ರಾಜಕೀಯ

ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬ ಸಂದಿಗ್ಧದಲ್ಲಿದ್ದೇನೆ: ಸಿದ್ದರಾಮಯ್ಯ

Vishwanath S

ಶಿವಮೊಗ್ಗ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವ ಕ್ಷೇತ್ರವನ್ನು ನವೆಂಬರ್ ಅಂತ್ಯದೊಳಗೆ ನಿರ್ಧರಿಸುವುದಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನು ಹಲವು ಕ್ಷೇತ್ರಗಳ ಪಕ್ಷದ ಕಾರ್ಯಕರ್ತರು ಸ್ಪರ್ಧಿಸುವಂತೆ ಆಹ್ವಾನ ನೀಡುತ್ತಿದ್ದಾರೆ. ಹೀಗಾಗಿ ಸಂದಿಗ್ಧತೆಗೆ ಸಿಲುಕಿದ್ದೇನೆ ಎಂದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಇನ್ನು ಒಂದು ತಿಂಗಳೊಳಗೆ ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ. ಕಳೆದ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದ ಜನರು ನನ್ನನ್ನು ಆಯ್ಕೆ ಮಾಡಿದ್ದರು. ಮತ್ತೊಮ್ಮೆ ಇದೇ ಕ್ಷೇತ್ರದಿಂದ ಸ್ಪರ್ಧಿಸುವಂತೆ ಜನರು ಕೇಳುತ್ತಿದ್ದಾರೆ.

ಕೋಲಾರ, ಕೊಪ್ಪಳ, ಹುಣಸೂರು, ಚಾಮರಾಜನಗರ, ವರುಣಾ ಭಾಗದ ಜನರೂ ತಮ್ಮ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಕೇಳುತ್ತಿದ್ದಾರೆ. ಕೋಲಾರದ ಜನರು ನನ್ನ ಮೇಲೆ ಹೆಚ್ಚು ಒತ್ತಡ ಹಾಕುತ್ತಿದ್ದಾರೆ. ಹೀಗಾಗಿ ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ನಿರ್ಧಾರಕೈಗೊಳ್ಳುವುದಾಗಿ ಹೇಳಿದರು.

ಮಾಜಿ ಸಿಎಂ ಸಿದ್ದರಾಮಯ್ಯನವರೇ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಹುಡುಕಲು ಹೆಣಗಾಡುತ್ತಿದ್ದಾರೆ ಎಂಬ ಬಿಜೆಪಿ ನಾಯಕರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಗುಜರಾತ್ ನವರಾಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ವಿಚಾರ ಬಂದಾಗ ಕೇಸರಿ ಪಕ್ಷದ ನಾಯಕರ ವ್ಯಾಖ್ಯಾನವೇ ಬದಲಾಗುತ್ತದೆ ಎಂದರು.

ಬಿಜೆಪಿ ನಾಯಕರಿಗೆ ಎಲ್ಲ ವಿಷಯಗಳ ಬಗ್ಗೆ ಸ್ಪಷ್ಟತೆ ಇಲ್ಲ. ಹಲವಾರು ಕ್ಷೇತ್ರಗಳ ಜನರು ನನ್ನನ್ನು ಆಹ್ವಾನಿಸುತ್ತಿದ್ದಾರೆ. ಆದರೆ ನಾನು ಕ್ಷೇತ್ರವನ್ನು ಆಯ್ಕೆ ಮಾಡುವ ಸಂದಿಗ್ಧದಲ್ಲಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.

SCROLL FOR NEXT