ಡಿಕೆಶಿ-ಎಚ್ ಡಿಕೆ 
ರಾಜಕೀಯ

ಕೃಷಿ ಕಾಯ್ದೆ ವಾಪಸ್: ಸರ್ವಾಧಿಕಾರಿ ಧೋರಣೆಗೆ ದೊಡ್ಡ ಪೆಟ್ಟು- ಡಿಕೆಶಿ; ಮತ ಫಸಲಿನ ಹೈಡ್ರಾಮಾ ಎಂದ ಎಚ್ ಡಿಕೆ

ದೇಶದ ಅನ್ನದಾತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ವಿವಾದಾತ್ಮಕ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯುವ ನಿರ್ಧಾರ ಪ್ರಕಟಿಸಿರುವುದು ದೇಶದ ಅನ್ನದಾತ ಮತ್ತು ಕಾಂಗ್ರೆಸ್ ಹೋರಾಟಕ್ಕೆ ಸಂದ ಚಾರಿತ್ರಿಕ ಜಯ'...

ನವದೆಹಲಿ: ದೇಶದ ಅನ್ನದಾತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ವಿವಾದಾತ್ಮಕ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯುವ ನಿರ್ಧಾರ ಪ್ರಕಟಿಸಿರುವುದು ದೇಶದ ಅನ್ನದಾತ ಮತ್ತು ಕಾಂಗ್ರೆಸ್ ಹೋರಾಟಕ್ಕೆ ಸಂದ ಚಾರಿತ್ರಿಕ ಜಯ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, 'ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ್ದ ಮೂರು ಕೃಷಿ ಕಾಯ್ದೆಗಳು ಎಪಿಎಂಸಿ ಮಾರುಕಟ್ಟೆಗೆ ಮಾರಕವಾಗಿದ್ದವು. ಬೆಂಬಲ ಬೆಲೆಗೆ ಕಾನೂನು ರಕ್ಷಣೆ ನೀಡಿರಲಿಲ್ಲ. ದೇಶದ ಕೃಷಿ ಕ್ಷೇತ್ರದಲ್ಲಿ ಖಾಸಗಿಯವರ ಪ್ರವೇಶ, ಒಪ್ಪಂದ ಕೃಷಿ ಸೇರಿದಂತೆ ಇತರೆ ಅಂಶಗಳು ರೈತರ ಭವಿಷ್ಯವನ್ನೇ ಸಮಾಧಿ ಮಾಡುತ್ತಿದ್ದವು ಎಂದಿದ್ದಾರೆ.

ಈ ಹಿನ್ನೆಲೆಯಲ್ಲಿ ದೇಶದ ಅನ್ನದಾತರು ಚಳಿ, ಮಳೆ, ಬಿಸಿಲೆನ್ನದೆ ಬೀದಿಗಿಳಿದು ಸುದೀರ್ಘ ಹೋರಾಟ ಮಾಡಿದ್ದರು. ಈ ಹೋರಾಟ ಹತ್ತಿಕ್ಕಲು ಸರ್ಕಾರ ಅಧಿಕಾರ, ಪೊಲೀಸ್ ಬಲ ಪ್ರಯೋಗಿಸಿತ್ತು. ಇದ್ಯಾವುದಕ್ಕೂ ಜಗ್ಗದ ರೈತರು ತಮ್ಮ ಭವಿಷ್ಯ ರಕ್ಷಣೆಗೆ ಬದ್ಧವಾಗಿ ನಿಂತರು ಎಂದರು.

ರೈತರ ಪ್ರಾಣತ್ಯಾಗ
ಈ ಹೋರಾಟದಲ್ಲಿ ಸುಮಾರು 600ಕ್ಕೂ ಹೆಚ್ಚು ರೈತರು ಪ್ರಾಣ ತ್ಯಾಗ ಮಾಡಿದ್ದು, ಕೇಂದ್ರ ಸರ್ಕಾರ ಇದೀಗ ಅನ್ನದಾತನ ಮುಂದೆ ಮಂಡಿಯೂರಿದೆ. ಅನ್ನದಾತನನ್ನು ಎದುರುಹಾಕಿಕೊಂಡು ಉಳಿದವರಿಲ್ಲ. ಅಂದು ಬ್ರಿಟೀಷರು ರೈತರ ಮೇಲೆ ದಬ್ಬಾಳಿಕೆ ನಡೆಸಿ ದೇಶದಿಂದ ಕಾಲ್ಕಿತ್ತರು. ಇಂದು ಬಿಜೆಪಿ ಅದೇ ತಪ್ಪು ಮಾಡಿ ಬುದ್ಧಿ ಕಲಿಯಲು ಹೊರಟಿದೆ.

