ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಇತ್ತೀಚೆಗೆ ಕೆಲವು ಶಾಸಕರು ಸಚಿವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು ಸುದ್ದಿಯಾಗಿತ್ತು. ನಂತರ ದೆಹಲಿಗೆ ಹೈಕಮಾಂಡ್ ಕರೆದು ಸಭೆ ನಡೆಸಿ ಚರ್ಚೆ ನಡೆಸಿದ್ದರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅದಕ್ಕೂ ಮುನ್ನ ಶಾಸಕಾಂಗ ಸಭೆ ಕರೆದಿದ್ದರು.
ಇದೀಗ ಶಾಸಕರ ದೂರು ದುಮ್ಮಾನ ಕೇಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಾಳೆ ಸೋಮವಾರದಿಂದ ಮೂರು ದಿನಗಳ ಕಾಲ ಜಿಲ್ಲಾವಾರು ಶಾಸಕರ ಸಭೆ ನಡೆಸಲಿದ್ದಾರೆ.
ಇತ್ತೀಚೆಗೆ ನಡೆದಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಚಿವರು ತಮ್ಮ ಮಾತಿಗೆ ಕಿಮ್ಮತ್ತು ನೀಡದ ಬಗ್ಗೆ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ತಾವೇ ಖುದ್ದಾಗಿ ಶಾಸಕರ ಅಹವಾಲು ಕೇಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಅದರಂತೆ ಕಾಂಗ್ರೆಸ್ ಶಾಸಕರ ಅಹವಾಲು ಕೇಳಲು ನಾಳೆಯಿಂದ ಸಭೆ ನಡೆಸಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಾಳೆ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆ ಹಾಗೂ ಸಂಜೆ 4 ಗಂಟೆಯಿಂದ 7 ಗಂಟೆವರೆಗೆ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ತುಮಕೂರು, ಯಾದಗಿರಿ, ಚಿತ್ರದುರ್ಗ, ಬಾಗಲಕೋಟೆ, ಬಳ್ಳಾರಿ ಹಾಗೂ ಧಾರವಾಡ ಜಿಲ್ಲೆಗಳ ಉಸ್ತುವಾರಿ ಸಚಿವರು, ಸಂಬಂಧಪಟ್ಟ ಜಿಲ್ಲಾ ಸಚಿವರು, ಶಾಸಕರೊಂದಿಗೆ ಸಭೆ ನಡೆಯಲಿದೆ.