ರಾಜಕೀಯ

ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆದ ಜೆಡಿಎಸ್: ಮೈಸೂರಿನಲ್ಲಿ ಬೃಹತ್ ಸಮಾವೇಶದ ಮೂಲಕ ಪ್ರಚಾರ ಆರಂಭಿಸಲು ಮುಂದು!

Manjula VN

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 123 ಸ್ಥಾನ ಗೆಲ್ಲುವ ಗುರಿಯೊಂದಿಗೆ ಪಂಚರತ್ನ ಯಾತ್ರೆ ಆರಂಭಿಸಿರುವ ಜೆಡಿಎಸ್, ಮೈಸೂರಿನಿಂದ ಚುನಾವಣಾ ಪ್ರಚಾರ ಆರಂಭಿಸಲು ಬೃಹತ್ ಸಮಾವೇಶವನ್ನು ಆಯೋಜಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿಯವರು, ಮೈಸೂರಿನಲ್ಲಿ ಪಂಚರತ್ನ ಯಾತ್ರೆ ಸಮಾಪನಗೊಳ್ಳಲಿದ್ದು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಡೆಯಲಿರುವ ರ್ಯಾಲಿಯಲ್ಲಿ ರೈತರೂ ಸೇರಿದಂತೆ ಸುಮಾರು 15 ಲಕ್ಷ ಜನರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಫೆಬ್ರವರಿಯಲ್ಲಿ ಮೈಸೂರು-ಮಂಡ್ಯ ನಡುವೆ ಲಕ್ಷಾಂತರ ಜನರಿಗೆ ವಸತಿ ಕಲ್ಪಿಸಲು ಸೂಕ್ತ ಸ್ಥಳವನ್ನು ಹುಡುಕುತ್ತಿದ್ದೇವೆ. ಜೆಡಿಎಸ್ ಪ್ರತಿ ದಿನ ಒಂದು ಕ್ಷೇತ್ರದಲ್ಲಿ 35 ಗ್ರಾಮಗಳಲ್ಲಿ ಸಂಚರಿಸಿ, ಗ್ರಾಮದಲ್ಲಿ ವಾಸ್ತವ್ಯ ಮಾಡಿ ಪಂಚರತ್ನ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಬದ್ಧತೆಯನ್ನು ಜನರಿಗೆ ತಿಳಿಸಲಿದೆ ಎಂದರು.

ರಾಷ್ಟ್ರೀಯ ಪಕ್ಷಗಳು ಕರ್ನಾಟಕದ ಪಾಲಿಗೆ ಮಾರಕ ಎನ್ನುವುದು ಪದೇಪದೇ ರುಜುವಾತಾಗುತ್ತಿದೆ. ನೆಲ, ಜಲ, ಭಾಷೆ ವಿಚಾರದಲ್ಲಿ ಅವು ಕನ್ನಡಿಗರನ್ನು ಕಾಡುತ್ತಲೇ ಇವೆ. ಕಾವೇರಿ ವಿವಾದದಲ್ಲಿ ಕರ್ನಾಟಕವು ಒಂದು ಶತಮಾನ ಕಾಲ ಸಂಘರ್ಷ ನಡೆಸಿದ್ದಾಯಿತು. ಮೇಕೆದಾಟು ವಿವಾದಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಇನ್ನೂ ತುಪ್ಪ ಸುರಿಯುತ್ತಾ, ಆ ಯೋಜನೆಗೆ ಅನುಮತಿ ನೀಡಲು ಮೀನಾಮೇಷ ಎಣಿಸುತ್ತಿದೆ. ಆಗಲೇ ಪಿನಾಕಿನಿ ನದಿ ವಿಷಯದಲ್ಲಿ ರಾಜ್ಯಕ್ಕೆ ಕಾನೂನು ಕುಣಿಕೆ ಬಿಗಿಯಲು ಬಿಜೆಪಿ ಸರ್ಕಾರ ಹುನ್ನಾರ ನಡೆಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜಕೀಯ ಕಾರಣಕ್ಕಾಗಿ ದಕ್ಷಿಣ ಪಿನಾಕಿನಿ ನದಿ ನೀರಿನ ಹಕ್ಕನ್ನು ಕರ್ನಾಟಕದಿಂದ ಕಸಿಯಲು ಕೇಂದ್ರ ಹವಣಿಸುತ್ತಿದೆ. ಕಾವೇರಿ, ಕೃಷ್ಣಾ, ಮಹದಾಯಿ ಸೇರಿ ವಿವಿಧ ಜಲ ವಿವಾದಗಳಲ್ಲಿ ಕರ್ನಾಟಕವನ್ನು ಕಾಡಿದಂತೆ, ವಿವಾದವೇ ಅಲ್ಲದ ದಕ್ಷಿಣ ಪಿನಾಕಿನಿಯನ್ನೂ ವಿವಾದದ ಕೂಪಕ್ಕೆ ತಳ್ಳಿ ಕನ್ನಡಿಗರನ್ನು ಕಾಡುವ ಹವಣಿಕೆ ಇದಷ್ಟೇ ಎಂದು ಆರೋಪಿಸಿದರು.

