೆ ಎಂದರು.
ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದ ಬಳಿಕ ಬಿಜೆಪಿ ಶಾಸಕರ ನಿಯೋಗ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿ, ಅಲ್ಪ ಮತಕ್ಕೆ ಕುಸಿದಿರುವ ಸರ್ಕಾರವನ್ನು ವಜಾಗೊಳಿಸುವಂತೆ ಮನವಿ ಮಾಡಲು ನಿರ್ಣಯಿಸಲಾಗಿದೆ, ಬಳಿಕ ವಿಧಾನ ಸೌಧದಲ್ಲಿ ಸಭಾಧ್ಯಕ್ಷ ರಮೇಶ್ ಕುಮಾರ್ ಅವರನ್ನು 3 ಗಂಟೆಗೆ ಭೇಟಿ ಮಾಡಿ ಶಾಸಕರ ರಾಜೀನಾಮೆಗಳನ್ನು ಅಂಗೀಕರಿಸುವಂತೆ ಮನವಿ ಸಲ್ಲಿಸಲಾಗುವುದು ಎಂದರು.