ರಾಜಕೀಯ

ಮುಂದಿನ ವಾರ ದೆಹಲಿಗೆ ಸಿಎಂ ಬೊಮ್ಮಾಯಿ: ಕುತೂಹಲಕ್ಕೆ ಎಡೆಮಾಡಿಕೊಟ್ಟ ಬೆಳವಣಿಗೆ

Manjula VN

ಬೆಂಗಳೂರು: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಪ್ರಚಾರ ತಂತ್ರ ರೂಪಿಸುವಲ್ಲಿ ಬಿಝಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಮುಂದಿನ ವಾರ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡುತ್ತಿದ್ದು ಈ ಬೆಳವಣಿಗೆ ರಾಜ್ಯ ಬಿಜೆಪಿ ವಲಯದಲ್ಲಿ ಸಾಕಷ್ಟು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. 

ದೆಹಲಿ ಭೇಟಿ ವೇಳೆ ಬೊಮ್ಮಾಯಿಯವರು ಕೇಂದ್ರೀಯ ಬಿಜೆಪಿ ನಾಯಕರು ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದಾರೆಂದು ಹೇಳಲಾಗುತ್ತಿದೆ. ಆದರೆ, ದೆಹಲಿ ಭೇಟಿಗೆ ಇನ್ನೂ ಅಂತಿಮ ದಿನಾಂಕ ನಿರ್ಧಾರವಾಗಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ ಮೂಲಗಳು ಮಾಹಿತಿ ನೀಡಿವೆ. 

ಕಳೆದ ಜುಲೈ ತಿಂಗಳಿನಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಬೊಮ್ಮಾಯಿಯವರು ಸಾಕಷ್ಟು ಬಾರಿ ದೆಹಲಿಗೆ ಭೇಟಿ ನೀಡಿದ್ದರು. ಈ ತಿಂಗಳ ಅಕ್ಟೋಬರ್ 7 ಮತ್ತು 8ರಂದೂ ಕೂಡ ದೆಹಲಿಗೆ ಭೇಟಿ ನೀಡಿ, ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದರು. 

ಉಷ್ಣ ವಿದ್ಯುತ್ ಸ್ಥಾವರಗಳಿಗೆ ಹೆಚ್ಚಿನ ಕಲ್ಲಿದ್ದಲು ಸರಬರಾಜುಗಳನ್ನು ಪಡೆಯಲು ಪ್ರಲ್ಹಾದ್ ಜೋಶಿ ಸೇರಿದಂತೆ ಹಲವಾರು ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದರು. ಆದರೆ, ಮುಖ್ಯಮಂತ್ರಿಗಳು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರನ್ನು ಮಾತ್ರ ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. 

ಉಪಚುನಾವಣೆ ಸೇರಿದಂತೆ ರಾಜ್ಯದ ರಾಜಕೀಯ ಬೆಳವಣಿಗೆಗಳನ್ನು ಚರ್ಚಿಸಲು ಪಕ್ಷದ ಅಧ್ಯಕ್ಷ ನಡ್ಡಾ ಅವರನ್ನು ಭೇಟಿ ಮಾಡಲು ಸಿಎಂ ದೆಹಲಿಗೆ ಹೋಗುತ್ತಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. 

ಬೊಮ್ಮಾಯಿ ಮುಖ್ಯಮಂತ್ರಿಯಾಗಿ ರಾಜ್ಯದಲ್ಲಿ ಬಿಜೆಪಿ ತನ್ನ ಮೊದಲ ಪ್ರಮುಖ ಚುನಾವಣೆಯನ್ನು ಎದುರಿಸುತ್ತಿದೆ. ಪಕ್ಷವು ತನ್ನ ಗೆಲುವಿನ ಓಟವನ್ನು ಮುಂದುವರಿಸುವುದನ್ನು ಖಚಿತಪಡಿಸಿಕೊಳ್ಳಲು ಉತ್ಸುಕವಾಗಿದೆ, ಆದರೆ ಪ್ರತಿಪಕ್ಷ ಕಾಂಗ್ರೆಸ್ ಕೂಡ ಸ್ಥಾನಗಳನ್ನು ಗೆಲ್ಲಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ.

SCROLL FOR NEXT