ಡಿಕೆ ಶಿವಕುಮಾರ್ 
ರಾಜಕೀಯ

ರಾಜ್ಯದ 'ದೇವಾಲಯಗಳ ಸ್ವಾಯತ್ತತೆ ಐತಿಹಾಸಿಕ ಬ್ಲಂಡರ್, ಬಿಜೆಪಿ ಸರ್ಕಾರ ಭಸ್ಮವಾಗಲಿದೆ': ಡಿಕೆ ಶಿವಕುಮಾರ್

ರಾಜ್ಯದ ದೇವಾಲಯಗಳು ಜನರ ಆಸ್ತಿ. ಬಿಜೆಪಿ ಸರ್ಕಾರ ಈ ಆಸ್ತಿಯನ್ನು ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರಿಗೆ ಹಸ್ತಾಂತರ ಮಾಡಲು ಮುಂದಾಗಿದೆ. ಇದು ಹಿಂದೂ ವಿರೋಧಿ ನೀತಿಯಾಗಿದ್ದು,...

ಬೆಂಗಳೂರು: ರಾಜ್ಯದ ದೇವಾಲಯಗಳು ಜನರ ಆಸ್ತಿ. ಬಿಜೆಪಿ ಸರ್ಕಾರ ಈ ಆಸ್ತಿಯನ್ನು ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರಿಗೆ ಹಸ್ತಾಂತರ ಮಾಡಲು ಮುಂದಾಗಿದೆ. ಇದು ಹಿಂದೂ ವಿರೋಧಿ ನೀತಿಯಾಗಿದ್ದು, ಐತಿಹಾಸಿಕ ಪ್ರಮಾದ. ರಾಜ್ಯದ ಜನ ಹಾಗೂ ಆ ದೇವರು ಬಿಜೆಪಿಯನ್ನು ಕ್ಷಮಿಸುವುದಿಲ್ಲ. ಈ ನಿರ್ಧಾರದಿಂದ ಬಿಜೆಪಿ ಸರ್ಕಾರ ಸುಟ್ಟು ಭಸ್ಮವಾಗಲಿದೆ. ಕಾಂಗ್ರೆಸ್ ಹಿಂದೂ ವಿರೋಧಿಯಲ್ಲ, ಬಿಜೆಪಿ ನಿಜವಾದ ಹಿಂದೂ ವಿರೋಧಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ ನೀಡಿದ್ದಾರೆ.

ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಪರಂಪರೆಯನ್ನು ಬುಡಮೇಲು ಮಾಡಲು ರಾಜ್ಯ ಸರ್ಕಾರ ಹೊರಟಿದೆ. ಒಂದೆರಡು ದೇವಾಲಯಗಳು, ಮಠಗಳನ್ನು ಬಿಟ್ಟರೆ ಉಳಿದೆಲ್ಲವೂ ಸರ್ಕಾರದ ನಿಯಂತ್ರಣದಲ್ಲಿದೆ. ಎಲ್ಲ ದೇವಾಲಯಗಳಲ್ಲಿ ಜನರು ಕೋಟ್ಯತರ ರೂಪಾಯಿಯನ್ನು ಹುಂಡಿಗೆ ಹಾಕುತ್ತಾರೆ. ದೇವಾಲಯ ಇವತ್ತಿನದ್ದಲ್ಲ, ನೂರಾರು ವರ್ಷಗಳ ಆಸ್ತಿ. ಇದನ್ನು ತಮ್ಮ ಕಾರ್ಯಕರ್ತರಿಗೆ ಹಂಚಲು ಬಿಜೆಪಿ ಸರ್ಕಾರ ಹೊರಟಿದೆ ಎಂದು ಆರೋಪಿಸಿದ್ದಾರೆ.

ನಾವು ಕೂಡ ಹಿಂದೂಗಳು. ಹಿಂದೂ ಧರ್ಮ ಹಾಗೂ ಸಂಸ್ಕೃತಿಯಲ್ಲಿ ನಂಬಿಕೆ ಇಟ್ಟಿರುವವರು. ಈ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜನಪರವಾದ ಒಂದೇ ಒಂದು ಯೋಜನೆಯನ್ನು ನೀಡಲಿಲ್ಲ. ನಮ್ಮ ಸರ್ಕಾರ ಕೊಟ್ಟ ಕಾರ್ಯಕ್ರಮಗಳು ಹಾಗೂ ಬಿಜೆಪಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ. ನಾವು ಅದಕ್ಕೆ ಸಿದ್ಧ. ಈಗ ಚುನಾವಣೆಯಲ್ಲಿ ಸೋಲುತ್ತಿದ್ದೇವೆ ಎಂಬ ಕಾರಣಕ್ಕೆ ಇವರು ಗೋಹತ್ಯೆ, ಮತಾಂತರ ನಿಷೇಧ, ದೇವಾಲಯಗಳ ಸ್ವಾಯತ್ತತೆ ಕಾನೂನು ತರುತ್ತಿದ್ದಾರೆ. ಚುನಾವಣೆ ಸೋಲನ್ನು ಮರೆಮಾಚಲು, ಜನರನ್ನು ಭಾವನಾತ್ಮಕವಾಗಿ ಹಿಡಿದಿಡಲು ಪ್ರಯತ್ನಿಸುತ್ತಿದ್ದು, ನಾವು ಇದಕ್ಕೆ ಅವಕಾಶ ನೀಡುವುದಿಲ್ಲ ಎಂದಿದ್ದಾರೆ.

