ಮೈಸೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್. ವಿಶ್ವನಾಥ್ ರಾಜಿನಾಮೆ ಸಲ್ಲಿಕೆ ಮಾಡಿದ್ದು, ರಾಜಿನಾಮೆ ಘೋಷಣೆಗೂ ಮುನ್ನ ಮಾಜಿ ಪ್ರಧಾನಿ ದೇವೇಗೌಡರಿಗೆ ಪತ್ರ ಬರೆದಿದ್ದಾರೆ.
ರಾಜಿನಾಮೆ ಕುರಿತು ಸುದ್ದಿತಿಳಿಸಲು ಕರೆಯಲಾಗಿದ್ದ ಸುದ್ದಿಗೋಷ್ಠಿಗೂ ಮುನ್ನ ಮಾಜಿ ಪ್ರಧಾನಿಗೆ ಬರೆದ ಪತ್ರದಲ್ಲಿ ಪಕ್ಷದ ಹೊಣೆಗಾರಿಕೆಯಿಂದ ನನ್ನನ್ನು ಬಿಡುಗಡೆ ಮಾಡಿ ಹುಣಸೂರು ಕ್ಷೇತ್ರದ ಜನರಿಗೆ ಸೇವೆ ಮಾಡಲು ಅನುಕೂಲ ಮಾಡಿಕೊಡಬೇಕೆಂದು ವಿಶ್ವನಾಥ್ ಮನವಿ ಮಾಡಿದ್ದಾರೆ.
'ತಾವು ನನ್ನಲ್ಲಿ ವಿಶ್ವಾಸವಿಟ್ಟು ಜನತಾದಳ ರಾಜ್ಯಾಧ್ಯಕ್ಷನನ್ನಾಗಿ ನೇಮಕ ಮಾಡಿದ್ದು, ನನ್ನ ರಾಜಕೀಯ ಜೀವನದ ಬಹುಮುಖ್ಯ ಘಟ್ಟ ಎಂದೇ ನಾನು ಭಾವಿಸಿದ್ದೇನೆ. ಸ್ವಾಭಿಮಾನದ ಸಂಕೇತವಾಗಿ ನನ್ನ ಮಾತೃ ಪಕ್ಷ ಕಾಂಗ್ರೆಸ್ ನಿಂದ ಹೊರ ಬರಬೇಕಾದ ಅನಿವಾರ್ಯತೆ ಎದುರಾಗಿ ಆಚೆ ಬಂದು ನಿಂತಾಗ, ನನ್ನ ಅಭಿಲಾಷೆಯಂತೆ ನನಗೆ ಹುಣಸೂರು ವಿಧಾನ ಸಭಾ ಕ್ಷೇತ್ರದ ಶಾಸಕನಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಪುನರ್ ಜನ್ಮಕ್ಕೆ ಆಶೀರ್ವಾದಿಸಿದ್ದೀರಿ. ಅದಕ್ಕಾಗಿ ನಾನು ನಿಮಗೆ ಕೃತಜ್ಞನಾಗಿದ್ದೇನೆ. ಅಂತೆಯೇ ಅಸಂಗತ ಸಂದರ್ಭದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ವರ್ಷವಾಯಿತು. ಸಾಲಮನ್ನಾದಂತಹ ಬೃಹತ್ ಯೋಜನೆಯನ್ನು ಹೆಗಲ ಮೇಲೆ ಹೊತ್ತ ಮುಖ್ಯಮಂತ್ರಿ ಆಡಳಿತದ ಅಭದ್ರತೆಯ ಸಂಕಷ್ಟದಲ್ಲೂ ಜನರ ನಡುವೆ ನಮ್ಮ ಕುಮಾರಣ್ಣ ಎಂಬ ಭಾವನಾತ್ಮಕ ಸಂಪ್ರೀತಿಯಲ್ಲಿದ್ದರು.
