ರಾಜಕೀಯ

`ಒಂದು ರಾಷ್ಟ್ರ ಒಂದು ಚುನಾವಣೆ' ಕುರಿತು ಚಳಿಗಾಲ ಅಧಿವೇಶನದಲ್ಲಿ ಚರ್ಚೆ: ವಿಶ್ವೇಶ್ವರ ಹೆಗಡೆ ಕಾಗೇರಿ 

Sumana Upadhyaya

ಬೆಂಗಳೂರು: ರಾಜ್ಯ ವಿಧಾನಮಂಡಲದ ಚಳಿಗಾಲ ಅಧಿವೇಶನ ಡಿಸೆಂಬರ್ 7ರಿಂದ 15ರವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ಕೊನೆಯ ಎರಡು ದಿನ ಚರ್ಚೆ ನಡೆಸಲಾಗುವುದು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ವಿಧಾನಸಭೆ ಕಲಾಪಗಳ ಬಗ್ಗೆ ಮಾಹಿತಿ ನೀಡಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಸೂಚಿಸಿರುವ ಒಂದು ರಾಷ್ಟ್ರ ಒಂದು ಚುನಾವಣೆ ವಿಷಯದ ಕುರಿತು ಗಂಭೀರವಾಗಿ ಚರ್ಚಿಸಲಾಗುವುದು ಎಂದರು.
ಕಲಾಪದ ವೇಳೆ ಎಲ್ಲಾ ಪ್ರಚಲಿತ ವಿಷಯಗಳ ಕುರಿತು ಗಂಭೀರ ಚರ್ಚೆ ನಡೆಸಲಾಗುವುದು. ಕಲಾಪ ಕುರಿತು ಈಗಾಗಲೇ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಜೊತೆ ಚರ್ಚೆ ನಡೆಸಿದ್ದೇನೆ ಎಂದರು.

ಸದನದ ಕಲಾಪ ವೇಳೆ ಪ್ರಶ್ನೋತ್ತರ ಅವಧಿ, 10 ಮಸೂದೆಗಳ ಮಂಡನೆ ಮಾಡಲಾಗುವುದು. ಎಲ್ಲಾ ಕೋವಿಡ್-19 ಶಿಷ್ಠಾಚಾರಗಳನ್ನು ಪಾಲಿಸಲಾಗುವುದು, ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಶಾಸಕರು, ಸಿಬ್ಬಂದಿ ಮತ್ತು ಮಾಧ್ಯಮ ಪ್ರತಿನಿಧಿಗಳು ಕಡ್ಡಾಯವಾಗಿ ಕೋವಿಡ್-19 ಪರೀಕ್ಷೆಗೆ ಒಳಗಾಗಬೇಕೆ ಎಂದು ಪರಿಶೀಲಿಸಲಾಗುವುದು ಎಂದು ಹೇಳಿದರು.

SCROLL FOR NEXT