ರಾಜಕೀಯ

ಬಿಜೆಪಿ ಜನ ಸ್ವರಾಜ್ ಯಾತ್ರೆ ವಿರುದ್ಧ ಕಾಂಗ್ರೆಸ್ ನಾಯಕರ ಕಿಡಿ

Manjula VN

ತುಮಕೂರು: ಕರ್ನಾಟಕ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಡಿಸೆಂಬರ್ 10 ರಂದು ಚುನಾವಣೆ ನಡೆಯಲಿದ್ದು, ಚುನಾವಣೆಗೆ ಮುನ್ನ ತುಮಕೂರಿನಲ್ಲಿ ಭಾನುವಾರ ನಡೆದ ಪಕ್ಷದ ಸಮಾವೇಶದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಒಗ್ಗಟ್ಟನ್ನು ಪ್ರದರ್ಶಿಸಿತು.

ರ್ಯಾಲಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಸೇರಿದಂತೆ ಪಕ್ಷದ ಮುಖಂಡರು ಭಾಗವಹಿಸಿದ್ದರು.

ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಅತಿವೃಷ್ಟಿಯಿಂದ ಬೆಳೆ ನಷ್ಟವಾಗಿ ರಾಜ್ಯದ ಜನತೆ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಬಿಜೆಪಿ ನಡೆಸುತ್ತಿರುವ ಜನಸ್ವರಾಜ್ ಯಾತ್ರೆಯನ್ನು ಟೀಕಿಸಿದರು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟಾಗಿ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಹೇಳಿದರು.

ವಿವಾದಿತ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಪ್ರಧಾನಿ ನರೇಂದ್ರ ಮೋದಿಯವರ ಘೋಷಣೆ ಕುರಿತು ಮಾತನಾಡಿ, ಈ ನಿರ್ಧಾರವನ್ನು ಮೊದಲೇ ತೆಗೆದುಕೊಂಡಿದ್ದರೆ 700 ಕ್ಕೂ ಹೆಚ್ಚು ರೈತರ ಜೀವಗಳನ್ನು ಉಳಿಸಬಹುದಿತ್ತು ಎಂದರು. ಇದೇ ವೇಳೆ ಪ್ರತಿಭಟನೆಯಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಈಗಿನ ಸರ್ಕಾರ ಅಭಿವೃದ್ಧಿ ಕಾಮಗಾರಿಗಳ ವಿಚಾರದಲ್ಲಿ 35 ರಿಂದ 40 ಪರ್ಸೆಂಟ್ ಕಮಿಷನ್ ಗುತ್ತಿಗೆದಾರರಿಂದ ಪಡೆಯುತ್ತಿದೆ. ಈ ಬಗ್ಗೆ ಗುತ್ತಿಗೆದಾರರ ಅಸೋಸಿಯೇಷನ್ ಪ್ರಧಾನಿ ಮತ್ತು ರಾಷ್ಟ್ರಪತಿಗಳಿಗೆ ಪತ್ರ ಬರೆದಿದೆ. ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯೇ ಎಂದು ತರಾಟೆಗೆ ತೆಗೆದುಕೊಂಡರು.

ಡಿಕೆ.ಶಿವಕುಮಾರ್ ಅವರು ಮಾತನಾಡಿ, ರಾಜ್ಯದಲ್ಲಿ ಬೊಮ್ಮಾಯಿ ಸರಕಾರ ಭೂಸುಧಾರಣೆ ಕಾಯಿದೆ ಮತ್ತು ಎಪಿಎಂಸಿ ಕಾಯಿದೆಗೆ ತಿದ್ದುಪಡಿ ತಂದಿರುವುದನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿದರು.ಆಲ್ಲದೆ, ಕೃಷಿ ಕಾನೂನುಗಳ ವಿರುದ್ಧದ ಹೋರಾಟದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ತಲಾ ಐದು ಎಕರೆ ನೀಡಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

SCROLL FOR NEXT