ಬನವಾಸಿ: ಡಿಸೆಂಬರ್ 5 ರಂದು ರಾಜ್ಯದಲ್ಲಿ ನಡೆಯಲಿರುವ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಪರ ಮತಯಾಚನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲಿ ಅಭಿವೃದ್ದಿ ಕೆಲಸಗಳು ಆಗುತ್ತಿಲ್ಲವಾದ್ದರಿಂದ ಹೆಬ್ಬಾರ್ ಒಡಗೂಡಿ ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಉಪ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.
ಭೀಕರ ನೆರೆ ಹಾವಳಿಯಿಂದ ರಾಜ್ಯದ ರೈತಾಪಿ ವರ್ಗ ಸಂಕಷ್ಟದಲ್ಲಿದೆ. ಕೃಷಿ ಸಾಲ ಮನ್ನಾ ಸಂಬಂಧಿಸಿ ಯಾವುದೇ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳು ರೈತರಿಗೆ ಸಾಲ ವಸೂಲಾತಿ ಸಂಬಂಧಿಸಿ ನೋಟಿಸ್ ನೀಡುವಂತಿಲ್ಲ. ಬಲತ್ಕಾರದಿಂದ ಸಾಲವಸೂಲಾತಿ ಪ್ರಕ್ರಿಯೆ ಜರುಗಿದರೆ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ತೇವೆ ಎಂದು ತಿಳಿಸಿದರು.
ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಲ್ಲಿ ಹಣದ ಕೊರತೆಯಿಲ್ಲ. ರೈತ ಪರ ಬಜೆಟ್ ಮೂಲಕ ಕೃಷಿಕರ ಹಿತ ಕಾಪಾಡುವ ಕಾರ್ಯ ಬಿಜೆಪಿ ಮಾಡಲಿದೆ ಕನ್ನಡದ ಮೊದಲ ರಾಜಧಾನಿ ಬನವಾಸಿ ಬೇರೆ ಜಿಲ್ಲೆಗೆ ಸೇರ್ಪಡಿಸುವ ದುಸ್ಸಾಹಸಕ್ಕೆ ಕೈ ಹಾಕೊಲ್ಲ ಎಂದು ಹೇಳಿದ ಯಡಿಯೂರಪ್ಪ, ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಆಧಾರ ರಹಿತ ಆರೋಪದಲ್ಲಿ ತೊಡಗಿದ್ದಾರೆ. ವಿರೋಧ ಪಕ್ಷವಾಗಿ ನಿಲ್ಲಲು ಯೋಗ್ಯತೆ ಇಲ್ಲದ ಕಾಂಗ್ರೆಸ್ ತಬ್ಬಲಿಯಂತೆ ಅಲೆದಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವರದಿ: ಹೆಚ್ ಕೆಪಿ