ಬೆಂಗಳೂರು: ಸಮ್ಮಿಶ್ರ ಸರ್ಕಾರದ ದೋಸ್ತಿಗಳ ವಾಕ್ಸಮರ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಲೇ ಇದೆ, ಪರಸ್ಪರರು ದೂಷಿಸಿಕೊಳ್ಳುತ್ತಲೇ ಇದ್ದಾರೆ.
ಪ್ರಮುಖವಾಗಿ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರೇ ಟಾರ್ಗೆಟ್ ಆಗಿದ್ದಾರೆ. ಕಳೆದ ವರ್ಷಕ್ಕಿಂತ ಈ ವರ್ಷ ಸಿದ್ದರಾಮಯ್ಯ ಪರವಾಗಿ ಕಾಂಗ್ರೆಸ್ ನಾಯಕರು ಒಗ್ಗಟ್ಟಾಗಿ ನಿಂತಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಸಿದ್ದರಾಮಯ್ಯ ವಿರುದ್ಧ ತಿರುಗಿ ಬಿದ್ದಿದ್ದಾರೆ.
ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿರುವುದು ಎಲ್ಲರ ಹುಬ್ಬೇರಿಸಿದೆ, ಸಿದ್ದರಾಮಯ್ಯ ಮತ್ತು ಪರಮೇಶ್ವರ್ ವೈರತ್ವ ಎಲ್ಲರಿಗೂ ಗೊತ್ತಿರುವ ವಿಚಾರವಾಗಿದೆ, ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಹೇಳಿಕೆಗಳು ಸಮ್ಮಿಶ್ರ ಸರ್ಕಾರದಲ್ಲಿ ಬಾರೀ ಕೋಲಾಹಲ ಮೂಡಿಸಿದೆ.
ಸಿದ್ದರಾಮಯ್ಯ ಪರ ಕಾಂಗ್ರೆಸ್ ನಾಯಕರು ನೀಡುತ್ತಿರುವ ಹೇಳಿಕೆಗಳು ಜೆಡಿಎಸ್ ನಾಯಕರುಗಳಿಗೆ ಇರಿಸು ಮುರಿಸು ಉಂಟು ಮಾಡುತ್ತಿದೆ, ವಿಶ್ವನಾಥ್ ಅವರು ನಮ್ಮ ನಾಯಕರ ಬಗ್ಗೆ ಈ ರೀತಿಯ ಹೇಳಿಕೆ ನೀಡಬಾರದು,ನಮ್ಮ ಕಡೆ ಅಥವಾ ಅವರ ಕಡೆಯಿಂದಾಗಲಿ ಈ ರೀತಿಯ ಹೇಳಿಕೆ ನೀಡಬಾರದು, ಈ ರೀತಿಯ ಹೇಳಿಕೆಗಳು ಸಮ್ಮಿಶ್ರ ಸರ್ಕಾರದ ಆರೋಗ್ಯಕ್ಕೆ ಮಾರಕ ಎಂದು ತಿಳಿಸಿದ್ದಾರೆ.
ಇಂಥಹ ಹೇಳಿಕೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ ಆದರೆ ಯಾವುದೇ ಕಾರಮಣಕ್ಕೂ ತಮ್ಮ ಹೇಳಿಕೆಯನ್ನು ಹಿಂಪಡೆಯುವುದಿಲ್ಲ ಎಂದು ವಿಶ್ವನಾಥ್ ಪಟ್ಟು ಹಿಡಿದಿದ್ದಾರೆ,
ಜೆಡಿಎಸ್ ಅಧ್ಯಕ್ಷ ವಿಶ್ವನಾಥ್ ಅವರ ಹೊಟ್ಟೆಕಿಚ್ಚಿನ ಮಾತುಗಳನ್ನು ಸಮನ್ವಯ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ. ಮೊದಲು ಜಿಟಿ ದೇವೇಗೌಡ, ಈಗ ವಿಶ್ವನಾಥ್…ಮುಂದೆ ಯಾರು ಗೊತ್ತಿಲ್ಲ. ನನ್ನನ್ನು ಗುರಿಯಾಗಿಸಿದ ಇಂತಹ ಬೇಜವಾಬ್ದಾರಿ ಹೇಳಿಕೆಗಳ ಬಗ್ಗೆ ಜೆಡಿಎಸ್ ವರಿಷ್ಠರು ಗಮನ ಹರಿಸುವುದು ಒಳಿತು ಎಂದು ಹೇಳಿದ್ದಾರೆ.
ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಗೆ ಕುಖ್ಯಾತರು. ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದು ಮಾಜಿ ಸಿಎಂ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.
ಕುಮಾರಸ್ವಾಮಿ, ದೇವೇಗೌಡರ ಮೂಲಕ ವಿಶ್ವನಾಥ್ ಹೇಳಿಕೆಗಳನ್ನು ನೀಡುತ್ತಿದ್ದಾರೆಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಮತ್ತು ವಿಶ್ವನಾಥ್ ಪರಸ್ಪರ ಕಚ್ಚಾಡಿಕೊಳ್ಳುತ್ತಿದ್ದರೇ ಇತ್ತ ಸಿಎಂ ಕುಮಾರಸ್ವಾಮಿ ಕುಂದಗೋಳ ಉಪಚುನಾವಣೆ ಪ್ರಚಾರದಲ್ಲಿ ಪಾಲ್ಗೋಂಡಿದ್ದಾರೆ.