ರಾಜಕೀಯ

ಪಕ್ಷದ ಘನತೆಗೆ ಧಕ್ಕೆ ತರುವ ಚಟುವಟಿಕೆ ಸಹಿಸುವುದಿಲ್ಲ: ಯತ್ನಾಳ್ ಗೆ ಬಿಜೆಪಿ ಖಡಕ್ ವಾರ್ನಿಂಗ್

Lingaraj Badiger

ಬೆಂಗಳೂರು: ಇತ್ತೀಚಿನ ಕೆಲವು ಬೆಳವಣಿಗೆಗಳನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ ಮತ್ತು ಪಕ್ಷದ ಘನತೆಗೆ ಧಕ್ಕೆ ತರುವ ಯಾವುದೇ ಚಟುವಟಿಕೆಗಳನ್ನು ಸಹಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್ ಬುಧವಾರ ಪರೋಕ್ಷವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ.

ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 40,000 ಕೋಟಿ ರೂಪಾಯಿ ಕೋವಿಡ್ ಅವ್ಯವಹಾರ ನಡೆದಿದೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ ನಂತರ ರಾಜೀವ್ ಈ ಹೇಳಿಕೆ ನೀಡಿದ್ದಾರೆ.

ಯತ್ನಾಳ್ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಜೀವ್, ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ಇಂದು ನಡೆದ ಕರ್ನಾಟಕ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಪಕ್ಷದಲ್ಲಿನ ಇತ್ತೀಚಿನ ಎಲ್ಲಾ ಬೆಳವಣಿಗೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಗಿದೆ. ಈ ಬಗ್ಗೆ ನಾಯಕರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

"ಒಳಗಡೆ ನಡೆದ ಚರ್ಚೆಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಪಕ್ಷದ ಘನತೆಗೆ ಧಕ್ಕೆ ತರುವ ಯಾವುದೇ ಚಟುವಟಿಕೆಗಳನ್ನು ಸಹಿಸುವುದಿಲ್ಲ ಎಂದು ನಾನು ಹೇಳಬಲ್ಲೆ. ನಾಲ್ಕು ಗೋಡೆಗಳ ನಡುವೆ ಗಂಭೀರ ಚರ್ಚೆಗಳು ನಡೆದಿವೆ. ನಮ್ಮ ಕೇಂದ್ರ ನಾಯಕತ್ವವು ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ" ಎಂದು ರಾಜೀವ್ ಅವರು ಯಾರ ಹೆಸರನ್ನು ಪ್ರಸ್ತಾಪಿಸದೆ ಹೇಳಿದರು.

ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಕೂಡ ಯತ್ನಾಳ್ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಪಕ್ಷದ ಶಿಸ್ತು ಹಾಗೂ ಎಲ್ಲ ನಾಯಕರ ಚಟುವಟಿಕೆಗಳ ಮೇಲೆ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ನಾಯಕರು ನಿಗಾ ವಹಿಸಿದ್ದು, ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು. 

ಅಶಿಸ್ತು ತೋರುವವರ ವಿರುದ್ಧ ಬಿಜೆಪಿ ನಾಯಕರು ಇನ್ನೂ ಏಕೆ ಕ್ರಮ ಕೈಗೊಂಡಿಲ್ಲ ಎಂದು ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅವರು ಸಹ ಪ್ರಶ್ನಿಸಿದ್ದಾರೆ.

SCROLL FOR NEXT