ರಾಜಕೀಯ

ಶಿಕಾರಿಪುರಕ್ಕೆ ವಿಜಯೇಂದ್ರ ಹುರಿಯಾಳು: ಸೇಫ್ ಕ್ಷೇತ್ರ ಹುಡುಕುತ್ತಿರುವ ಸಿದ್ದರಾಮಯ್ಯ ಕಣ್ಣು ವರುಣಾ ಮೇಲೆ?

Shilpa D

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪುತ್ರ ಬಿವೈ ವಿಜಯೇಂದ್ರ ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಶುಕ್ರವಾರ ಘೋಷಿಸಿರುವ ಹಿನ್ನೆಲೆಯಲ್ಲಿ, ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಮೈಸೂರಿನ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

ಸಿದ್ದರಾಮಯ್ಯ ಅವರು ‘ಸುರಕ್ಷಿತ’ ವಿಧಾನಸಭಾ ಸ್ಥಾನಕ್ಕಾಗಿ ಹುಡುಕಾಟ ನಡೆಸುತ್ತಿರುವ ಸಮಯದಲ್ಲಿ ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಲು ಬಿಎಸ್‌ವೈ ನಿರ್ಧರಿಸಿದ್ದಾರೆ. ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಈ ಮೊದಲೇ ಘೋಷಿಸಿದ್ದಾರೆ.

ಸಿದ್ದರಾಮಯ್ಯ 2018 ರಲ್ಲಿ 2,000 ಮತಗಳ ಅಂತರದಿಂದ ಗೆದ್ದಿದ್ದ ಬಾದಾಮಿ ಕ್ಷೇತ್ರದಿಂದ ಸ್ಥಳಾಂತರಗೊಳ್ಳಲು ಬಯಸಿದ್ದಾರೆ ಹೀಗಾಗಿ ಅವರ ಬೆಂಬಲಿಗರು ನೆರೆಯ  ಕ್ಷೇತ್ರಗಳಲ್ಲಿ ಬಂದು ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ.

ಜೆಡಿಎಸ್‌ನಿಂದ ಉಚ್ಛಾಟಿತರಾಗಿರುವ ಹಾಲಿ ಶಾಸಕ ಕೆ.ಶ್ರೀನಿವಾಸಗೌಡ ಅವರಿಂದ ತೆರವಾಗಿರುವ ಕೋಲಾರ ವಿಧಾನಸಭಾ ಕ್ಷೇತ್ರವನ್ನು ಪರಿಗಣಿಸುವ ಬಗ್ಗೆಯೂ ಮಾತುಕತೆ ನಡೆದಿದೆ.

2023ರ ವಿಧಾನಸಭೆ ಚುನಾವಣೆ ತಮ್ಮ ಕೊನೆಯ ಚುನಾವಣೆ ಎಂದು ಹೇಳಿರುವ ಸಿದ್ದರಾಮಯ್ಯ ಅವರು ಮೈಸೂರಿಗೆ ಮರಳುವ ಆಸೆ ಹೊಂದಿದ್ದಾರೆ. ಅವರ ಪುತ್ರ ಡಾ.ಯತೀಂದ್ರ ಅವರು ವರುಣಾ ಕ್ಷೇತ್ರದ ಹಾಲಿ ಶಾಸಕರಾಗಿರುವುದರಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ.

2018ರ ವಿಧಾನಸಭೆ ಚುನಾವಣೆಯಲ್ಲಿ ವರುಣಾದಿಂದ ಸ್ಪರ್ಧಿಸಲು ಬಯಸಿದ್ದ ವಿಜಯೇಂದ್ರ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ್ದು, ಡಾ.ಯತೀಂದ್ರ ಗೆಲುವಿಗೆ ನೆರವಾಗಿತ್ತು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

SCROLL FOR NEXT