ರಾಜಕೀಯ

ಕೊರೋನಾ ಹಿನ್ನೆಲೆ: ವಿಧಾನಸಭೆ ಕಲಾಪ ಸೆ.26ಕ್ಕೆ ಮುಕ್ತಾಯಗೊಳಿಸಲು ನಿರ್ಧಾರ

Lingaraj Badiger

ಬೆಂಗಳೂರು: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ವಿಧಾನಸಭೆಯ ಕಲಾಪವನ್ನು ಇದೇ ಸೆಪ್ಟೆಂಬರ್ 26, ಶನಿವಾರಕ್ಕೆ ಮುಕ್ತಾಯಗೊಳಿಸಲು ಕಲಾಪ ಸಲಹಾ ಸಮಿತಿ ತೀರ್ಮಾನಿಸಿದೆ.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕಾನೂನು ಸಚಿವ ಮಾಧುಸ್ವಾಮಿ, ಕಂದಾಯ ಸಚಿವ ಆರ್.ಅಶೋಕ್, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಶಾಸಕರಾದ ಪರಮೇಶ್ವರ್, ಡಿ.ಕೆ.ಶಿವಕುಮಾರ್, ಆರ್.ವಿ.ದೇಶಪಾಂಡೆ, ಜೆಡಿಎಸ್ ಶಾಸಕ ಬಂಡೆಪ್ಪ ಕಾಶೆಂಪುರ್ ಹಾಗೂ ಆಡಳಿತ ಮತ್ತು ಪ್ರತಿಪಕ್ಷಗಳ ಮುಖ್ಯ ಸಚೇತಕರು ಸಭೆಯಲ್ಲಿ ಭಾಗಿಯಾಗಿದ್ದರು.

ಸೆ.21ರಿಂದ 30ರವರೆಗೆ ಅಧಿವೇಶನ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಕೊರೋನಾ ಹಿನ್ನೆಲೆಯಲ್ಲಿ ವಿಧಾನಮಂಡಲ ಕಲಾಪವನ್ನು ಆರೇ ದಿನಕ್ಕೆ ಮೊಟಕುಗೊಳಿಸಲಾಗಿದೆ.

ಇದಕ್ಕು ಮುನ್ನ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ನಾನು ನಮ್ಮ ಶಾಸಕರೊಂದಿಗೆ, ಸಚಿವರೊಂದಿಗೆ ಮಾತನಾಡಿದ್ದು, ಮೂರು ದಿನಗಳಲ್ಲಿ ಅಧಿವೇಶನ ಮುಕ್ತಾಯಗೊಳಿಸಲು ನಿರ್ಧರಿಸಿದ್ದೇವೆ. ಸಾಕಷ್ಟು ಶಾಸಕರು ಈಗಾಗಲೇ ಕೋವಿಡ್ ಸೋಂಕಿಗೆ ತುತ್ತಾಗಿದ್ದು, ಸುಮಾರು 50  ರಿಂದ 60 ಶಾಸಕರು ಸದನಕ್ಕೆ ಗೈರಾಗುವ ಸಾಧ್ಯತೆ ಇದೆ ಎಂದಿದ್ದರು.

SCROLL FOR NEXT