ರಾಜಕೀಯ

ಕರ್ನಾಟಕ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಅಂತಿಮಗೊಳಿಸಲು ಜೆಪಿ ನಡ್ಡಾ ನೇತೃತ್ವದಲ್ಲಿ ಸಭೆ

Nagaraja AB

ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಗಾಗಿ  ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ನಾಳೆ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದೆ.

ಇದಕ್ಕೂ ಒಂದು ದಿನ ಮುಂಚಿತವಾಗಿ ಶನಿವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿ ಎಸ್ ಯಡಿಯೂರಪ್ಪ ಸೇರಿದಂತೆ ಪ್ರಮುಖ ರಾಜ್ಯ ನಾಯಕರೊಂದಿಗೆ ಸಂಭಾವ್ಯ ಅಭ್ಯರ್ಥಿಗಳ ಕುರಿತು ಚರ್ಚೆ ನಡೆಸಿದರು. 224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 10ರಂದು ಚುನಾವಣೆ ನಡೆಯಲಿದೆ.

ಸಭೆ ಆರಂಭಕ್ಕೂ ಮುನ್ನ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಎಲ್ಲಾ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಚರ್ಚಿಸುತ್ತೇವೆ, ಜಿಲ್ಲೆ ಮತ್ತು ಕ್ಷೇತ್ರವಾರು ವಿವರಗ ಮತ್ತು ಇತ್ತೀಚಿನ ಸಮೀಕ್ಷೆಯ ಫಲಿತಾಂಶ, ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ನಾಯಕರೊಂದಿಗೆ ವಿವರವಾದ ಚರ್ಚೆ ನಡೆಸುತ್ತೇವೆ ಎಂದು ತಿಳಿಸಿದರು. 

ದಕ್ಷಿಣ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಗುರಿ ಹೊಂದಿರುವ ಬಿಜೆಪಿ 224 ಸ್ಥಾನಗಳಲ್ಲಿ ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಒಂದೇ ಬಾರಿಗೆ ಪಟ್ಟಿ ಪ್ರಕಟಿಸಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ಕೆಲವು ಹೆಸರುಗಳನ್ನು ಹೊರತುಪಡಿಸಿ ಉಳಿದವುಗಳನ್ನು ಮಂಡಳಿಯ ಒಪ್ಪಿಗೆ ಪಡೆದ ನಂತರ ಪ್ರಕಟಿಸಬಹುದು. ಭಾನುವಾರ ಸಂಜೆ 5 ಗಂಟೆಗೆ ನಡೆಯಲಿರುವ ಸಂಸದೀಯ ಮಂಡಳಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದರು.

ನವದೆಹಲಿಯ ಜೆಪಿ ನಡ್ಡಾ ನಿವಾಸದಲ್ಲಿ ನಡೆದ ಸಭೆಯಲ್ಲಿ ರಾಜ್ಯ ಚುನಾವಣೆ ಉಸ್ತುವಾರಿಯಾದ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಮನ್ಸುಖ್ ಮಾಂಡವೀಯಾ, ಪಕ್ಷದ ಹಿರಿಯ ಮುಖಂಡ ಅರುಣ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಾಲ್ಗೊಂಡಿದ್ದರು. 

SCROLL FOR NEXT