ಕುಮಾರಸ್ವಾಮಿ 
ರಾಜಕೀಯ

ಬಿಜೆಪಿಗೆ ಅಧಿಕಾರ ದಾಹ ಹೆಚ್ಚಾಗಿದೆ, ಬೇರೆ ಪಕ್ಷ ಅಧಿಕಾರದಲ್ಲಿರುವುದನ್ನು ಸಹಿಸಿಕೊಳ್ಳುತ್ತಿಲ್ಲ: ಮಹಾ ಆಪರೇಷನ್ ಕಮಲಕ್ಕೆ ಕುಮಾರಸ್ವಾಮಿ ಕಿಡಿ

ಬಿಜೆಪಿಗೆ ಅಧಿಕಾರ ದಾಹ ಹೆಚ್ಚಾಗಿದೆ. ಬೇರೆ ಪಕ್ಷ ಅಧಿಕಾರದಲ್ಲಿ ಇರುವುದನ್ನು ಬಿಜೆಪಿಗೆ ಸಹಿಸುವುದಕ್ಕೆ ಆಗುತ್ತಿಲ್ಲ ಎಂದು ಮಹಾರಾಷ್ಟ್ರ ಆಪರೇಷನ್ ಕಮಲಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ...

ಬೆಂಗಳೂರು: ಬಿಜೆಪಿಗೆ ಅಧಿಕಾರ ದಾಹ ಹೆಚ್ಚಾಗಿದೆ. ಬೇರೆ ಪಕ್ಷ ಅಧಿಕಾರದಲ್ಲಿ ಇರುವುದನ್ನು ಬಿಜೆಪಿಗೆ ಸಹಿಸುವುದಕ್ಕೆ ಆಗುತ್ತಿಲ್ಲ ಎಂದು ಮಹಾರಾಷ್ಟ್ರ ಆಪರೇಷನ್ ಕಮಲಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ, ಮಹಾರಾಷ್ಟ್ರದಲ್ಲಿ ಆಪರೇಶನ್ ಕಮಲ ವಿಚಾರಕ್ಕೆ ಸಂಬಂಧಿಸಿದಂತೆ ಖಾರವಾಗಿ ಪ್ರತಿಕ್ರಿಯಿಸಿದರು.

ಬಿಜೆಪಿಯ ಅಧಿಕಾರ ದಾಹ ಎಷ್ಟು ಕೆಟ್ಟದಾಗಿದೆ ಎಂದರೆ, ಮುಂದಿನ ದಿನಗಳಲ್ಲಿ ಸ್ಪಷ್ಟ ಬಹುಮತ ಬಂದ ಸರಕಾರವೂ ಉಳಿಯುವುದು ಅನುಮಾನ. ಈ ಬಿಜೆಪಿ‌ ಪೂರ್ಣ ಬಹುಮತ ಪಡೆದ ಇತರೆ ಯಾವುದೇ ಪಕ್ಷದ ಸರಕಾರಗಳು ಅವಧಿ ಮುಗಿಸುವುದಕ್ಕೂ ಬಿಡುವುದಿಲ್ಲ ಅನ್ನಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೇಲ್ನೋಟಕ್ಕೆ ಉದ್ದವ್ ಠಾಕ್ರೆ ಅವರು ಶಾಸಕರ ವಿಶ್ವಾಸ ಗಳಿಸಿಲ್ಲವೆಂದು ಹೇಳುತ್ತಿದ್ದಾರೆ. ಆದರೆ ಅದರ ಹಿಂದೆ ಇರುವುದು ಬಿಜೆಪಿಯೇ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದರು.

