ರಾಜಕೀಯ

ರಾಜ್ಯದಲ್ಲಿ ಮಹಿಳೆ-ಮಕ್ಕಳು ಅಸುರಕ್ಷಿತ: ಬಿಜೆಪಿ ಟೀಕೆ

Manjula VN

ಬೆಂಗಳೂರು: ಕೋಲಾರದ ಮಾಲೂರು ತಾಲೂಕಿನ ಯಲುವಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯದ ಗುಂಡಿ ಸ್ವಚ್ಛ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಹಳಿ ತಪ್ಪಿದ ಆಡಳಿತದ ಪರಿಣಾಮ ಮಹಿಳೆಯರು ಮತ್ತು ಮಕ್ಕಳು ಸುರಕ್ಷಿತವಾಗಿರಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.

ಬೆಳಗಾವಿಯ ಮಹಿಳಾ ದೌರ್ಜನ್ಯದ ಬೆನ್ನಲ್ಲೇ ಮಕ್ಕಳ ಮೇಲಿನ ದೌರ್ಜನ್ಯ ಘಟನೆ ಕೋಲಾರದ ಮಾಲೂರು ಯಲುವಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ನಡೆದಿದೆ. ಪರಿಶಿಷ್ಟ ಸಮುದಾಯಕ್ಕೆ ಸೇರಿದವರೇ ದೌರ್ಜನ್ಯ– ಶೋಷಣೆಗೆ ಗುರಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಮಾಲೂರಿನ ಘಟನೆಯಲ್ಲಿ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ದೈಹಿಕ ದೌರ್ಜನ್ಯ ನಡೆಸಿರುವುದು ಅತ್ಯಂತ ಹೇಯ ಘಟನೆ. ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ಇದರ ನೈತಿಕ ಹೊಣೆ ಹೊರಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರು ಪ್ರತಿಕ್ರಿಯೆ ನೀಡಿ, ‘ರಾಜ್ಯದಲ್ಲಿ ಆಡಳಿತ ಸಂಪೂರ್ಣ ನಿಷ್ಕ್ರಿಯವಾಗಿದ್ದು, ಇದರ ಪರಿಣಾಮ ಹೆಣ್ಣು ಭ್ರೂಣ ಹತ್ಯೆ, ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಿದೆ. ದಲಿತ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛ ಮಾಡಲು ಬಳಕೆ ಮಾಡಲಾಗುತ್ತಿದೆ’ ಎಂದು ಟೀಕಿಸಿದ್ದಾರೆ.

‘ಈ ಸರ್ಕಾರದಲ್ಲಿ ಯಾರಿಗೂ ಭಯ ಇಲ್ಲ. ಸರ್ಕಾರವು ಅಧಿಕಾರಿಗಳ ಮೇಲೆ ಸಂಪೂರ್ಣ ಹಿಡಿತ ಕಳೆದುಕೊಂಡಿದೆ. ರಾಜ್ಯದಲ್ಲಿ ಮಕ್ಕಳು, ಮಹಿಳೆಯರು ಮತ್ತು ದಲಿತರಿಗೆ ಸುರಕ್ಷತೆ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಇದ್ದೂ ಸತ್ತಂತಾಗಿದೆ. ನಿರ್ಜೀವ ಸರ್ಕಾರಕ್ಕೆ ರಾಜ್ಯದ ಜನತೆ ಹಿಡಿ ಶಾಪ ಹಾಕುವಂತಾಗಿದೆ’ ಎಂದು ಕಿಡಿಕಾರಿದ್ದಾರೆ.

SCROLL FOR NEXT