ರಾಜಕೀಯ ಲಾಭದ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರವು ನೆಲ, ಜಲ, ಭಾಷೆಯಂತಹ ವಿಷಯಗಳನ್ನು ಇಟ್ಟುಕೊಂಡು ದಕ್ಷಿಣ ರಾಜ್ಯಗಳ ನಡುವೆ ಜಗಳ ಹಚ್ಚಲು ಷಡ್ಯಂತ್ರ ನಡೆಸಿದೆ. ರಾಜ್ಯದ ವಿರೋಧವಿದ್ದರೂ ಕೇಂದ್ರವು ನ್ಯಾಯಾಧಿಕರಣ ರಚನೆ ಮಾಡಲು ಹೊರಟಿದೆ. ಇದು ಸರಿಯಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಕನ್ನಡಿಗರನ್ನು ಮತ್ತೊಮ್ಮೆ ಜಲದಾಸ್ಯಕ್ಕೆ ದೂಡುವುದನ್ನು ನಾವು ಸಹಿಸುವುದಿಲ್ಲ ಎಂದು ಕಿಡಿಕಾರಿರುವ ಅವರು, ಗೋದಾವರಿ-ಕೃಷ್ಣಾ-ಪಿನಾಕಿನಿ-ಕಾವೇರಿ ನದಿ ಜೋಡಣೆ ಯೋಜನೆಯಲ್ಲೂ ಕೇಂದ್ರವು ರಾಜ್ಯಕ್ಕೆ ಸೊನ್ನೆ ಸುತ್ತಿದೆ. ಕಳೆದ ಫೆಬ್ರವರಿ 18 ರಂದು ಸಭೆ ನಡೆಸಿದ ಕೇಂದ್ರ, ಗೋದಾವರಿಯಿಂದ 247 ಟಿಎಂಸಿ ನೀರನ್ನು ಕೃಷ್ಣಾ, ಪೆನ್ನಾರ್ ಮೂಲಕ ಕಾವೇರಿಗೆ ಹರಿಸುವ ಯೋಜನೆಯ ಮಾಹಿತಿ ನೀಡಿತು. ಇಷ್ಟು ನೀರನ್ನು ತೆಲಂಗಾಣ, ಆಂಧ್ರ, ತಮಿಳುನಾಡಿಗೆ ಮಾತ್ರ ಹಂಚಿತು. ಈ ನದಿ ಜೋಡಣೆ ಯೋಜನೆಯಲ್ಲಿ ಕರ್ನಾಟಕ ಪ್ರಮುಖ ಪಾಲುದಾರ ಮತ್ತು ಹಕ್ಕುದಾರ ರಾಜ್ಯ. ಆದರೆ, 247 ಟಿಎಂಸಿಯಲ್ಲಿ ರಾಜ್ಯಕ್ಕೆ ಸಿಕ್ಕಿರುವುದು ಶೂನ್ಯ. ಆ ಸಭೆಯಲ್ಲಿ ರಾಜ್ಯಕ್ಕೆ ಅಪಮಾನ ಮಾಡಲಾಯಿತು ಎಂಬ ಮಾಹಿತಿಯೂ ಬಂದಿತ್ತು ಎಂದು ಹೇಳಿದ್ದಾರೆ.

ಗೋದಾವರಿ-ಕೃಷ್ಣಾ-ಪಿನಾಕಿನಿ-ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ಹನಿ ನೀರನ್ನೂ ಹಂಚಿಕೆ ಮಾಡಿಲ್ಲ ಎಂದರೆ, ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಕರ್ನಾಟಕದ ಮೇಲೆ ಅದೆಷ್ಟು ನಿರ್ಲಕ್ಷ್ಯ ಇದೆ ಎಂಬುದನ್ನು ಅರ್ಥ ಮಾಡಿಕೊಳ್ಳಬಹುದು. ಕನ್ನಡಿಗರು ತಬ್ಬಲಿಗಳಾಗುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸಂಸತ್ತಿನಲ್ಲಿ ಅಲವತ್ತುಕೊಂಡರೂ ಕೇಂದ್ರವು ಕನ್ನಡಿಗರ ಮೇಲೆ ಕಠಿಣ ನೀತಿ ಮುಂದುವರಿಸಿದೆ. ದಕ್ಷಿಣ ಪಿನಾಕಿನಿ ವಿಷಯದಲ್ಲಿ ನ್ಯಾಯಾಧೀಕರಣ ರಚನೆ ಒಪ್ಪುವುದಿಲ್ಲ. ನೆಲ, ಜಲ, ಭಾಷೆ ವಿಚಾರದಲ್ಲಿ ದಕ್ಷಿಣ ರಾಜ್ಯಗಳನ್ನು ಒಡೆದಾಳುವ ಬಿಜೆಪಿಯ ಕುತ್ಸಿತ ರಾಜಕಾರಣಕ್ಕೆ ಅವಕಾಶ ನೀಡುವುದಿಲ್ಲ. ರಾಜ್ಯದ ನೀರಾವರಿ ಹಿತಾಸಕ್ತಿಗಳ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

SCROLL FOR NEXT