ಸಿದ್ದರಾಮಯ್ಯ 
ರಾಜಕೀಯ

ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ; ಉಪ್ಪು ತಿಂದವರು ನೀರು ಕುಡಿಯಬೇಕಲ್ಲವೇ?: ಸಿದ್ದು ಕೌಂಟರ್

ಕಾಮಗಾರಿಗಳ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ಇರುವ ಕೆಲವು ಸಾಮಾನ್ಯ ಪ್ರಕ್ರಿಯೆಗಳು ಮುಗಿದ ಕೂಡಲೇ ಈ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಬೆಂಗಳೂರು: ಕಾಮಗಾರಿಗಳ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ಇರುವ ಕೆಲವು ಸಾಮಾನ್ಯ ಪ್ರಕ್ರಿಯೆಗಳು ಮುಗಿದ ಕೂಡಲೇ ಈ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಗುತ್ತಿಗೆದಾರರ ಬಾಕಿ ಹಣವನ್ನು ರಾಜ್ಯ ಸರ್ಕಾರ ನೀಡುತ್ತಿಲ್ಲ ಗುತ್ತಿಗೆದಾರರ ಆರೋಪಕ್ಕೆ ಟ್ವಿಟರ್​​ನಲ್ಲಿ ಉತ್ತರ ಕೊಟ್ಟಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ನಾವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್  ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ತನಿಖೆ ಮಾಡಿಸುವ ಭರವಸೆ ನೀಡಿದ್ದೆವು. ನಾಡಿನ ಮತದಾರರು ನಮ್ಮ ಮಾತಿನ ಮೇಲೆ ನಂಬಿಕೆಯಿಟ್ಟು ಬಿಜೆಪಿಯ ಭ್ರಷ್ಟಾಚಾರ, ಕಮಿಷನ್ ಹಾವಳಿ, ತೆರಿಗೆ ಲೂಟಿಯ ವಿರುದ್ಧ ಮತ ಚಲಾಯಿಸಿ 135 ಸ್ಥಾನಗಳಲ್ಲಿ ನಮ್ಮ‌ ಅಭ್ಯರ್ಥಿಗಳನ್ನು ಗೆಲ್ಲಿಸಿ ಸುಭದ್ರ, ಸುಸ್ಥಿರ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ. ಈಗ ಜನರಿಗೆ ನೀಡಿದ್ದ ವಚನ ಪಾಲನೆ ನಮ್ಮ ಕರ್ತವ್ಯವಾಗಿದ್ದು ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ ಎಂದಿದ್ದಾರೆ.

