ರಾಜಕೀಯ

ಸೋಮಣ್ಣ ಸೇರಿದಂತೆ ಘಟಾನುಘಟಿ ನಾಯಕರಿಂದ ನಾಮಪತ್ರ ಸಲ್ಲಿಕೆ; ಭರ್ಜರಿ ರೋಡ್ ಶೋ, ಶಕ್ತಿ ಪ್ರದರ್ಶನ!

Nagaraja AB

ಬೆಂಗಳೂರು: ವಿಧಾನಸಭಾ ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆಯೇ ರಾಜ್ಯ ರಾಜಕಾರಣ ರಂಗು ಪಡೆದುಕೊಳ್ಳುತ್ತಿದೆ. ವಿವಿಧ ರಾಜಕೀಯ ಪಕ್ಷಗಳ ನಾಯಕರು ಇಂದು ವಿವಿಧೆಡೆ ಭರ್ಜರಿ ರೋಡ್ ಶೋ, ಶಕ್ತಿ ಪ್ರದರ್ಶನ ನಡೆಸುವ ಮೂಲಕ ನಾಮಪತ್ರ ಸಲ್ಲಿಸಿದ್ದಾರೆ. 

ಮೈಸೂರಿನಲ್ಲಿ ವರುಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿ. ಸೋಮಣ್ಣ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನಾ ಇತಿಹಾಸ ಪ್ರಸಿದ್ಧ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಚಾಮುಂಡೇಶ್ವರಿ ತಾಯಿಯ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಪ್ರತಾಪ್ ಸಿಂಹ ಮತ್ತಿತರರು ಉಪಸ್ಥಿತರಿದ್ದರು. ಬೆಂಗಳೂರಿನ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅಶ್ವತ್ಥ ನಾರಾಯಣ ತಮ್ಮ ಉಮೇದುವಾರಿಕೆ ಸಲ್ಲಿಸಿದರು. 

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶರತ್ ಬಚ್ಚೇಗೌಡ ಹೊಸಕೋಟೆ ತಾಲೂಕ್ ಕಚೇರಿಯಲ್ಲಿ ತಮ್ಮ ಉಮೇದುವಾರಿಗೆ ಸಲ್ಲಿಸಿದರು. ಇದಕ್ಕೂ ಮುನ್ನಾ ಸೂಲಿಬೆಲೆ ಹೋಬಳಿಯ ಗಿಡ್ಡಪ್ಪನಹಳ್ಳಿ ಗ್ರಾಮದ ಹಜರತ್ ಚೋಕೋ ಬಿಬೀಮಾ ದರ್ಗಾ ಭೇಟಿ ನೀಡಿ  ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಬೆಂಬಲಿಗರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಈ ಮಧ್ಯೆ ಹೊಸಕೋಟೆ ಬಿಜೆಪಿ ಅಭ್ಯರ್ಥಿಯಾಗಿ ಎಂಟಿಬಿ ನಾಗರಾಜ್ ನಾಮಪತ್ರ ಸಲ್ಲಿಸಿದರು. 

ಹೊಳೆ ನರಸೀಪುರದ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್. ಡಿ. ರೇಪವಣ್ಣ ನಾಮಪತ್ರ ಸಲ್ಲಿಸಿದರು. ಪತ್ನಿ ಭವಾನಿ ಹಾಗೂ ಪುತ್ರ ಸೂರಜ್ ರೇವಣ್ಣ ಅವರಿಗೆ ಸಾಥ್ ನೀಡಿದರು. ಧಾರವಾಡ ಜಿಲ್ಲೆಯ ಕಲಘಟಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂತೋಷ್ ಲಾಡ್ ನಾಮಪತ್ರ ಸಲ್ಲಿಸಿದರು. ಬೆಂಗಳೂರು ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ದಿನೇಶ್ ಗುಂಡೂರಾವ್ ನಾಮಪತ್ರ ಸಲ್ಲಿಸಿದರು. 

ರಾಮನಗರದ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

SCROLL FOR NEXT