ರಾಜಕೀಯ

ಮೂರ್ನಾಲ್ಕು ದಿನದಲ್ಲಿ ಸಚಿವ ಸಂಪುಟ ವಿಸ್ತರಣೆ: ಸಿಎಂ ಯಡಿಯೂರಪ್ಪ

Lingaraj Badiger

ಬೆಂಗಳೂರು: ಇನ್ನು ಮೂರ್ನಾಲ್ಕು ದಿನದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್​​​ ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ.

ಸಿಎಂ ಯಡಿಯೂರಪ್ಪ ಅವರು ದಾವೋಸ್ ಪ್ರವಾಸದಿಂದ ಇಂದು ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಸಿಎಂ, ಬಿಜೆಪಿಗೆ ಬಂದು ಉಪ ಚುನಾವಣೆಯಲ್ಲಿ ಗೆದ್ದ ಎಲ್ಲಾ ಶಾಸಕರಿಗೂ ಸಚಿವ ಸ್ಥಾನ ನೀಡಲಾಗುವುದು ಎಂದರು.

ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದು, ಸಂಪುಟ ವಿಸ್ತರಣೆ ಕುರಿತು ಅವರೊಂದಿಗೆ ಚರ್ಚಿಸಲಾಗುವುದು. ಇತ್ತೀಚಿಗೆ ಅವರು ರಾಜ್ಯಕ್ಕೆ ಭೇಟಿ ನೀಡಿದಾಗಲೂ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿದ್ದು, ಮೂರ್ನಾಲ್ಕು ದಿನದಲ್ಲಿ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದರು.

ಸಚಿವ ಸಂಪುಟ ವಿಸ್ತರಣೆ ಸಂಬಂಧ ನಾನು ದೆಹಲಿಗೆ ಹೋಗುವ ಅಗತ್ಯ ಇಲ್ಲ. ಈ ಕುರಿತು ಅಮಿತ್ ಶಾ ಅವರೊಂದಿಗೆ ನಾನು ಈಗಾಗಲೇ ಚರ್ಚಿಸಿದ್ದೇನೆ ಮತ್ತು ಅವರು ಒಪ್ಪಿಗೆ ಸಹ ನೀಡಿದ್ದಾರೆ. ಈಗ ಮತ್ತೊಮ್ಮೆ ನೂತನ ಸಚಿವ ಪಟ್ಟಿ ಬಿಡುಗಡೆ ಮಾಡುವಂತೆ ಕೇಳುತ್ತೇನೆ. ಶೇ. 100ರಷ್ಟು ಈ ತಿಂಗಳಲ್ಲೇ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ತಿಳಿಸಿದರು.

ಇನ್ನು ಸಿಎಂ ವಿದೇಶದಿಂದ ಹಿಂದಿರುಗುತ್ತಿದ್ದಂತೆ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸಕ್ಕೆ ಶಾಸಕ ಬಿ.ಸಿ ಪಾಟೀಲ್ ಭೇಟಿ ನೀಡಿದರು.ಸಚಿವ ಸ್ಥಾನದ ಅಪೇಕ್ಷೆ ಮುಂದಿಟ್ಡು ವಿಳಂಬ ಮಾಡದಂತೆ ಮನವಿ ಮಾಡಿದರು. ಇದಕ್ಕೆ ಸಿಎಂ ಸಕಾರಾತ್ಮಕವಾಗಿ ಸ್ಪಂಧಿಸಿದ್ದಾರೆ ಎನ್ನಲಾಗಿದೆ.

ಸಿಎಂ ಭೇಟಿ ಬಳಿಕ ಮಾತನಾಡಿದ ಬಿ.ಸಿ.ಪಾಟೀಲ್, ಮೂರ್ನಾಲ್ಕು ದಿನದಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದು, ತಿಂಗಳಾಂತ್ಯದೊಳಗೆ ಸಂಪುಟ ವಿಸ್ತರಣೆ ಆಗಲಿದೆ ಎನ್ನುವ ವಿಶ್ವಾಸವಿದೆ ಎಂದರು.

SCROLL FOR NEXT