ಒಂದರೆಡು ಇಲಾಖೆಗಳನ್ನು ಬಿಟ್ಟರೆ ನಿರೀಕ್ಷಿಸಿದ ಸಾಧನೆಗಳು ಸಾಧ್ಯವಾಗಿಲ್ಲ. ಈ ವಿಚಾರದಲ್ಲಿ ಪಕ್ಷದ ಅಧ್ಯಕ್ಷನಾಗಿ ನನಗೆ ನಿರಾಶೆಯಾಗಿದೆ ಎನ್ನಲು ಸಂಕಟವಾದರೂ ಹೇಳುವುದು ಅನಿವಾರ್ಯವಾಗಿದೆ. ಆದರೂ ಸಿಎಂ ಕುಮಾರಸ್ವಾಮಿ ಅವರು ತಮ್ಮ ಅನಾರೋಗ್ಯದ ಮತ್ತು ಮಿತ್ರರ ಕಿರುಕುಳದ ನಡುವೆಯೂ ಎಲ್ಲರ ವಿಶ್ವಾಸದಿಂದ ಶಕ್ತಿ ಮೀರಿ ಸರ್ಕಾರವನ್ನು ನಡೆಸುತ್ತಿದ್ದಾರೆ. ಸಾಮಾನ್ಯವಾಗಿ ಸರ್ಕಾರ ಅಧಿಕಾರದಲ್ಲಿದ್ದಾಗ ಮಂತ್ರಿಗಳಾದವರು, ಶಾಸಕರು ಪಕ್ಷದ ಮಟ್ಟಿಗೆ ಅಷ್ಟೊಂದು ಆಸಕ್ತಿಯನ್ನು ಹೊಂದಿರುವುದಿಲ್ಲ. ಅಂತೆಯೇ ಪ್ರಭುತ್ವ ಮತ್ತು ಪಕ್ಷ ಜೋಡೆತ್ತಿನಂತೆ ಇರಬೇಕು. ಆದರೆ ಇಲ್ಲಿ ಅದು ಸಾಧ್ಯವಾಗುತ್ತಿಲ್ಲ ಎಂದು ವಿಶ್ವನಾಥ್ ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಲ್ಲದೆ, 'ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಡ ಸಮನ್ವಯ ಸಮಿತಿ ಕೇವಲ ನಾಮಕಾವಸ್ಥೆ ಸಮನ್ವಯ ಸಮಿತಿ ಎಂದು ಕಿಡಿಕಾರಿರುವ ಅವರು, 'ಎರಡೂ ಪಕ್ಷಗಳ ನಡುವೆ ಸಮನ್ವಯ ಸಾಧಿಸುವಲ್ಲಿ ಸಿದ್ದರಾಮಯ್ಯ ಸಫಲವಾಗಲೇ ಇಲ್ಲ. ಸಮನ್ವಯ ಸಮಿತಿ ಸುಲಲಿತವಾಗಿ ಸರ್ಕಾರವನ್ನು ನಡೆಸಿಕೊಂಡು ಹೋಗುವ ದೃಷ್ಟಿಯಿಂದ ಸಾಮಾನ್ಯ ಕನಿಷ್ಠ ಕಾರ್ಯಕ್ರಮವನ್ನು ಈವರೆಗೂ ರೂಪಿಸಲು ಸಾಧ್ಯವಾಗಿಲ್ಲ. ಸಮನ್ವಯ ಸಮಿತಿಯಲ್ಲಿ ಜಾತ್ಯಾತೀತ ಜನತಾದಳದ ಅಧ್ಯಕ್ಷನಾದ ನನಗೆ ಮತ್ತು ಕಾಂಗ್ರೆಸ್ ರಾಜ್ಯಾದ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಅವಕಾಶವನ್ನೇ ನೀಡಲಿಲ್ಲ.
ಸಮನ್ವಯ ಸಮಿತಿ ಸಿದ್ದರಾಮಯ್ಯನವರ ಕೈಗೊಂಬೆಯಂತೆ ಕಾರ್ಯನಿರ್ವಹಿಸಬೇಕಾದ ಪರಿಸ್ಥಿತಿ ಸೃಷ್ಠಿಯಾಯಿತೇ ಹೊರತು, ಸೌಹಾರ್ದಯುತ ವಾತಾವರಣದಲ್ಲಿ ನಿರಾತಂಕವಾಗಿ ಸರ್ಕಾರವನ್ನು ನಡೆಸಿಕೊಂಡು ಹೋಗುವ ಪ್ರಾಮಾಣಿಕ ಪ್ರಯತ್ನ ನಡೆಯಲೇ ಇಲ್ಲ. ಇಂತಹ ಸಂದರ್ಭದಲ್ಲಿ ಪಕ್ಷದ ಹೊಣೆಗಾರಿಕೆಯಿಂದ ನನ್ನನ್ನು ಬಿಡುಗಡೆ ಮಾಡಿ ಹುಣಸೂರು ಕ್ಷೇತ್ರದ ಜನರಿಗೆ ಸೇವೆ ಮಾಡಲು ಅನುಕೂಲ ಮಾಡಿಕೊಡಬೇಕೆಂದು ವಿನಮ್ರವಾಗಿ ಕೋರುತ್ತೇನೆ ಎಂದು ಪತ್ರದಲ್ಲಿ ವಿಶ್ವನಾಥ್ ಅವರು ದೇವೇಗೌಡರಿಗೆ ಮನವಿ ಮಾಡಿಕೊಂಡಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos