ರಾಜಕೀಯ

ಉಪ ಚುನಾವಣೆಯಲ್ಲಿ ನಿಮ್ಮ ಪ್ರಶ್ನೆಗಳಿಗೆ ತಕ್ಕ ಉತ್ತರ ಸಿಗಲಿದೆ: ಸಿದ್ದರಾಮಯ್ಯಗೆ ಎಚ್.ಡಿ. ಕುಮಾರಸ್ವಾಮಿ ತಿರುಗೇಟು

Raghavendra Adiga

ಬೆಂಗಳೂರು:  ಜೆಡಿಎಸ್ ರಾಜಕೀಯ ಪಕ್ಷವೇ ಅಲ್ಲ ಎಂದು ಆರೋಪಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಟು ಶಬ್ದಗಳಲ್ಲಿ ಖಂಡಿಸಿದ್ದಲ್ಲದೆ ಕಾಂಗ್ರೆಸ್ ಪಕ್ಷ ದ ನಾಯಕರನ್ನು ಗುರಿ ಮಾಡಿಕೊಂಡು ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಜಾತ್ಯತೀತ ಜನತಾದಳದಿಂದಲೇ ಪ್ರವರ್ದಮಾನಕ್ಕೆ ಬಂದಿದ್ದ, ಜೆಡಿಎಸ್ ಪಕ್ಷದಿಂದಲೇ ಉಪ ಮುಖ್ಯಮಂತ್ರಿ ಆದ ನಾಯಕರೊಬ್ಬರು, ಸಭೆಯೊಂದರಲ್ಲಿ ಜೆಡಿಎಸ್ ಮುಖಂಡರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳಿಸಿದ ವೇಳೆ ಜೆಡಿಎಸ್ ಪಕ್ಷದ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಜೆಡಿಎಸ್ ರಾಜಕೀಯ ಪಕ್ಷವಲ್ಲ ಎಂದು ಹೇಳಿದ್ದಾರೆ. ಉಪಚುನಾವಣೆಗೆ ಅಭ್ಯರ್ಥಿಯ ಗತಿ ಇಲ್ಲದೆ ಜೆಡಿಎಸ್ ಪಕ್ಷದ ನಾಯಕರನ್ನು ಸೆಳೆದ ನಿಮ್ಮದು ರಾಜಕೀಯ ಪಕ್ಷವೇ? ಎಂದು ಕಿಡಿಕಾರಿದ್ದಾರೆ.

ಭಾರತದ ಅತಿ ಹಳೆಯ ರಾಜಕೀಯ ಪಕ್ಷವಾಗಿರುವ ಕಾಂಗ್ರೆಸ್‌ ಇಂದು ಯಾವ ಪರಿಸ್ಥಿತಿಯಲ್ಲಿದೆ, ಯಾವ ರಾಜ್ಯಗಳಲ್ಲಿ ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡಿದೆ? ಎಲ್ಲೆಲ್ಲಿ ಯಾರು ಯಾರ ಹೆಗಲ ಮೇಲೆ ಕುಳಿತು ರಾಜಕೀಯ ಮಾಡುತ್ತಿದೆ? ಎಲ್ಲೆಲ್ಲಿ ಯಾರು ಯಾರಿಗೆ ಹೆಗಲಾಗಿದ್ದಾರೆ? ಜೆಡಿಎಸ್‌ ಉಪ್ಪು ತಿಂದ ಆ ಮಹಾನ್‌ ನಾಯಕರು ಈ ಪ್ರಶ್ನೆಗಳಿಗೆ ಉತ್ತರ ನೀಡುವರೇ? ಎಂದು ಟ್ವೀಟ್ ಮೂಲಕ ಸಿದ್ದರಾಮಯ್ಯನಿಗೆ ಪ್ರಶ್ನಿಸಿದ್ದಾರೆ.

ಮಿತ್ರ ಪಕ್ಷಗಳನ್ನೇ ಆಪೋಷನ ಪಡೆದು ಜೀವಿಸುತ್ತಿರುವ, ಜನರಿಂದ ತಿರಸ್ಕಾರವಾಗಿರುವ, ಇತರ ಪಕ್ಷಗಳೊಂದಿಗೆ ಚೌಕಾಸಿಯಲ್ಲಿ ತೊಡಗಿರುವ ಕಾಂಗ್ರೆಸ್‌ ಭಾರತದಲ್ಲಿ ರಾಜಕೀಯ ಪಕ್ಷವಾಗಿ ಉಳಿದಿದೆಯೇ? ಕಾಂಗ್ರೆಸ್‌ ತನ್ನ ಅಹಂಕಾರದ ಪ್ರವೃತ್ತಿ ಮುಂದುವರಿಸಿಕೊಂಡು ಹೋದರೆ ಕರ್ನಾಟಕದಲ್ಲೂ ನೆಲೆ ಕಳೆದುಕೊಳ್ಳುವುದರಲ್ಲಿ ಅನುಮಾನಗಳಿಲ್ಲವೆಂದು ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲವಿಲ್ಲವೆಂದು ಆರೋಪಿಸಿದ್ದಾರೆ.

2018ರ ಚುನಾವಣೆಯಲ್ಲಿ ‘ಮಹಾನ್‌ ನಾಯಕರ’ ‘ಅಪ್ಪನಾಣೆ’ ‘ತಿಪ್ಪರಲಾಗ’ದ ಸವಾಲುಗಳನ್ನು ಜನ ಸೋಲಿಸಿದ್ದಾರೆ. ಆ ಪಕ್ಷ ಅಧಿಕಾರಕ್ಕೆ ಬಾರದು, ಈ ಪಕ್ಷ ಅಧಿಕಾರಕ್ಕೆ ಬಾರದು ಎಂದು ‘ಅಪ್ಪನಾಣೆ’ಗಳನ್ನು ಇಟ್ಟವರಿಗೆ ಜನ, ಆಣೆ ಪ್ರಮಾಣದ ಮಹತ್ವ ತಿಳಿಸಿಕೊಟ್ಟಿದ್ದಾರೆ. ಈ ಉಪ ಚುನಾವವಣೆಯಲ್ಲೂ ಅವರಿಗೆ ತಕ್ಕ ಉತ್ತರ ಸಿಗಲಿದೆ. ಅದಕ್ಕಾಗಿ ಕಾಯಲಿ ಎನ್ನುವ ಮೂಲಕ ಶಿರಾ ಮತ್ತು ರಾಜರಾಜೇಶ್ವರಿ ನಗರದ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮಣ್ಣು ಮುಕ್ಕಿಸುತ್ತೇವೆ ಎಂಬ ಎಚ್ಚರಿಕೆ ಸಂದೇಶವನ್ನು ಕುಮಾರಸ್ವಾಮಿ ನೀಡಿದ್ದಾರೆ.

SCROLL FOR NEXT