ಈ ರೀತಿ ಮಾಡಿದರೆ ಜನ ಮತ ಹಾಕುತ್ತಾರೆ ಎಂಬ ಭ್ರಮೆಯಿಂದ ಮುಖ್ಯಮಂತ್ರಿಗಳು ಹೊರಬರಬೇಕು. ದೇವಾಲಯಗಳಲ್ಲಿ ಈಗ ನಡೆದುಕೊಂಡು ಹೋಗುತ್ತಿರುವ ಆಚರಣೆಯನ್ನು ಮುಂದುವರಿಸಬೇಕು. ಇಲ್ಲದಿದ್ದರೆ ನಿಮ್ಮ ಪಕ್ಷ, ಸರ್ಕಾರ ಸುಟ್ಟು ಹೋಗುತ್ತದೆ. ನಾವು ಹಿಂದೂ ವಿರೋಧಿಗಳಲ್ಲ, ನೀವು ನಿಜವಾದ ಹಿಂದೂ ವಿರೋಧಿಗಳು. ದೇವಾಲಯ ನಿಮ್ಮ ಆಸ್ತಿಯಲ್ಲ, ರಾಜ್ಯದ ಜನರ ಆಸ್ತಿ ಎಂದು ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.

ದೇವರು, ದೇವಾಲಯಗಳನ್ನೇ ಮಾರಲು ಹೋರಟಿರುವ ನೀವು ಎಂತಹ ಕ್ರೂರ ಕೃತ್ಯಕ್ಕೆ ಕೈ ಹಾಕಿದ್ದೀರಿ. ಮುಂದಿನ ತಿಂಗಳು 4 ರಂದು ನಾವು ಪಕ್ಷದ ನಾಯಕರ ಸಭೆಯಲ್ಲಿ ಈ ವಿಚಾರವಾಗಿ ಚರ್ಚೆ ಮಾಡಿ ಒಮ್ಮತದ ನಿರ್ಧಾರಕ್ಕೆ ಬರುತ್ತೇವೆ.

ದೇವಾಲಯಗಳನ್ನು ಭಕ್ತಾದಿಗಳಿಗೆ ನೀಡುತ್ತಿದ್ದೇವೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ‘ಕಬ್ಬಾಳಮ್ಮ ದೇವಾಲಯದಲ್ಲಿ ಏನಾಗುತ್ತಿತ್ತು, ನಾನು ಅದರ ಜವಾಬ್ದಾರಿ ತೆಗೆದುಕೊಂಡ ಮೇಲೆ ಅಲ್ಲಿ ಎಷ್ಟು ಅಭಿವೃದ್ಧಿಯಾಗಿದೆ. ನಮ್ಮ ಬನಶಂಕರಿ ದೇವಾಲಯ, ಕಾಡು ಮಲ್ಲೇಶ್ವರ ದೇವಾಲಯಗಳು ಸರ್ಕಾರದ ನಿಯಂತ್ರಣದಲ್ಲಿವೆ. ಕಳೆದ ಬಾರಿ ಅವರು ಸಮಿತಿ ರಚಿಸಿದರು. ಅದು ಏನಾಯ್ತು? ಎಂಬುದನ್ನು ನೋಡಿ.

ಶಿಕ್ಷಣ ಸಂಸ್ಥೆಗಳ ಹೆಸರಲ್ಲಿ ಕೋಟ್ಯಂತರ ರೂಪಾಯಿಯನ್ನು ಸರ್ಕಾರ ಸಂಘ ಪರಿವಾರದವರಿಗೆ ನೀಡಿದೆ. ಈಗ ದೇವಾಲಯಗಳನ್ನು ಹಸ್ತಾಂತರಿಸುತ್ತಿದ್ದಾರೆ. ಇದಕ್ಕೆ ನಾವು ಅವಕಾಶ ನೀಡುವುದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯದ ಹಿತಾಸಕ್ತಿ, ಹಿಂದೂಗಳು ಹಾಗೂ ಧಾರ್ಮಿಕ ವಿಚಾರಗಳ ಸಂಬಂಧ ಕೈಗೊಂಡಿರುವ ಜನವಿರೋಧಿ ನಿರ್ಧಾರಗಳನ್ನು ವಾಪಸ್ ತೆಗೆದುಕೊಳ್ಳುತ್ತೇವೆ ಎಂದರು.

