ರಾಜಕೀಯ

ಬಿಜೆಪಿ ಬಲವರ್ಧನೆಗೆ ರಾಜ್ಯ ಪ್ರವಾಸ, ವಿಜಯೇಂದ್ರ ಸದ್ಯಕ್ಕೆ ಯಾವುದೇ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಬಿ ಎಸ್ ಯಡಿಯೂರಪ್ಪ

Sumana Upadhyaya

ಮೈಸೂರು: ಇನ್ನು 15 ದಿನ ಕಳೆದ ಮೇಲೆ ನಾನು, ನಮ್ಮ ಪಕ್ಷದ ರಾಜ್ಯಾಧ್ಯಕ್ಷರು, ಶಾಸಕರು, ಸಂಸದರು ಮತ್ತು ಪ್ರಮುಖ ನಾಯಕರು ರಾಜ್ಯಾದ್ಯಂತ ಪ್ರವಾಸ ಮಾಡುತ್ತೇವೆ. ಪಕ್ಷದ ಬಲವರ್ಧನೆ ದೃಷ್ಟಿಯಿಂದ ಈ ಪ್ರವಾಸ ಮಹತ್ವದ್ದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಂಬರುವ ಚುನಾವಣೆ ದೃಷ್ಟಿಯಿಂದ ಪಕ್ಷವನ್ನು ದೊಡ್ಡ ಮಟ್ಟದಲ್ಲಿ ಸಂಘಟನೆ ಮಾಡುವುದು ಮುಖ್ಯವಾಗಿದೆ. ಹೀಗಾಗಿ ಈ ಪ್ರವಾಸ ಮುಖ್ಯವಾಗಿದೆ ಎಂದರು.

ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ದೇವಾಲಯಗಳನ್ನು ತೆರವು ಮಾಡುವುದು ಸರಿಯಲ್ಲ. ಈಗಾಗಲೇ ಮುಖ್ಯಮಂತ್ರಿಗಳು ಯಾವುದೇ ಕಾರಣಕ್ಕೂ ದೇವಾಲಯ ತೆರವುಗೊಳಿಸಬಾರದು ಎಂದು ಸೂಚನೆ ನೀಡಿದ್ದಾರೆ. ದೇವಾಲಯಗಳನ್ನು ಧ್ವಂಸ ಮಾಡಬಾರದು ಎಂದು ನಾನು ಕೂಡ ಆಗ್ರಹಿಸುತ್ತೇನೆ. ಅದಕ್ಕೆ ಸರ್ಕಾರ ಅವಕಾಶ ಕೊಡುವುದಿಲ್ಲ ಎಂದು ಮುಖ್ಯಮಂತ್ರಿಗಳು ಈಗಾಗಲೇ ಸೂಚನೆ ನೀಡಿದ್ದಾರೆ ಎಂದರು.

ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ, ರಾಜ್ಯದ ಜನರ ಅಭಿಪ್ರಾಯ ಕೂಡ ಅದೇ ಆಗಿದೆ, ಈಗ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಒಂದು ತಿಂಗಳಾಗಿದೆಯಷ್ಟೆ, ಮುಂದಿನ ದಿನಗಳಲ್ಲಿ ನೋಡೋಣ ಎಂದರು.

ವಿಜಯೇಂದ್ರ ಸದ್ಯಕ್ಕೆ ಯಾವುದೇ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಅವರು ಯಾವ ಕ್ಷೇತ್ರದಲ್ಲಿ ಮುಂದೆ ನಿಲ್ಲುತ್ತಾರೆ ಅನ್ನೋದು ನಿರ್ಧಾರವಾಗಿಲ್ಲ. ಸದ್ಯ ವಿಜಯೇಂದ್ರ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದಾರೆ. ನಾನು ಮತ್ತು ರಾಜ್ಯಾಧ್ಯಕ್ಷರು ಸೇರಿ ರಾಜ್ಯ ಪ್ರವಾಸ ಮಾಡುತ್ತೇವೆ, ಮುಂದಿನ ದಿನಗಳಲ್ಲಿ ಕೇಂದ್ರ ನಾಯಕರು ತೆಗೆದುಕೊಳ್ಳುವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಮೈಸೂರಿನಲ್ಲಿಂದು ಸುತ್ತೂರು ಮಠಕ್ಕೆ ತೆರಳಿ ಶ್ರೀಗಳ ಆಶೀರ್ವಾದ ಪಡೆದು ನಂತರ ಶಾಸಕ ಎ ಎಸ್ ರಾಮದಾಸ್ ಹಮ್ಮಿಕೊಂಡಿದ್ದ ಮೋದಿ ಯುಗ ಉತ್ಸವ ಕಾರ್ಯಕ್ರಮದಲ್ಲಿ ಡೋಲು ಬಾರಿಸುವ ಮೂಲಕ ಚಾಲನೆ ನೀಡಿದರು. ಈ ವೇಳೆ ಮಕ್ಕಳಿಗೆ ಸಿಹಿ ತಿನ್ನಿಸಿ ಭಾಗ್ಯಲಕ್ಷ್ಮಿ ಬಾಂಡ್ ವಿತರಿಸಿದರು. ಡೋಲು ಬಾರಿಸಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

SCROLL FOR NEXT