ಕರ್ನಾಟಕದಲ್ಲಿ ನನಗೂ‌ ಇದರ ಅನುಭವ ಆಗಿದೆ. ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲವೆಂದು ನನ್ನ ಮೇಲೂ ಆರೋಪ ಮಾಡಿದರು. ಶಾಸಕರನ್ನು ಸರಿಯಾಗಿ ನಡೆಸಿಕೊಂಡಿಲ್ಲ ಎಂದು ಸುಳ್ಳು ಪ್ರಚಾರ ಮಾಡಿದರು. ನಾನು ಕಾಂಗ್ರೆಸ್ ಶಾಸಕರ ಕ್ಷೇತ್ರದ ಅಭಿವೃದ್ದಿಗೆ 19 ಸಾವಿರ ಕೋಟಿ ಕೊಟ್ಟೆ. ಆ ಪಕ್ಷದ ಶಾಸಕಾಂಗ ಪಕ್ಷದ ನಾಯಕರಿಗೆ ಆ ಮಾಹಿತಿ ಇದ್ದ ಪಟ್ಟಿಯನ್ನೇ ನೀಡಿದ್ದೆ. ಆದರೂ ಶಾಸಕರನ್ನು ಆಪರೇಶನ್ ಕಮಲ ಮಾಡಿ ಸರಕಾರವನ್ನು ತೆಗೆದರು ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಮಹಾರಾಷ್ಟ್ರದ ಬಿಜೆಪಿ ನಡವಳಿಕೆ ಸಂವಿಧಾನಕ್ಕೆ ಮಾಡುತ್ತಿರುವ ಅಪಚಾರ. ಈ ಅನಾಚಾರವನ್ನು ಬಿಜೆಪಿ ದೇಶವ್ಯಾಪಿ ವಿಸ್ತಾರ ಮಾಡುತ್ತಿದೆ. ಸಂವಿಧಾನ ರಕ್ಷಣೆ ಅನ್ನುವುದು ಇವತ್ತು ಉಳಿದಿಲ್ಲ. ಎಷ್ಟೇ ಒಳ್ಳೆಯ ಸರಕಾರ ಮಾಡಿದರೂ ಬೆಲೆ ಇಲ್ಲದಂತೆ ಆಗಿದೆ ಎಂದು ಬಿಜೆಪಿ ವಿರುದ್ದ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಪಠ್ಯಪುಸ್ತಕದ ಬಗ್ಗೆ ಪ್ರತಿಕ್ರಿಯೆ
ಪಠ್ಯಪುಸ್ತಕ ಬಿಕ್ಕಟ್ಟಿಗೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಎಚ್ ಡಿಕೆ, ಪಠ್ಯಪುಸ್ತಕದ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಒಂದು ಕಡೆ ಪಠ್ಯದ ವಿರುದ್ದ ಮಾತಾಡುತ್ತಿದೆ. ಈಗ ಬಿಜೆಪಿ ಸಚಿವರು ಸಿದ್ದರಾಮಯ್ಯ ಸರಕಾರ ಪಠ್ಯ ರಚನೆ ಮಾಡಿದ ವಿರುದ್ದ ಆಪಾದನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಸರಕಾರ ತಪ್ಪು ಮಾಡಿದೆ ಎಂದು ಹೇಳುತ್ತಿದ್ದಾರೆ ಎಂದರು.

ಕುವೆಂಪು ಅವರಿಗೆ ಅಪಮಾನ ಮಾಡಿದ್ದಾರೆಂದು ಕುವೆಂಪು ವೇದಿಕೆ ಅವರು ಎಚ್.ಡಿ.ದೇವೇಗೌಡರಿಗೆ ಅಹ್ವಾನ ಕೊಟ್ಟಿದ್ದರು. ಹಾಗಾಗಿ, ದೇವೇಗೌಡರು ಹೋರಾಟಕ್ಕೆ ಹೋಗಿದ್ದರು. ಎರಡೂ ಸರಕಾರಗಳ ಅವಧಿಯಲ್ಲಿ ಪಠ್ಯಕ್ಕೆ ಏನೆಲ್ಲಾ ಅಪಚಾರ ಆಗಿದೆ ಎಂಬುದನ್ನು ನಾನು ಕೂಡ ಅಧ್ಯಯನ ಮಾಡುತ್ತಿದ್ದೇನೆ ಎಂದರು.

ಶಾಸಕರ ಉಚ್ಚಾಟನೆ ಕೋರ್ ಕಮಿಟಿ ನಿರ್ಧಾರ
ಶಾಸಕರಾದ ಗುಬ್ಬಿ ಶ್ರೀನಿವಾಸ್ ಮತ್ತು ಕೆ.ಶ್ರೀನಿವಾಸಗೌಡ ಉಚ್ಚಾಟನೆ ಮಾಡಿರುವುದು ಕೋರ್ ಕಮಿಟಿ ನಿರ್ಧಾರ. ಪಕ್ಷದ ವಿರುದ್ದ ಅಡ್ಡ ಮತದಾನ ಮಾಡಿದ್ದಕ್ಕೆ ಉಚ್ಚಾಟನೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಈ ಸಂಬಂಧ ಕೋರ್ಟ್ ಗೆ ಹೋಗುವುದು ಅಥವಾ ವಿಧಾನಸಭೆ ಸ್ಪೀಕರ್ ಗೆ ದೂರು ನೀಡುವುದರಿಂದ ಏನು ಆಗದು. ಈಗ ಇರುವ ಪಕ್ಷಾಂತರ ನಿಷೇಧ ಕಾಯ್ದೆ ಯಶಸ್ವಿಯಾಗುವುದಿಲ್ಲ. ಮೊದಲು ಈ ವ್ಯವಸ್ಥೆ ಬದಲಾವಣೆ ಆಗಬೇಕು. ನಮ್ಮ ಸರಕಾರ ಬಂದರೆ ಈ ಕಾನೂನುಗಳಿಗೆ ಬಲ ಕೊಡುವ ಕೆಲಸ ಮಾಡಲಾಗುವುದು ಎಂದು ಕುಮಾರಸ್ವಾಮಿ ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT