ರಾಜಕೀಯ

ಸಚಿವ ಸಂಪುಟ ವಿಸ್ತರಣೆ: ಎರಡ್ಮೂರು ದಿನಗಳಲ್ಲಿ ಅಂತಿಮ - ಸಿಎಂ ಯಡಿಯೂರಪ್ಪ

Lingaraj Badiger

ಬೆಂಗಳೂರು: ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿ ಬಂದಿದ್ದು, ಇನ್ನೆರಡು ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಸದ್ಯದಲ್ಲಿಯೇ ಹೊಸ ಸಚಿವರು ಯಾರು? ಯಾರಿಗೆ ಯಾವ ಖಾತೆ ಎನ್ನುವುದು ಗೊತ್ತಾಗಲಿದೆ. ಇನ್ನೆರೆಡು ಮೂರು ದಿನಗಳಲ್ಲಿ ಎಲ್ಲವೂ ಅಂತಿಮವಾಗಲಿದೆ ಎಂದರು.

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ರೇಣುಕಾಚಾರ್ಯ ಸಭೆ ನಡೆಸಿದರ ಬಗ್ಗೆ ಕೇಳಿದ ಪ್ರಶ್ನೆಗೆ, ಎಲ್ಲಾ ಶಾಸಕರು ಸೇರಿ ಸಭೆ ನಡೆಸುವುದು ಸಾಮಾನ್ಯ ಎಂದು ಪ್ರತಿಕ್ರಿಯಿಸಿದರು.

ಸಚಿವ ಸಂಪುಟ ವಿಸ್ತರಣೆ ಸಂಬಂಧ ಬುಧವಾರ ದೆಹಲಿಗೆ ತೆರಳಿದ್ದ ಸಿಎಂ ಯಡಿಯೂರಪ್ಪ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ 20 ನಿಮಿಷಗಳ ಕಾಲ ಚರ್ಚೆ ನಡೆಸಿ ಬರಿಗೈಯಲ್ಲಿ ವಾಪಸ್ಸಾಗಿದ್ದಾರೆ.

ಯಡಿಯೂರಪ್ಪ ಅವರು ನಡ್ಡಾ ಅವರಿಗೆ ಸಂಪುಟ ವಿಸ್ತರಣೆಗೆ ಅನುಮತಿ ಕೋರಿದ್ದಾರೆ. ಜೊತೆಗೆ ಸಚಿವಾಕಾಂಕ್ಷಿಗಳ ಪಟ್ಟಿಯನ್ನು ಅಧ್ಯಕ್ಷರಿಗೆ ಸಲ್ಲಿಸಿದ್ದಾರೆ. ಆದರೆ ಹೈಕಮಾಂಡ್ ವರಿಷ್ಠರು ಇನ್ನು ಯಾವುದೇ ಅಂತಿಮ ತೀರ್ಮಾನವನ್ನು ತಿಳಿಸಿಲ್ಲ.

SCROLL FOR NEXT