ರಾಜಕೀಯ

ರಿಜ್ವಾನ್ ಅರ್ಷದ್ ರಿಂದ ತೆರವಾಗಿದ್ದ ಪರಿಷತ್ ಸ್ಥಾನಕ್ಕೆ ಫೆ. 17 ರಂದು ಚುನಾವಣೆ

Lingaraj Badiger

ಬೆಂಗಳೂರು: ಕಾಂಗ್ರೆಸ್ ನ ರಿಜ್ವಾನ್ ಅರ್ಷದ್ ಅವರಿಂದ ತೆರವಾಗಿರುವ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಫೆಬ್ರವರಿ 17 ರಂದು ಚುನಾವಣೆ ನಡೆಯಲಿದೆ.

ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಈ ಚುನಾವಣೆ ನಡೆಯಲಿದ್ದು, ಈ ಸಂಬಂಧ ಕೇಂದ್ರ ಚುನಾವಣಾ ಆಯೋಗ ವೇಳಾ ಪಟ್ಟಿ ಪ್ರಕಟಿಸಿದೆ.

ಜನವರಿ 30 ರಂದು ಚುನಾವಣೆಗೆ ಅಧಿಸೂಚನೆ ಜಾರಿಯಾಗಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಉಮೇದುವಾರಿಕೆ ಸಲ್ಲಿಸಲು ಫೆ.6 ಕೊನೆಯ ದಿನವಾಗಿದ್ದು, ಮರುದಿನ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಫೆ. 10 ಕಡೆಯ ದಿನವಾಗಿದೆ.

ಅಗತ್ಯಬಿದ್ದರೆ ಫೆಬ್ರವರಿ 17 ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಬಳಿಕ ಮತ ಎಣಿಕೆ ನಡೆದು ಅಂದೇ ಫಲಿತಾಂಶ ಪ್ರಕಟಿಸಲಾಗುವುದು ಎಂದು ಆಯೋಗ ತಿಳಿಸಿದೆ.

ಇತ್ತೀಚೆಗೆ ನಡೆದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಶಿವಾಜಿ ನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದ ರಿಜ್ವಾನ್ ಅರ್ಷದ್ ಗೆಲುವು ಸಾಧಿಸಿದ್ದರು. ಬಳಿಕ ಅವರು ವಿಧಾನ ಪರಿಷತ್ತಿನ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

ಶಿವಾಜಿನಗರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಮಾಜಿ ಸಚಿವ ಆರ್. ರೋಷನ್ ಬೇಗ್, ಕಾಂಗ್ರೆಸ್ ನಾಯಕರ ವಿರುದ್ಧ ಬಂಡಾಯ ಎದ್ದು, ಬಿಜೆಪಿ ಸೇರುವ ಉದ್ದೇಶದಿಂದ ಶಾಸಕ ಸ್ಥಾನ ತೊರೆದಿದ್ದರು. ಆದರೆ ಬೇಗ್ ಬಿಜೆಪಿ ಸೇರುವ ಆಸೆ ಕೈಗೂಡಲಿಲ್ಲ. ಐಎಂಎ ಬಹುಕೋಟಿ ಹಗರಣದಲ್ಲಿ ಶಾಮೀಲಾಗಿದ್ದ ಆರೋಪ ಹೊತ್ತಿದ್ದ ಬೇಗ್ ಅವರನ್ನು ಬಿಜೆಪಿ ತನ್ನ ಪಕ್ಷಕ್ಕೆ ಸೇರಿಸಿಕೊಂಡಿರಲಿಲ್ಲ.

SCROLL FOR NEXT