ರಾಜಕೀಯ

ರಾಜ್ಯದಲ್ಲಿ ರಸಗೊಬ್ಬರ ಕೊರತೆ, ರೈತ ಸಮುದಾಯ ಕಂಗಾಲು: ಸಿದ್ದರಾಮಯ್ಯ

Lingaraj Badiger

ಬೆಂಗಳೂರು: ರಾಜ್ಯದಲ್ಲಿ ರಸಗೊಬ್ಬರ ಕೊರತೆಯಿಂದ ರೈತ ಸಮುದಾಯ ಕಂಗಾಲಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ದೂರಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಲಭ್ಯವಿರುವ ಅಲ್ಪಪ್ರಮಾಣದ ರಸಗೊಬ್ಬರ ಕೂಡಾ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಗೊಬ್ಬರದ ಕೊರತೆಯಿಂದ ರೈತರು ಕಂಗಾಲಾಗಿದ್ದಾರೆ. ಬಿ.ಎಸ್. ಯಡಿಯೂರಪ್ಪ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಹಾವೇರಿಯಲ್ಲಿ ಗೊಬ್ಬರ ಕೇಳಿದವವರ ಮೇಲೆ ಗುಂಡು ಹಾರಿಸಲಾಯಿತು ಪರಿಣಾಮ ಇಬ್ಬರು ಅಮಾಯಕ ರೈತರು ಬಲಿಯಾದರು ಎಂದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚುನಾವಣಾ ಪ್ರಚಾರದಲ್ಲಿ ಮೈಮರೆಯದೆ ತಕ್ಷಣ ರಸಗೊಬ್ಬರ ಕೊರತೆ ನೀಗಿಸಲು ಕ್ರಮ ಕೈಗೊಳ್ಳಬೇಕು. ಜೊತೆಗೆ ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರನ್ನು ಹುಡುಕಿ ತನ್ನಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕಚ್ಚಾ ವಸ್ತುಗಳ ಬೆಲೆ ಮತ್ತು ಕಸ್ಟಮ್ಸ್ ಸುಂಕ ಹೆಚ್ಚಳ ರಸಗೊಬ್ಬರ ಕೊರತೆಗೆ ಕಾರಣ ಎನ್ನಲಾಗಿದೆ. ಮೂರು ತಿಂಗಳ ಹಿಂದೆಯೇ ಪರಿಸ್ಥಿತಿಯ ಅರಿವಿದ್ದರೂ ರಾಜ್ಯ ಸರ್ಕಾರ ಕಣ್ಣುಮುಚ್ಚಿ ಕುಳಿತಿದ್ದು ಅಂತಿಮವಾಗಿ ಇದರ ಪರಿಣಾಮವನ್ನು ರೈತರು ಅನುಭವಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

SCROLL FOR NEXT