ರೈತರ ಹಿತದೃಷ್ಟಿಯಿಂದ ಕಾಂಗ್ರೆಸ್ ಕೂಡ ರೈತರ ಈ ಹೋರಾಟಕ್ಕೆ ಬೆಂಬಲ ಸೂಚಿಸಿತ್ತು. ಕಾಂಗ್ರೆಸ್ ಪಕ್ಷ ಸಂಸತ್ತಿನ ಉಭಯ ಸದನಗಳು, ರಾಜ್ಯ ವಿಧಾನ ಮಂಡಲಗಳಲ್ಲಿ ಈ ಕರಾಳ ಕೃಷಿ ಕಾಯ್ದೆ ವಿರುದ್ಧ ಹೋರಾಟ ಮಾಡಿತ್ತು. ಬೀದಿಗಿಳಿದು ಪ್ರತಿಭಟನೆ ಮಾಡಿತ್ತು. ಈ ಕರಾಳ ಕಾಯ್ದೆಯ ಹಿಂದೆ ಅಡಗಿರುವ ಕೇಂದ್ರ ಸರ್ಕಾರದ ಷಡ್ಯಂತ್ರವನ್ನು ಜನರಿಗೆ ತಿಳಿಸುವ ಪ್ರಯತ್ನ ಮಾಡಿತ್ತು. ಕೇಂದ್ರ ಸರ್ಕಾರ ಇನ್ನುಮುಂದಾದರೂ ತನ್ನ ಸರ್ವಾಧಿಕಾರಿ ಮನಃಸ್ಥಿತಿಯಿಂದ ಹೊರಬಂದು ಏಕಪಕ್ಷೀಯ ನಿರ್ಧಾರ ಕೈಗೊಳ್ಳುವುದನ್ನು ನಿಲ್ಲಿಸಿ ದೇಶ ಹಾಗೂ ಅನ್ನದಾತನ ಹಿತದೃಷ್ಟಿಯಿಂದ ಎಲ್ಲರ ಜತೆ ಚರ್ಚೆ ಮಾಡಬೇಕೆಂದು ಶಿವಕುಮಾರ್ ಆಗ್ರಹಿಸಿದ್ದಾರೆ.

ಮತ ಫಸಲಿನ ಹೈಡ್ರಾಮಾ ಆಗದಿರಲಿ: ಎಚ್ ಡಿಕೆ
ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಸೇರಿದಂತೆ ದೇಶದ ನಾನಾ ಕಡೆ ರೈತರ ವಿರುದ್ಧ ನಡೆದ ದೌರ್ಜನ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಕ್ಷಮೆ ಯಾಚಿಸಬೇಕಿತ್ತು ಎಂದು ಜೆಡಿಎಸ್ ಮುಖಂಡ ಎಚ್ . ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.
 
ಈ ಕುರಿತು ಸರಣಿ ಟ್ವಿಟ್ ಮಾಡಿರುವ ಅವರು ಕೊನೆಗೂ ರೈತರ ಒತ್ತಡಕ್ಕೆ ಸರ್ಕಾರ ಮಣಿದಿದೆ ಅದರೂ ಇದೊಂದು ಸ್ವಾಗತಾರ್ಹ ಬೆಳವಣಿಗೆ ಎಂದರು.

ರೈತರ ಜತೆ ಚರ್ಚೆ ನಡೆಸದೇ, ಈ ಕಾಯ್ದೆಗಳ ಏಕಪಕ್ಷೀಯ ಜಾರಿ, ಈಗ ಏಕಾಏಕಿ ರದ್ದತಿ ಅನೇಕ ಪ್ರಶ್ನೆ ಹುಟ್ಟುಹಾಕಿದೆ. ನಿಜಕ್ಕೂ ಕರಾಳ ಕಾಯ್ದೆಗಳ ವಾಪಸಾತಿ ರೈತರ ವಿಜಯ ಮತ್ತು ಐತಿಹಾಸಿಕ. ಒಂದು ವರ್ಷಕ್ಕೂ ಹೆಚ್ಚು ಕಾಲ ದೆಹಲಿಯ ಗಡಿಯಲ್ಲಿ ಅನ್ನದಾತರು ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಅವರ ಮೇಲೆ ಅಮಾನವೀಯ ಕ್ರೌರ್ಯ ನಡೆಸಿತು. ಅನೇಕ ಅಮೂಲ್ಯ ಜೀವಗಳ ನೆತ್ತರು ಹರಿಯಿತು. ಚಳಿ, ಮಳೆ, ಬಿಸಿಲೆನ್ನದೇ ರೈತರು ಹೋರಾಡಿದರು. ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇದೆ. ಕೇಂದ್ರದ ನಿರ್ಧಾರ ಪ್ರಾಮಾಣಿಕವಾಗಿರಲಿ. ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ. ಚುನಾವಣೆ ಮುಗಿದ ಮೇಲೆ ಆ ಕರಾಳ ಕಾಯ್ದೆಗಳನ್ನು ಬೇರೆ ರೂಪದಲ್ಲಿ ಮತ್ತೆ ಜಾರಿ ಮಾಡುವುದಿಲ್ಲ ಎಂದು ಪ್ರಧಾನಿ ಭಾಷಣದಲ್ಲಿ ರೈತರಿಗೆ ವಾಗ್ದಾನ ಮಾಡಬೇಕಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT