ರಾಜಕೀಯ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿ ಅವೈಜ್ಞಾನಿಕ: ಲೋಕಸಭೆಯಲ್ಲಿ ಸುಮಲತಾ ಆರೋಪ

Lingaraj Badiger

ನವದೆಹಲಿ: ಬೆಂಗಳೂರು–ಮೈಸೂರು ದಶಪಥ ಹೆದ್ದಾರಿ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ನಡೆಸಲಾಗಿದೆ ಮತ್ತು ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ ಅವರು ಬುಧವಾರ ಲೋಕಸಭೆಯಲ್ಲಿ ಆರೋಪಿಸಿದ್ದಾರೆ.

ಇಂದು ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸುಮಲತಾ, ಮೈಸೂರು ಮತ್ತು ಬೆಂಗಳೂರು ನಡುವಿನ ಪ್ರಯಾಣದ ಅವಧಿ ಕಡಿತ ಮಾಡುವ ಉದ್ದೇಶದಿಂದ ಈ ಕಾಮಗಾರಿ ನಡೆಸಲಾಗುತ್ತಿದೆ. ಮಂಡ್ಯ ಕ್ಷೇತ್ರದ ಮೂಲಕ ಈ ಯೋಜನೆ ಹಾದು ಹೋಗುತ್ತದೆ. ಆದರೆ, ಇತ್ತೀಚೆಗೆ ಸುರಿದ ಮಳೆಯಿಂದಾಗಿ ಸಾಕಷ್ಟು ಅನಾಹುತ ಸಂಭವಿಸಿದೆ ಎಂದರು.

ರಸ್ತೆಗೆ ಹಾಕಲಾಗಿದ್ದ ಡಾಂಬರಿಕರಣ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. ಗುಣಮಟ್ಟದ ರಸ್ತೆ ನಿರ್ಮಿಸಿಲ್ಲ. ಅವೈಜ್ಷಾನಿಕ ವಿಧಾನ ಅಳವಡಿಸಲಾಗಿದೆ. ರಸ್ತೆ ಬದಿ ಚರಂಡಿಗಳ ಕಾಮಗಾರಿ ಅವೈಜ್ಞಾನಿಕವಾಗಿ ಮಾಡಲಾಗಿದೆ. ಇದರಿಂದ ರೈತರ ಸಾವಿರಾರು ಎಕರೆ ಬೆಳೆ ಹಾನಿಯಾಗಿದೆ. ಅಧಿಕಾರಿಗಳು ಕಾಮಗಾರಿ ಬಗ್ಗೆ ಮಾಹಿತಿ ಪಡೆದು ಕ್ರಮ ಕೈಗೊಳ್ಳಬೇಕು. ಕೇಂದ್ರದ ಸಚಿವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮಂಡ್ಯ ಸಂಸದೆ ಒತ್ತಾಯಿಸಿದರು.

SCROLL FOR NEXT