ಬಿಜೆಪಿ ಅವಧಿಯಲ್ಲಿ ಕಾಮಗಾರಿಯನ್ನೇ ನಡೆಸದೆ, ಹಳೆಯ ಕಾಮಗಾರಿಗಳಿಗೆ, ಇನ್ನು ಕೆಲವು ಕಡೆ ಅರ್ಧಂಬರ್ಧ ಕೆಲಸ ಮಾಡಿ ಬಿಲ್ ಹಣ ಪಡೆಯಲಾಗಿದೆ. ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ಸಮಿತಿಯು ಈ ಎಲ್ಲಾ ಹಗರಣಗಳ ಕುರಿತು ತನಿಖೆ ನಡೆಸುತ್ತಿದ್ದು, ತನಿಖೆ ಪೂರ್ಣವಾಗಿ ವರದಿ ಬರುವ ಮೊದಲೇ ಬಾಕಿಯಿರುವ ಬಿಲ್ ಹಣ ಬಿಡುಗಡೆ ಮಾಡುವುದು ಸಮಂಜಸವಲ್ಲ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ನ್ಯಾಯಯುತವಾಗಿ ಕಾಮಗಾರಿ ಮಾಡಿದ ಯಾವೊಬ್ಬ ಗುತ್ತಿಗೆದಾರನಿಗೂ ಅನ್ಯಾಯವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ. ಈ ಬಗ್ಗೆ ಗುತ್ತಿಗೆದಾರರಿಗೆ ಭಯ ಬೇಡ.. ಆದರೆ ಉಪ್ಪು ತಿಂದವರು ನೀರು ಕುಡಿಯಬೇಕಲ್ಲವೇ? ನಮ್ಮ ಸರ್ಕಾರದ ವಿರುದ್ಧ ಮಾಜಿ ಸಚಿವರಾದ ಆರ್. ಅಶೋಕ್ ಅವರು ಮಾಡಿರುವ 15% ಕಮಿಷನ್ ಆರೋಪ ಸತ್ಯಕ್ಕೆ ದೂರವಾದದ್ದೇ ಆದರೂ ಅದರಲ್ಲಿ ಅವರು ಕಮಿಷನ್ ದರವನ್ನು 40% ನಿಂದ 15% ಗೆ ಇಳಿಸಿರುವುದು ಸಂತೋಷದ ವಿಷಯ. ಅಶೋಕ್ ಅವರ ಈ ಹೇಳಿಕೆಯಿಂದ ಬಿಜೆಪಿ ಸರ್ಕಾರಕ್ಕಿಂತ ಕಾಂಗ್ರೆಸ್ ಸರ್ಕಾರ ಉತ್ತಮ ಎಂಬುದು ಅವರ ಮನಸಿನಲ್ಲೇ ಇದೆ ಎನ್ನುವುದನ್ನು ತೋರಿಸುತ್ತದೆ. ನಮ್ಮ ಮೇಲಿನ ಆರೋಪಗಳನ್ನು ಸವಾಲಿನಂತೆ ಸ್ವೀಕರಿಸಿ, ಈ ಅಗ್ನಿಪರೀಕ್ಷೆಯಲ್ಲಿ ಗೆದ್ದುಬಂದು ನಮ್ಮದು ಬರೀ ಉತ್ತಮವಲ್ಲ ಅತ್ಯುತ್ತಮ, ಪಾರದರ್ಶಕ, ಜನಪರ ಸರ್ಕಾರ ಎಂಬುದನ್ನು ನಾಡಿನ ಜನತೆಯೆದುರು ಸಾಬೀತು ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಜ್ಯ ಸರ್ಕಾರ ಗುತ್ತಿಗೆದಾರರಿಗೆ ಬಾಕಿ ಬಿಲ್ ಹಣ ಪಾವತಿ ಮಾಡುತ್ತಿಲ್ಲ. ಹೀಗಾಗಿ ರಾಹುಲ್ ಗಾಂಧಿಯವರು ಮಧ್ಯ ಪ್ರವೇಶಿಸಿ ಬಿಲ್ ಹಣ ಬಿಡುಗಡೆ ಮಾಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒತ್ತಾಯಿಸಿದ್ದಾರೆ. ಆದರೆ ರಾಜ್ಯ ಸರ್ಕಾರಗಳಿಗೆ ಸೂಚನೆ, ನಿರ್ದೇಶನ ನೀಡುವ ಅಧಿಕಾರವಿರುವುದು ದೇಶದ ಪ್ರಧಾನಿಗಳಿಗೆ, ನರೇಂದ್ರ ಮೋದಿ ಅವರು ಮಾಡಬೇಕಿರುವ ಕೆಲಸವನ್ನು ರಾಹುಲ್ ಗಾಂಧಿಯವರಿಗೆ ಮಾಡಿ ಎಂದು ಒತ್ತಾಯಿಸುತ್ತಿರುವುದು ನೋಡಿದರೆ ಸ್ವತಃ ಬೊಮ್ಮಾಯಿಯವರಿಗೆ ಮೋದಿ ಅವರ ಕಾರ್ಯದಕ್ಷತೆ ಬಗ್ಗೆ ನಂಬಿಕೆ ಇದ್ದಂತೆ ಕಾಣುತ್ತಿಲ್ಲ ಎಂದು ಸಿಎಂ ಹೇಳಿದ್ದಾರೆ.

ಈಗಾಗಲೇ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಬಾಕಿ ಬಿಲ್ ಹಣ ಬಿಡುಗಡೆಗೆ ಸಂಬಂಧಿಸಿದಂತೆ ನನ್ನೊಂದಿಗೆ ಚರ್ಚಿಸಿದ್ದಾರೆ, P.O.W ಕಾಮಗಾರಿಗಳ ಬಿಲ್ ಅನ್ನು ಬಿಡುಗಡೆ ಮಾಡುವಂತೆ ಸೂಚನೆಯನ್ನು ನೀಡಲಾಗಿದೆ. ಕಾಮಗಾರಿಗಳ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ಇರುವ ಕೆಲವು ಸಾಮಾನ್ಯ ಪ್ರಕ್ರಿಯೆಗಳು ಮುಗಿದ ಕೂಡಲೇ ಈ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಸಿಎಂ ತಿಳಿಸಿದ್ದಾರೆ.

ಈ ನಡುವೆ ಕೆಲವೇ ಕೆಲವು ಗುತ್ತಿಗೆದಾರರು ತಮ್ಮ ಸ್ವಾರ್ಥ ಹಾಗೂ ದುರುದ್ದೇಶದ ಈಡೇರಿಕೆಗಾಗಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆಂದು ಸ್ವತಃ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರೇ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ ಎನ್ನಲು ಇದಕ್ಕಿಂತ ಬೇರೆ ಯಾವ ಸಾಕ್ಷಿ ಬೇಕು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT