ರಾಜಕೀಯ

ಸೆ.4ರಂದು ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆ

Manjula VN

ಬೆಂಗಳೂರು: ಖಾತೆ ಹಂಚಿಕೆ ಬಳಿಕ ಎದುರಾಗಿದ್ದ ಎಲ್ಲಾ ಭಿನ್ನಮತಗಳನ್ನು ಶಮನಗೊಳಿಸರುವ ಸಿಎಂ ಬಸವರಾಜ ಬೊಮ್ಮಾಯಿಯವರು ಶನಿವಾರ (ಸೆಪ್ಟೆಂಬರ್ 4) ಸಚಿವ ಸಂಪುಟ ಸಭೆ ನಡೆಸುತ್ತಿದ್ದು, ಸಭೆಯಲ್ಲಿ ಈ ಹಿಂದೆ ಅಸಮಾಧಾನಗೊಂಡಿದ್ದ ಸಚಿವ ಆನಂದ್ ಸಿಂಗ್ ಅವರೂ ಕೂಡ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ಸೆಪ್ಟೆಂಬರ್ 4 ರಂದು ನಡೆಯುವ ಸಭೆಯಲ್ಲಿ ಹಲವು ಯೋಜನೆಗಳಿಗೆ ಅನುಮೋದನೆ ಹಾಗೂ ಹಲವು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆಗಳಿವೆ. ಪ್ರಮುಖವಾಗಿ ಸ್ವಾತಂತ್ರ್ಯ ದಿನಾಚರಣೆ ದಿನದಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದ ಹೊಸ ಯೋಜನೆಗಳು, ಬಾಕಿ ಉಳಿದಿರುವ ಯೋಜನೆಗಳಿಗೆ ಅನುಮೋದನೆ ನೀಡುವ ಸಾಧ್ಯತೆಗಳಿವೆ. 

ಕೆಲ ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ದೆಹಲಿಗೆ ಭೇಟಿ ನೀಡಿದ್ದರು. ಈ ವೇಳೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಹಾಗೂ ರಾಜ್ಯ ಕಾನೂನು ತಂಡವನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಈ ಕುರಿತಂತೆಯೂ ಬೊಮ್ಮಾಯಿಯವರು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ಸಂಪುಟ ಸಭೆ ಬಳಿಕ ಸೆಪ್ಟೆಂಬರ್ 7 ಮುಖ್ಯಮಂತ್ರಿಗಳು ರಾಷ್ಟ್ರರಾಜಧಾನಿ ದೆಹಲಿಗೆ ಭೇಟಿ ನೀಡಲಿದ್ದು, ಈ ವೇಳೆ ಕೇಂದ್ರೀಯ ನಾಯಕರನ್ನು ಭೇಟಿ ಮಾಡಲಿದ್ದಾರೆ. ಭೇಟಿ ವೇಳೆ ಆನಂದ್ ಸಿಂಗ್ ಅವರ ಖಾತೆ ಕ್ಯಾತೆ ಕುರಿತಂತೆ ಮಾತುಕತೆ ನಡೆಸಲಿದ್ದಾರೆ. 

ಇದೇ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರ ಪುತ್ರಿ ವಿವಾಹ ನೆರವೇರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಬಿಜೆಪಿ ನಾಯಕರೂ ಕೂಡ ದೆಹಲಿಗೆ ಭೇಟಿ ನೀಡಲಿದ್ದಾರೆ. 

ಈ ನಡುವೆ ರಾಜ್ಯಕ್ಕೆ ಇದೇ ಗುರುವಾಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭೇಟಿ ನೀಡುತ್ತಿದ್ದು, ಈ ವೇಳೆ ದಾವಣಗೆರೆಯಲ್ಲಿ ನಿರ್ಮಾಣ ಮಾಡಿರುವ ಪೊಲೀಸ್ ವಸತಿ ಶಾಲೆಯನ್ನು ಉದ್ಘಾಟನೆ ಮಾಡಲಿದ್ದಾರೆ. ಇದೇ ವೇಳೆ ಖಾತೆ ಹಂಚಿಕೆ ಕುರಿತು ಅಸಮಾಧಾನಗೊಂಡಿರುವ ಬಿಜೆಪಿ ಸಚಿವರ ಜೊತೆಗು ಮಾತುಕತೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

SCROLL FOR NEXT