ರಾಜಕೀಯ

ಮಲ್ಲಿಕಾರ್ಜುನ ಖರ್ಗೆ ಕೈ ಕೆಳಗೆ ಕೆಲಸ ಮಾಡಲು ಇಷ್ಟಪಡುತ್ತೇನೆ: ಸಿದ್ದು ವಿರುದ್ಧ ಹೊಸ ದಾಳ ಉರುಳಿಸಿದ ಡಿಕೆಶಿ 

Lingaraj Badiger

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾಗಲು ಬಯಸಿದರೆ ಆ ಸ್ಥಾನವನ್ನು ಸಂತೋಷದಿಂದ ಬಿಟ್ಟು ಕೊಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಮಲ್ಲಿಕಾರ್ಜುನ ಖರ್ಗೆ ಅವರ ಕೈ ಕೆಳಗೆ ಕೆಲಸ ಮಾಡುವುದನ್ನು ಇಷ್ಟಪಡುತ್ತೇನೆ. ಖರ್ಗೆ ಅವರು ಏನು ಬಯಸುತ್ತಾರೋ ಅದನ್ನು ಈಡೇರಿಸುವ ಕೆಲಸ ನನ್ನದು. ಅವರು ನಮ್ಮ ಪಕ್ಷದ ಆಸ್ತಿ. ರಾಜ್ಯಕ್ಕೆ ಅವರ ಸೇವೆ ಅಗತ್ಯವಿದೆ ಎಂದು ಹೇಳುವ ಮೂಲಕ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಹೊಸ ರಾಜಕೀಯ ದಾಳ ಉರುಳಿಸಿದ್ದಾರೆ.

ಖರ್ಗೆ ಅವರು ನಮ್ಮ ಪಕ್ಷದ ಹಿರಿಯ ನಾಯಕರು. ಅವರಿಗೆ 50 ವರ್ಷಗಳ ರಾಜಕೀಯ ಅನುಭವವಿದೆ. ಈ ಚುನಾವಣೆಯಲ್ಲಿ ನನಗೆ ಹಾಗೂ ಸಿದ್ದರಾಮಯ್ಯ ಅವರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಕರ್ನಾಟಕ ರಾಜಕೀಯದ ಪ್ರತಿಯೊಂದು ಅಂಶವೂ ಅವರಿಗೆ ತಿಳಿದಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ತಾವು ಇಬ್ಬರೂ ಸಿಎಂ ಹುದ್ದೆಯ ಆಕಾಂಕ್ಷಿಗಳು ಎಂದು ಒಪ್ಪಿಕೊಂಡಿದ್ದಾರೆ. 

ಆದಾಗ್ಯೂ, ತಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಪ್ರಜಾಸತ್ತಾತ್ಮಕವಾಗಿ ಸಿಎಂ ಆಯ್ಕೆ ಪ್ರಕ್ರಿಯೆ ಕಾಂಗ್ರೆಸ್​​ನಲ್ಲಿ ನಡೆಯಲಿದೆ ಎಂದು ಹೇಳಿಕೊಂಡಿದ್ದಾರೆ. ಈ ಮಧ್ಯೆ, ತಮ್ಮ ಬೆಂಬಲಿಗರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಟಿಕೆಟ್ ಕೊಡಿಸುವ ಯತ್ನವನ್ನೂ ತೆರೆಮರೆಯಲ್ಲಿ ಮಾಡುತ್ತಿದ್ದಾರೆ. ಈ ಎಲ್ಲ ಬೆಳವಣಿಗೆ ಮಧ್ಯೆಯೇ ಡಿಕೆಶಿ ಅವರು ಖರ್ಗೆ ಪರ ದಾಳ ಉರುಳಿಸಿದ್ದು ಕುತೂಹಲಕ್ಕೆ ಕಾರಣವಾಗಿದೆ.

SCROLL FOR NEXT