ರಾಜಕೀಯ

ಉಪ ಚುನಾವಣೆ ಮುಂದೂಡಿ: ಸುಪ್ರೀಂ ಕೋರ್ಟ್ ಗೆ ಅನರ್ಹ ಶಾಸಕರಿಂದ ಅರ್ಜಿ

Srinivasamurthy VN

ಬೆಂಗಳೂರು: ಚುನಾವಣಾ ಆಯೋಗ ಘೋಷಣೆ ಮಾಡಿರುವ ಉಪ ಚುನಾವಣೆ ವೇಳಾಪಟ್ಟಿಗೆ ಕರ್ನಾಟಕದ ಅನರ್ಹಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಉಪ ಚುನಾವಣೆಯನ್ನು ಮುಂದೂಡುವಂತೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಅನರ್ಹಗೊಂಡ ಕರ್ನಾಟಕದ ಒಟ್ಟು 15 ಶಾಸಕರು ಉಪ ಚುನಾವಣೆಯನ್ನು ಮುಂದೂಡುವಂತೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಇದೇ ಕಾರಣಕ್ಕೆ ನಿನ್ನೆ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ತುರ್ತು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಚರ್ಚೆ ಬಳಿಕ ಅನರ್ಹ ಶಾಸಕರು ಈ ನಿರ್ಧಾರಕ್ಕೆ ಬಂದಿದ್ದು, ಸೋಮವಾರವೇ ಈ ಕುರಿತಂತೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಈ ಕುರಿತಂತೆ ಮಾತನಾಡಿರುವ ಸಿಎಂ ಬಿಎಸ್ ವೈ ಅವರ ಆಪ್ತ ಅಧಿಕಾರಿಯೊಬ್ಬರು, ಸೋಮವಾರ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವ ಮುನ್ನನಾವು ಚುನಾವಣಾಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಬೇಕು ಎಂದು ಸಲಹೆ ನೀಡಿದ್ದಾರೆ. 

ಇದೇ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬೃಹತ್ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಅವರು, 'ಉಪಚುನಾವಣೆಯಲ್ಲಿ ಅನರ್ಹ ಶಾಸಕರು ಸ್ಪರ್ಧಿಸಲು ಯಾವುದೇ ರೀತಿ ಅಡ್ಡಿ ಇಲ್ಲ, ಸೋಮವಾರ ಸುಪ್ರೀಂಕೋರ್ಟ್ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು. ಅಂತೆಯೇ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಉಪ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೋ ಇಲ್ಲವೋ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ ಎಂಬುದು ಗೊತ್ತಿಲ್ಲ. ಅವರಿಗೆ ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ತಮ್ಮ ಪ್ರಕಾರ ಅವರು ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಯಾವುದೇ ಅಡ್ಡಿ, ಆಂತಕ ಇಲ್ಲ ಎಂದು ಹೇಳಿದರು. 

SCROLL FOR NEXT