ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಸಾಮೂಹಿಕ ಡಿಜಿಟಲ್ ಪ್ರಮಾಣವಚನ ಸಮಾರಂಭದ "ಭಾರಿ ಯಶಸ್ಸಿನ" ನಂತರ, ಡಿ ಕೆ ಶಿವಕುಮಾರ್ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಲು ಡಿಜಿಟಲ್ ತಂತ್ರಜ್ಞಾನದ ಮೊರೆ ಹೋಗುತ್ತಿದ್ದಾರೆ.
ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಸಂಘಟನೆ ಹಾಗೂ ಬಲವರ್ಧನೆ ಮಾಡುವ ನಿಟ್ಟಿನಲ್ಲಿ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಾಮಾಜಿಕ ಜಾಲತಾಣಗಳ ಬಳಕೆ ಹೇಗೆ ಮಾಡಬೇಕು ಎಂಬ ಕುರಿತಾಗಿ ಚರ್ಚೆ ನಡೆಯಿತು.
ಕೊರೊನಾ ಲಾಕ್‌ಡೌನ್ ಅವಧಿಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದನೆ ನೀಡುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳನ್ನು ಹೇಗೆ ಬಳಸಬಹುದು ಎಂಬ ನಿಟ್ಟಿನಲ್ಲಿ ಮುಖಂಡರ ಜೊತೆಗೆ ಸಮಾಲೋಚನೆ ನಡೆಸಿದರು.
ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಡಿಜಿಟಲ್ ತಂತ್ರಜ್ಞಾನ ಹಾಗೂ ಸಾಮಾಜಿಕ ಜಾಲತಾಣಗಳ ಬಳಕೆಗೆ ಆದ್ಯತೆ ನೀಡುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಸಮಾರಂಭದಲ್ಲೂ ಡಿಜಿಟಲ್ ತಂತ್ರಜ್ಞಾನ ಹಾಗೂ ಸಾಮಾಜಿಕ ಜಾಲತಾಣಗಳನ್ನು ಸಮರ್ಪಕವಾಗಿ ಬಳಸಲಾಗಿತ್ತು.