ರಾಜಕೀಯ

ಚುನಾವಣೆಗೆ ಎರಡು ವಾರ ಬಾಕಿ: ಮೂರು ಪಕ್ಷಗಳು ಅಬ್ಬರದ ಪ್ರಚಾರ, ಮತದಾರರ ಓಲೈಕೆಗೆ ಕಸರತ್ತು!

Ramyashree GN

ಬೆಂಗಳೂರು: ರಾಜ್ಯದಲ್ಲಿ ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಇನ್ನೂ ಹದಿನೈದು ದಿನಗಳು ಮಾತ್ರ ಬಾಕಿ ಉಳಿದಿದ್ದು, ಮತದಾರರನ್ನು ಓಲೈಸಲು ರಾಜಕೀಯ ನಾಯಕರು ರಾಜ್ಯದಾದ್ಯಂತ ತಮ್ಮ ಪ್ರಚಾರವನ್ನು ತೀವ್ರಗೊಳಿಸಿದ್ದಾರೆ. ಮೂರು ಪಕ್ಷಗಳಿಂದಲೂ ಪ್ರಚಾರ ಕಾರ್ಯ ಭರದಿಂದ ಸಾಗಿದೆ.

ಆಡಳಿತಾರೂಢ ಬಿಜೆಪಿಯು ಇತರ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು, ರಾಜ್ಯ ನಾಯಕರೊಂದಿಗೆ ರಾಜ್ಯದ ವಿವಿಧ ಭಾಗಗಳಲ್ಲಿ ಸಾರ್ವಜನಿಕ ಸಭೆಗಳು, ರೋಡ್ ಶೋ ಮತ್ತು ಸಂವಾದಾತ್ಮಕ ಸಭೆಗಳನ್ನು ನಡೆಸುತ್ತಿದೆ. ಇತ್ತ ಕಾಂಗ್ರೆಸ್ ತನ್ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾರಿಂದ ಎರಡನೇ ದಿನದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದೆ. 

ಜೆಡಿಎಸ್ ಪಕ್ಷದ ಮುಖ್ಯಸ್ಥ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ (89) ಮತ್ತು ಅವರ ಪುತ್ರ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ತಮ್ಮ ಪಕ್ಷದ ಪ್ರಚಾರವನ್ನು ಮುನ್ನಡೆಸುತ್ತಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಂತಹ ನಾಯಕರೊಂದಿಗೆ ಬಿಜೆಪಿ ಇಂದು ತನ್ನ ಸಂಪೂರ್ಣ ಶಕ್ತಿಯನ್ನು ಪ್ರಚಾರದಲ್ಲಿ ಬಳಸಿಕೊಂಡಿದೆ.  ಕರ್ನಾಟಕದ ಅರುಣ್ ಸಿಂಗ್ ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಂಡಿದ್ದಾರೆ. ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಂಡಿದ್ದಾರೆ.

ಆದಿತ್ಯನಾಥ್ ಅವರು ಮಂಡ್ಯ ಮತ್ತು ವಿಜಯಪುರದಲ್ಲಿ ರೋಡ್ ಶೋ ಮತ್ತು ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿದ್ದರೆ, ಚೌಹಾಣ್ ಅವರು ಬೆಳಗಾವಿಯಲ್ಲಿದ್ದರು.  ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ನಡೆಸಿದರು. ಚೇಂಬರ್ ಆಫ್ ಇಂಡಸ್ಟ್ರಿ ಮತ್ತು ಕಾಮರ್ಸ್ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು ಮತ್ತು ಕಲಬುರಗಿಯಲ್ಲಿ ಮಹಿಳಾ ಸಮಾವೇಶ ನಡೆಸಿದರು. ರಾಜನಾಥ್ ಸಿಂಗ್ ಅವರು ಬೆಳಗಾವಿ ಜಿಲ್ಲೆಯ ಕೆಲವು ಭಾಗಗಳಿಗೆ ಭೇಟಿ ನೀಡಿದರು.

ರಾಜ್ಯ ಬಿಜೆಪಿಯ ಪ್ರಬಲ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿದ್ದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಬೆಳಗಾವಿ ಮತ್ತು ಗದಗ ಜಿಲ್ಲೆಯಲ್ಲಿದ್ದಾರು.

ಇನ್ನೊಂದೆಡೆ ಕನ್ನಡ ಚಿತ್ರರಂಗದ ನಟ ಸುದೀಪ್ ಅವರು ಇಂದು ಚಿತ್ರದುರ್ಗ, ಮೊಳಕಾಲ್ಮೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು. 

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ವರ್ಚುವಲ್ ಆಗಿ ಕರ್ನಾಟಕದ ಬಿಜೆಪಿಯ ಸುಮಾರು 50 ಲಕ್ಷ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ.

ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ ರಾಜ್ಯ ಪ್ರವಾಸದ ಎರಡನೇ ದಿನ ಶೃಂಗೇರಿಯ ಶಾರದ ದೇವಸ್ಥಾನಕ್ಕೆ ಭೇಟಿ ನೀಡಿ, ಬಾಳೆಹೊನ್ನೂರಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಅಲ್ಲದೆ, ಹಿರಿಯೂರಿನಲ್ಲಿ ರೋಡ್ ಶೋ ನಡೆಸಿದರು.
ರಾಜ್ಯ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಕ್ರಮವಾಗಿ ವಿಜಯನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಪ್ರಚಾರ ನಡೆಸಿದರು. 

ಕಾಂಗ್ರೆಸ್ ಮುಖಂಡ ಹಾಗೂ ಎಐಸಿಸಿ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಅವರು ಉಡುಪಿ ಜಿಲ್ಲೆಯ ಕಾಪುದಲ್ಲಿ ಮೀನುಗಾರರ ಜತೆ ಸಂವಾದ ನಡೆಸಲಿದ್ದು, ಗುರುವಾರ ಮಂಗಳೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಮೇ 10 ರಂದು ಚುನಾವಣೆ ನಡೆಯಲಿರುವ 224 ಸ್ಥಾನಗಳಿಗೆ ಒಟ್ಟು 2,613 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ.

SCROLL FOR NEXT