ರಾಜಕೀಯ

ದೇವೇಗೌಡ, ಖರ್ಗೆ, ಕಡಾಡಿ, ಅಶೋಕ್ ಗಸ್ತಿ ರಾಜ್ಯಸಭೆಗೆ ಅವಿರೋಧ ಆಯ್ಕೆ

Nagaraja AB

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಧಾನ ಸಭೆ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಹೇಳಿದ್ದಾರೆ.

ಜೆಡಿಎಸ್ ನಿಂದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಅಶೋಕ್  ಗಸ್ತಿ, ಈರಣ್ಣ ಕಡಾಡಿ ಅವಿರೋಧ ಆಯ್ಕೆಯಾಗಿದ್ದಾರೆ.

ನಾಮಪತ್ರ ವಾಪಸ್ ಪಡೆಯುವ ಅವಧಿ ಇಂದು ಸಂಜೆ ಮುಗಿದ ಹಿನ್ನೆಲೆಯಲ್ಲಿ ನಾಲ್ಕು ಅಭ್ಯರ್ಥಿಗಳು ಅವಿರೋಧ ಆಯ್ಕೆ ನಡೆದಿದೆ. ಅವಿರೋಧವಾಗಿ ಆಯ್ಕೆಯಾದ ಅಧಿಕೃತ ಘೋಷಣಾ ಪತ್ರವನ್ನು ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಅಭ್ಯರ್ಥಿಗಳಾದ ಅಶೋಕ್ ಗಸ್ತಿ, ಈರಣ್ಣ ಕಡಾಡಿ ಅವರು ಪಡೆದುಕೊಂಡಿದ್ದಾರೆ.

ಬಳಿಕ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ನನ್ನ ಮೇಲೆ ನಂಬಿಕೆ ಇಟ್ಟು ರಾಜ್ಯಸಭೆಗೆ ಕಳುಹಿಸಿದ್ದಾರೆ.ಅವರಿಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇನೆ. ರಾಜ್ಯದ, ದೇಶದ ಸಮಸ್ಯೆಗಳನ್ನು ಸಮರ್ಥವಾಗಿ ಸಂಸತ್ತಿನಲ್ಲಿ ಪ್ರಸ್ತಾಪಿಸುತ್ತೇನೆ ಎಂದು ಹೇಳಿದರು. 

2019ರ ಲೋಕಸಭಾ ಚುನಾವಣೆಯಲ್ಲಿ ಎಚ್. ಡಿ ದೇವೇಗೌಡ ಅವರು ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಬಿಟ್ಟು ತುಮಕೂರಿನಿಂದ ಸ್ಪರ್ಧಿಸಿದ್ದರು. ಆದರೆ, ಅಲ್ಲಿ ಬಿಜೆಪಿ ಅಭ್ಯರ್ಥಿ ಜಿ.ಎಸ್. ಬಸವರಾಜ್ ಅವರ ವಿರುದ್ಧ ಸೋಲು ಕಂಡಿದ್ದರು. ಮಲ್ಲಿಕಾರ್ಜುನ ಖರ್ಗೆ ಅವರು ಡಾ.ಉಮೇಶ್ ಜಾಧವ್ ಅವರ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಇದೀಗ ರಾಜ್ಯಸಭಾ ಚುನಾವಣೆ ಮೂಲಕ ಈ ಇಬ್ಬರು ನಾಯಕರು ಸಂಸತ್ ಪ್ರವೇಶಿಸಿದ್ದಾರೆ. 

SCROLL FOR NEXT