ರಾಜಕೀಯ

ಅತಿವೃಷ್ಟಿಯಿಂದ ನೊಂದ ಜನರ ಗೋಳು ಅರಣ್ಯರೋದನ: ಗಲಭೆಯ ಬೆಂಕಿಯಲ್ಲಿ ರಾಜಕೀಯದ ರೊಟ್ಟಿ ಬಡಿಯುತ್ತಿರುವ ಸರ್ಕಾರ

Shilpa D

ಬೆಂಗಳೂರು: ರಾಜ್ಯ ಅತಿವೃಷ್ಟಿಯಿಂದ   ತತ್ತರಿಸಿಹೋಗಿದೆ. ಆದರೆ ರಾಜ್ಯ  ಸರ್ಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯದ ರೊಟ್ಟಿ ಬಡಿಯುತ್ತಾ ಕೂತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಅತಿವೃಷ್ಟಿಯಿಂದ ನೊಂದ ಜನರ ಗೋಳು ಅರಣ್ಯರೋದನವಾಗಿದೆ, ಆದರೆ ಇದರ ಬಗ್ಗೆ ಗಮನ ಹರಿಸದ ಬಿಜೆಪಿ ಸರ್ಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯದ ರೊಟ್ಟಿ ಬಡಿಯುತ್ತಿದೆ ಎಂದು ಟ್ವೀಟ್  ಮಾಡಿದ್ದಾರೆ.

ಅತಿವೃಷ್ಟಿಯ ಪರಿಹಾರದಲ್ಲಿ ಕಳೆದ ವರ್ಷದ ವೈಫಲ್ಯ ಈ ಬಾರಿ ಜನರ ಕಷ್ಟ-ಕಾರ್ಪಣ್ಯಗಳನ್ನು ದುಪ್ಪಟ್ಟುಗೊಳಿಸಿದೆ, ಗೃಹಸಚಿವರು ಅತಿವೃಷ್ಟಿ ಸಮೀಕ್ಷೆಗೆ ಪ್ರವಾಸ ಮಾಡುತ್ತಿದ್ದಾರೆ,
ಕಂದಾಯ ಸಚಿವರು ಬೆಂಗಳೂರಿನಲ್ಲಿ ಕೂತು ಕಾವಲಭೈರಸಂದ್ರ ಗಲಭೆ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ ಲೇವಡಿ ಮಾಡಿದ್ದಾರೆ.

ಕಂದಾಯ ಸಚಿವರಿಗೆ ಬೆಂಗಳೂರಿನಲ್ಲೇನು ಕೆಲಸ?  ಮೊದಲು ಇವರನ್ನು ಪ್ರವಾಹಪೀಡಿತ ಪ್ರದೇಶಕ್ಕೆ ಕಳಿಸಿಕೊಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಿದ್ದರಾಮಯ್ಯ
ಆಗ್ರಹಿಸಿದ್ದಾರೆ. 

ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ನನ್ನ ಕ್ಷೇತ್ರವಾದ ಬಾದಾಮಿಯ ಜನ ಪ್ರವಾಹದಿಂದಾಗಿ ಸಂಕಷ್ಟದಲ್ಲಿದ್ದಾರೆ. ಕೊರೋನಾ ಸೋಂಕಿನ ನಂತರ ಕಡ್ಡಾಯ ವಿಶ್ರಾಂತಿಯಲ್ಲಿರುವುದರಿಂದ ಕ್ಷೇತ್ರಕ್ಕೆ ಭೇಟಿ ನೀಡುವ  ಸ್ಥಿತಿಯಲ್ಲಿ ನಾನಿಲ್ಲ. ಇದಕ್ಕಾಗಿ ಕ್ಷಮೆ ಇರಲಿ. ಅಧಿಕಾರಿಗಳು ಮತ್ತು ನಮ್ಮ ಪಕ್ಷದ ನಾಯಕರ  ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

SCROLL FOR NEXT