ಮತಾಂತರ ನಿಷೇಧ ಕಾಯ್ದೆ ಜಾರಿಗೆ ವಿಶೇಷ ಟಾಸ್ಕ್ ಫೋರ್ಸ್ ರಚನೆ ವಿಚಾರವಾಗಿ ಕೇಳಿದ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, “ಅದು ಸಾಧ್ಯವಿಲ್ಲ. ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ತರಲು ಮುಂದಾಗಿದೆ. ಈ ರಾಜ್ಯದಲ್ಲಿ ಕಾನೂನು ಇದೆ. ಸರ್ಕಾರ ನಿಲುವಿನ ವಿರುದ್ಧ ಜನರ ಮುಂದೆ ಹೋಗಿ ಹೋರಾಡುತ್ತೇವೆ. ನಾವು ಅಧಿಕಾರಕ್ಕೆ ಬಂದ ನಂತರ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುತ್ತೇವೆ” ಎಂದರು.

ಆರ್ ಎಸ್ಎಸ್ ನಾಯಕರನ್ನು ಓಲೈಸಲು ಈ ರೀತಿ ಮಾಡುತ್ತಿದ್ದಾರಾ ಎಂಬ ಪ್ರಶ್ನೆಗೆ, ‘ಬಿಜೆಪಿ ನಾಯಕತ್ವದ ವಿಚಾರದಲ್ಲಿ ನಾನು ಮಾತನಾಡುವುದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಿ, ನಮ್ಮವರನ್ನೆಲ್ಲ ಕರೆದುಕೊಂಡು ಹೋಗಿ ಸರ್ಕಾರ ಮಾಡಿದ್ದಾರೆ. ಆದರೆ ಇಂತಹ ನಿರ್ಧಾರಗಳನ್ನು ರಾಜ್ಯದ ಜನ ಯಾವ ಕಾರಣಕ್ಕೂ ಕ್ಷಮಿಸುವುದಿಲ್ಲ, ದೇವರೂ ಕ್ಷಮಿಸುವುದಿಲ್ಲ’ ಎಂದು ಉತ್ತರಿಸಿದರು.

ಡಿ.ಕೆ. ಶಿವಕುಮಾರ್ ಅವರು ಬೆಕ್ಕಿನ ಕನಸಲ್ಲಿ ಇಲಿ ಕಂಡಿದ್ದಾರೆ ಎಂಬ ಸಿಎಂ ಹೇಳಿಕೆ ಬಗ್ಗೆ ಮಾಧ್ಯಮದವರಿಗೆ ಉತ್ತರಿಸಿದ ಡಿಕೆಶಿ, “ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿರುವ ಸಂತೋಷದಲ್ಲಿ ತೇಲಾಡುತ್ತಿದ್ದಾರೆ. ನಾವು ಬೇಸರ ಮಾಡಿಕೊಳ್ಳುವುದಿಲ್ಲ. ಅವರಿಗೆ ಜನ ಅಗತ್ಯ ಸಮಯದಲ್ಲಿ ಉತ್ತರ ಕೊಡುತ್ತಿದ್ದು, ಮುಂದೆಯೂ ನೀಡುತ್ತಾರೆ. ಅವರು ನನ್ನ ಬಗ್ಗೆ ಏನಾದರೂ ಹೇಳಲಿ, ನನ್ನನ್ನು ಬೆಕ್ಕು, ಇಲಿ, ಹುಲಿ ಯಾವುದರ ಕಣ್ಣಿಗಾದರೂ ಹಾಕಲಿ. ಸಗಣಿಗೆ ಗರಿಕೆ ಚುಚ್ಚಿ ಪಿಳ್ಳಾರತಿ ಮಾಡಿದರೆ ಗಣೇಶ ಆಗುತ್ತದೆ. ಇಲಿ ಗಣೇಶನ ವಾಹನ. ಆದರೆ ಈ ಸರ್ಕಾರದವರು ಹಿಂದೂ ದೇವಾಲಯ ಮಾರಾಟ ಮಾಡಲು ಹೊರಟಿರುವುದು ಸರಿಯಲ್ಲ’ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT