ರಾಜಕೀಯ

ಹಾಸನ ವಿಧಾನಸಭಾ ಟಿಕೆಟ್ ಫೈಟ್: ಜೆಡಿಎಸ್ ಸಭೆಯಲ್ಲಿ ಗದ್ದಲ, ರೇವಣ್ಣ ಗರಂ

Lingaraj Badiger

ಹಾಸನ: ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಯುವ ಮುಖಂಡ ಎಚ್.ಎಸ್.ಸ್ವರೂಪ್ ಅವರಿಗೆ ಜೆಡಿಎಸ್ ಟಿಕೆಟ್ ನೀಡುವಂತೆ ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಅವರಿಗೆ ಸೋಮವಾರ ಪಕ್ಷದ ಕಾರ್ಯಕರ್ತರು ಒತ್ತಾಯಿಸಿದಾಗ, ಜೆಡಿಎಸ್ ಕಾರ್ಯಕರ್ತರ ಸಭೆ ಗದ್ದಲಕ್ಕೆ ತಿರುಗಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಎಚ್.ಡಿ.ರೇವಣ್ಣ ಅವರು ನಿರಂತರವಾಗಿ ಸ್ವರೂಪ್‌ ಪರ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರನ್ನು ಏಕವಚನದಲ್ಲಿಯೇ ತರಾಟೆಗೆ ತೆಗೆದುಕೊಂಡರು. ಅಲ್ಲದೆ ಅವರಿಗೆ ಸಭಾಂಗಣದಿಂದ ಹೊರಗೆ ಹೋಗುವಂತೆ ಸೂಚಿಸಿದರು.

ಎಚ್.ಡಿ.ರೇವಣ್ಣ ಹೇಳಿಕೆಯಿಂದ ಮತ್ತಷ್ಟು ಆಕ್ರೋಶಗೊಂಡ ಕಾರ್ಯಕರ್ತರು ಸ್ವರೂಪ್ ಪರ ಘೋಷಣೆಗಳನ್ನು ಕೂಗಿದರು ಮತ್ತು ಜೆಡಿಎಸ್ ಕಾರ್ಯಕರ್ತರು ಸಭೆ ಬಹಿಷ್ಕರಿಸಿ ರೇವಣ್ಣ ವಿರುದ್ಧ ಪ್ರತಿಭಟನೆ ನಡೆಸಿದರು. ಈ ಹಿಂದೆಯೂ ಕೂಡ ಹಿರಿಯ ಮುಖಂಡರು ಚುನಾವಣೆ ಸಂದರ್ಭದಲ್ಲಿ ಮಾತ್ರ ಪ್ರಾಮಾಣಿಕ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಂತರ ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದರು.

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಭೆಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಮುಖಂಡರು ಅವಕಾಶ ನೀಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು. 

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ.ರೇವಣ್ಣ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸೇರಿದಂತೆ ಪಕ್ಷದ ಹಿರಿಯ ನಾಯಕರು ಟಿಕೆಟ್ ಅಂತಿಮಗೊಳಿಸಲಿದ್ದು, ಟಿಕೆಟ್ ಘೋಷಣೆ ಮಾಡುವ ಅಧಿಕಾರ ನನಗೆ ಇಲ್ಲ. ಇಂತಹ ಘಟನೆಗಳಿಂದ ನಾನು ಎಂದೂ ಅಸಮಾಧಾನಗೊಂಡಿಲ್ಲ ಎಂದು ಅವರು ಹೇಳಿದರು.

SCROLL FOR NEXT