ರಾಜಕೀಯ

ವಿಧಾನ ಪರಿಷತ್ ಚುನಾವಣೆ: ಹಾಸನದಿಂದ ಭವಾನಿ ರೇವಣ್ಣ ಜೆಡಿಎಸ್ ಅಭ್ಯರ್ಥಿ ಸಾಧ್ಯತೆ

Nagaraja AB

ಹಾಸನ: ಸ್ಥಳೀಯ ಸಂಸ್ಥೆಗಳಲ್ಲಿ ಬಹುಮತ ಹೊಂದಿದ್ದರೂ ಕಳೆದ ಚುನಾವಣೆಯಲ್ಲಿ ಸ್ವಕ್ಷೇತ್ರದಲ್ಲಿ ಪಕ್ಷ ಸೋತಿದ್ದರಿಂದ ಈ ಬಾರಿಯ ವಿಧಾನಪರಿಷತ್ ಚುನಾವಣೆಯನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿರುವ ಜೆಡಿಎಸ್ ಸರ್ವೋಚ್ಚ ನಾಯಕ ಹೆಚ್. ಡಿ. ದೇವೇಗೌಡ, ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸಲು ಶುಕ್ರವಾರ ಸಂಜೆ ಶಾಸಕರು, ಹಿರಿಯ ಮುಖಂಡರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಹಾಗೂ ಪಕ್ಷದ ಹಿರಿಯ ಕಾರ್ಯಕರ್ತರೊಂದಿಗೆ ಸರಣಿ ಸಭೆ ನಡೆಸಿದರು.

ಭವಾನಿ ರೇವಣ್ಣ ಮತ್ತು ಸುರಾಜ್ ರೇವಣ್ಣ ಟಿಕೆಟ್ ಆಕಾಂಕ್ಷಿಗಳಾಗಿದ್ದು, ಭವಾನಿ ರೇವಣ್ಣ ಅವರ ಹೆಸರನ್ನು ಪಕ್ಷದ ಅಧ್ಯಕ್ಷ ಹೆಚ್. ಡಿ. ದೇವೇಗೌಡ ಅಂತಿಮಗೊಳಿಸುವ ಸಾಧ್ಯತೆಯಿರುವುದಾಗಿ ಉನ್ನತ ಮೂಲಗಳಿಂದ ತಿಳಿದುಬಂದಿದೆ. ಮಾಜಿ ಸಚಿವ ಎಚ್. ಡಿ. ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರ ಕಡೆಗೆ ಜೆಡಿಎಸ್ ಪಕ್ಷದ ಬಹುತೇಕ ಹಿರಿಯ ಮುಖಂಡರು ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ.

ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ, ಶ್ರವಣ ಬೆಳಗೊಳ ಶಾಸಕ ಸಿ.ಎನ್. ಬಾಲಕೃಷ್ಣ ಮತ್ತು ಬೇಲೂರು ಕ್ಷೇತ್ರದ ಶಾಸಕ ಕೆ. ಎಸ್. ಲಿಂಗೇಶ್,  ಸಕಲೇಶಪುರ ಶಾಸಕ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ಕೂಡಾ ಭವಾನಿ ರೇವಣ್ಣ ಅವರಿಗೆ ಪಕ್ಷದ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದು, ಸಂಸದರ ಅಧಿಕೃತ ಕ್ವಾಟ್ರರ್ಸ್ ನಲ್ಲಿ ನಡೆದ ಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. 

ರಾತ್ರಿಯವರೆಗೂ ವೈಯಕ್ತಿಕವಾಗಿ ಅಭಿಪ್ರಾಯ ಸಂಗ್ರಹಿಸಲು ದೇವೇಗೌಡರು ಚಿಂತನೆ ನಡೆಸಿದ್ದಾರೆ. ಶಾಸಕರು ಮತ್ತು ಪಕ್ಷದ ಹಿರಿಯ ಮುಖಂಡರ ಸಭೆ ಮಧ್ಯರಾತ್ರಿಯವರೆಗೂ ನಡೆಯಲಿದ್ದು, ಶನಿವಾರ ಪಕ್ಷದ ಅಭ್ಯರ್ಥಿಯನ್ನು ಹೆಚ್. ಕೆ. ಕುಮಾರಸ್ವಾಮಿ ಪ್ರಕಟಿಸುವ  ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ. 

ಇದಕ್ಕೂ ಮುನ್ನ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅರಸೀಕೆರೆ ಶಾಸಕ ಕೆಎಂ ಶಿವಲಿಂಗೇಗೌಡ, ಸಭೆಯ ಬಗ್ಗೆ ಮಾಹಿತಿ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ಪಕ್ಷದ ರಾಜ್ಯಾಧ್ಯಕ್ಷ ಹೆಚ್ .ಕೆ. ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮುಖಂಡರ ನಡುವಿನ ಸಮನ್ವಯದ ಕೊರತೆಯಿಂದ ದೇವೇಗೌಡರ ತವರು ಕ್ಷೇತ್ರದಲ್ಲಿ ಕೌನ್ಸಿಲ್ ಚುನಾವಣೆಯಲ್ಲಿ ಪಕ್ಷ ಸೋಲಬೇಕಾಯಿತು ಎಂದು ಅವರು ಹೇಳಿದರು. ಅಂತಿಮವಾಗಿ ಪಕ್ಷದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಅಂತಿಮ ನಿರ್ಧಾರವನ್ನು ಪಕ್ಷದ ವರಿಷ್ಠ ಹೆಚ್. ಡಿ. ದೇವೇಗೌಡವರಿಗೆ ಸಭೆಯಲ್ಲಿ ನೀಡಲಾಯಿತು. 

ದೇವೇಗೌಡರ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಿದರೆ ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಗೆಲುವು ಸಾಧಿಸಲಿದೆ. ಒಂದು ವೇಳೆ ಬೇರೆ ಮುಖಂಡರಿಗೆ ಟಿಕೆಟ್ ನೀಡಿದರೆ ಮತಗಳು ವಿಭಜನೆಯಾಗಲಿವೆ ಎಂದು ಹೆಸರು ಹೇಳಲು ಇಚ್ಚಿಸದ ಮಾಜಿ ಶಾಸಕರೊಬ್ಬರು ಹೇಳಿದರು. 

SCROLL FOR NEXT