ರಾಜಕೀಯ

ಈ ವಾರಾಂತ್ಯ ಅಮಿತ್ ಶಾ ರಾಜ್ಯ ಭೇಟಿ,ಸಂಪುಟ ವಿಸ್ತರಣೆ ಚರ್ಚೆ?: ವ್ಯಾಪಕ ಭದ್ರತೆ 

Sumana Upadhyaya

ಬೆಂಗಳೂರು: ನಾಳೆ ಕೇಂದ್ರ ಗೃಹ ಸಚಿವ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಅಮಿತ್ ಶಾ ಜೊತೆ ಬಹು ನಿರೀಕ್ಷಿತ, ಈಗಾಗಲೇ ವಿಳಂಬವಾಗಿರುವ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸಲಿದ್ದಾರೆ.


ಆದರೆ ಮೂಲಗಳಿಂದ ಸಿಕ್ಕಿರುವ ಮಾಹಿತಿ ಪ್ರಕಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆಯ ನಂತರವಷ್ಟೇ ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ ಪಿ ನಡ್ಡಾ ಅವರೇ ರಾಷ್ಟ್ರೀಯ ಅಧ್ಯಕ್ಷರಾಗುವುದು ಬಹುತೇಕ ನಿಶ್ಚಿತವಾಗಿದ್ದು ಜನವರಿ 19ರಂದು ಅವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕಾತಿ ಮಾಡುವುದು ಕೇವಲ ಒಂದು ಔಪಚಾರಿಕವಷ್ಟೆ ಎಂದು ಇನ್ನೊಬ್ಬರು ಹೇಳುತ್ತಾರೆ. ಇನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡ ನಾಡಿದ್ದು ಭಾನುವಾರ ಡಾವೊಸ್ ಗೆ ವಿಶ್ವ ಆರ್ಥಿಕ ವೇದಿಕೆ ಸಭೆಯಲ್ಲಿ ಭಾಗವಹಿಸಲು ತೆರಳುತ್ತಿದ್ದು ಅವರು ಜನವರಿ 23ರಂದು ಹಿಂತಿರುಗುತ್ತಾರೆ. ನಂತರವಷ್ಟೇ ಸಚಿವ ಸಂಪುಟ ವಿಸ್ತರಣೆ ಎಂದು ಹೇಳಲಾಗುತ್ತಿದೆ. 


ಕಳೆದ ಆಗಸ್ಟ್ ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜೆ ಪಿ ನಡ್ಡಾ ಅವರ ಜೊತೆ ಚರ್ಚೆ ನಡೆಸಿ ಅವರ ಸಲಹೆ ಪಡೆದು ಸಚಿವರುಗಳನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿದ್ದರು. ಈಗಲೂ ನಡ್ಡಾ ಅವರ ಒಪ್ಪಿಗೆ ಸಿಗಬೇಕಿದೆ. ಪಕ್ಷದ ಅಧ್ಯಕ್ಷರ ಚುನಾವಣೆಯ ಬಳಿಕವಷ್ಟೇ ಈ ಪ್ರಕ್ರಿಯೆ ನಡೆಯಲಿದೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.


ಬೆಂಗಳೂರು ಸೇರಿ ರಾಜ್ಯದಲ್ಲಿ ತೀವ್ರ ಭದ್ರತೆ: ಇನ್ನು ಅಮಿತ್ ಶಾ ಅವರ ಭೇಟಿ ಹಿನ್ನಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ತೀವ್ರ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಗುಪ್ತಚರ ಇಲಾಖೆ ಕೂಡ ಪರಿಸ್ಥಿತಿಯ ನಿಗಾವಹಿಸುತ್ತಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಅಮಿತ್ ಶಾ ಅವರು ಹುಬ್ಬಳ್ಳಿಯಲ್ಲಿ ಪಕ್ಷದ ರ್ಯಾಲಿಯಲ್ಲಿ ಭಾಗವಹಿಸಲಿದ್ದು ಅದರಲ್ಲಿ 1 ಲಕ್ಷಕ್ಕೂ ಅಧಿಕ ಜನರು ಮತ್ತು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ ತಿಳಿಸಿದ್ದಾರೆ.


ಬೆಂಗಳೂರಿನಲ್ಲಿ ಕೂಡ ಅಮಿತ್ ಶಾ ಅವರು ವೇದಾಂತ ಭಾರತಿ ಅರಮನೆ ಮೈದಾನದಲ್ಲಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.


ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬಂದ ನಂತರ ಅಮಿತ್ ಶಾ ಅವರು ಕರ್ನಾಟಕಕ್ಕೆ ಇದೇ ಮೊದಲ ಬಾರಿ ಭೇಟಿ ನೀಡುತ್ತಿದ್ದು, ಈಗಾಗಲೇ ಭಾರೀ ಪ್ರತಿಭಟನೆ ಕಂಡಿರುವ ರಾಜ್ಯದಲ್ಲಿ ಅವರ ಭೇಟಿ ಸಂದರ್ಭದಲ್ಲಿ ವ್ಯಾಪಕ ಭದ್ರತೆ ಕಲ್ಪಿಸಲಾಗಿದೆ.

SCROLL FOR NEXT